KSRTC ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಇನ್ನು ಬೆಂಗಳೂರಿನ ಟೌನ್ ಹಾಲ್ ಬಳಿ ಪ್ರತಿಭಟನಾ ಮೆರವಣಿಗೆಗೆ ಮುಂದಾದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ.ರಾ ಗೋವಿಂದು ಸೇರಿದಂತೆ ಅನೇಕ ಕನ್ನಡಪರ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದು ಬಸ್ ನಲ್ಲಿ ಕರೆದೊಯ್ದರು. ಬಳಿಕ ಫ್ರೀಡಂ ಪಾರ್ಕ್ ನಲ್ಲಿ ದೊಡ್ಡ ಹೈಡ್ರಾಮವೇ ನಡೆಯಿತು. ಬಸ್ ನಿಂದ ಕೆಳಗೆ ಇಳಿಯುವುದಿಲ್ಲ ಎಂದು ಪಟ್ಟು ಹಿಡಿದ ವಾಟಾಳ್ ನಾಗರಾಜ್, ರಾಜ್ಯಾದ್ಯಂತ ಬಂದ್ ಯಶಸ್ವಿಯಾಗಿದೆ. ಆದರೆ ರಾಜ್ಯ ಸರ್ಕಾರ ಪೊಲೀಸರ ಮೂಲಕ ಬಂದ್ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಕಿಡಿಕಾರಿದರು. ಪೊಲೀಸ್ ರಾಜ್ಯ, ಪೊಲೀಸ್ ಗೂಂಡಾಗಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಎರಡನೇ ಅಂತಾರಾಷ್ಟ್ರೀಯ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದ ಪ್ರಕ್ರಿಯೆ ಚುರುಕುಗೊಂಡಿದ್ದು, ಕಾರ್ಯಸಾಧ್ಯತಾ ಅಧ್ಯಯನವನ್ನು ನಡೆಸಲು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಬಹುಶಿಸ್ತೀಯ ತಂಡ ಏಪ್ರಿಲ್‌ನಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣಕ್ಕಾಗಿ ಮೂರು ಸ್ಥಳಗಳನ್ನು ಗುರುತಿಸಲಾಗಿದೆ. ಈ ಸ್ಥಳಗಳ ಕಾರ್ಯಸಾಧ್ಯತಾ ಅಧ್ಯಯನ ಮಾಡಲು ಎಎಐ ತಂಡ ಏಪ್ರಿಲ್ 7 ರಿಂದ 9ರ ನಡುವೆ ಬೆಂಗಳೂರಿಗೆ ಭೇಟಿ ನೀಡಲಿದೆ ಎಂದರು. ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಈ ಅಧ್ಯಯನಕ್ಕಾಗಿ ಈಗಾಗಲೇ ಎಎಐಗೆ 1.21 ಕೋಟಿ ರೂ. ಶುಲ್ಕ ಪಾವತಿಸಿದೆ ಎಂದು ಪಾಟೀಲ್ ತಿಳಿಸಿದರು.
ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾವನೆಯನ್ನು ವಿರೋಧಿಸುತ್ತೇವೆ. ಅಲ್ಲದೆ ರಾಜ್ಯಗಳಲ್ಲಿನ ಯಾವುದೇ ಲೋಕಸಭೆ ಸ್ಥಾನಗಳನ್ನು ಕಡಿಮೆ ಮಾಡದಂತೆ ಒಟ್ಟಾಗಿ ಕೆಲಸ ಮಾಡುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಚೆನ್ನೈನಲ್ಲಿ ಇಂದು ಆಯೋಜಿಸಿದ್ದ ಜಂಟಿ ಕ್ರಿಯಾ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ನಾವು ಒಗ್ಗಟ್ಟಿನಿಂದ ನಿಂತು ಇದರ ವಿರುದ್ಧ ಹೋರಾಡುತ್ತೇವೆ. ನಮ್ಮ ಯಾವುದೇ ಸ್ಥಾನಗಳು ಕಡಿಮೆಯಾಗದಂತೆ ಹೋರಾಟ ನಡೆಸುತ್ತೇವೆ ಎಂದರು. ಇನ್ನು ಬಿಜೆಪಿ ಮುಖಂಡರು ಕಪ್ಪು ಬಾವುಟ ಪ್ರದರ್ಶಿಸಿದ್ದನ್ನು ಡಿಕೆ ಶಿವಕುಮಾರ್ ಖಂಡಿಸಿದರು. ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಪ್ರತಿಭಟನೆ ಕುರಿತಂತೆ ಮಾತನಾಡಿದ ಡಿಕೆ ಶಿವಕುಮಾರ್, ಅಣ್ಣಾಮಲೈ ಒಬ್ಬ ಪುವರ್ ಮ್ಯಾನ್. ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗ ಅವರಿಗೆ ನಮ್ಮ ಶಕ್ತಿ ಬಗ್ಗೆ ಗೊತ್ತಿದೆ ಎಂದರು.
ರಾಜ್ಯ ಸರ್ಕಾರ 2024ರ ಏಪ್ರಿಲ್ 1 ರಿಂದ 2025ರ ಫೆಬ್ರವರಿ 28ರ ನಡುವೆ ರಾಜ್ಯದಲ್ಲಿ 14.27 ಕೋಟಿ ರೂ ಮೌಲ್ಯದ 8,427 ಕ್ವಿಂಟಾಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ವಿಧಾನಸಭೆಗೆ ತಿಳಿಸಿದ್ದಾರೆ. ಅನ್ನ ಭಾಗ್ಯ ಯೋಜನೆಗೆ ಉದ್ದೇಶಿಸಲಾದ ಈ ಅಕ್ಕಿಯನ್ನು ಸಾರ್ವಜನಿಕ ವಿತರಣಾ ವ್ಯವಸ್ಥೆಯಿಂದ ಬೇರೆಡೆಗೆ ತಿರುಗಿಸಲಾಗಿದೆ ಎಂದು ಆರೋಪಿಸಿದರು. ಈ ಮೂಲಕ ಫಲಾನುಭವಿಗಳಿಂದ ಖರೀದಿಸಿದ ಅಕ್ಕಿಯನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ. ಈ ಸಂಬಂಧ ಸುಮಾರು 285 ಪ್ರಕರಣಗಳು ದಾಖಲಾಗಿವೆ. ಇದಕ್ಕಾಗಿ ಪ್ರತ್ಯೇಕ ತಂಡವನ್ನು ರಚಿಸಲಾಗಿದೆ. ಬೆಂಗಳೂರಿನ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಆಯುಕ್ತರು ಈ ಬಗ್ಗೆ ನಿಗಾವಹಿಸಿದ್ದಾರೆ ಎಂದರು.
ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಬಿಸಿಲು ತಾಂಡವಾಡುತ್ತಿದ್ದು ಬಿಸಿಲಿನಿಂದಾಗಿ ಜನರು ಬೆಂಡಗಿದ್ದಾರೆ. ಇದರ ಮಧ್ಯೆ ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಸಂಜೆ ದಿಢೀರ್ ಮಳೆಯಾಗಿದ್ದು, ವಾತಾವರಣಕ್ಕೆ ತಂಪೆರೆದಿದೆ. ಬೆಂಗಳೂರಿನ ಮೇಖ್ರಿ ಸರ್ಕಲ್, ಸಂಜಯನಗರ, ಭೂಪಸಂದ್ರ, ಮತ್ತು ಹೆಬ್ಬಾಳ, ಯಲಹಂಕ ಸುತ್ತಮುತ್ತ ಸೇರಿದಂತೆ ಹಲವೆಡೆ ಆಲಿಕಲ್ಲು ಸಹಿತ ಧಾರಾಕಾರ ಮಳೆ ಆಗಿದೆ. ಅರ್ಧ ಗಂಟೆ ಸುರಿದ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಗುಡುಗು ಸಹಿತ ಮಳೆ ಆಗಿದೆ. ಕೋಲಾರ ನಗರ, ಶ್ರೀನಿವಾಸಪುರದಲ್ಲಿ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲೂ ಮಳೆಯಾಗಿದೆ.