ಬೆಂಗಳೂರು: ಮದ್ದೂರಮ್ಮ ಜಾತ್ರಾ ಮಹೋತ್ಸವದಲ್ಲಿ ತೇರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಂದಾಯ ಇಲಾಖೆ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಪ್ರಶಾಂತ್ ಹಾಗೂ ಗ್ರಾಮ ಆಡಳಿತಾಧಿಕಾರಿ ಡಿ. ಕಾರ್ತಿಕ್ ಅವರನ್ನು ಜಿಲ್ಲಾಧಿಕಾರಿ ಅಮಾನತುಗೊಳಿಸಿದ್ದಾರೆ.
ಆನೇಕಲ್ ತಾಲ್ಲೂಕು ಹುಸ್ಕೂರು ಗ್ರಾಮದಲ್ಲಿ ಮಾರ್ಚ್ 22ರಂದು ನಡೆದ ಮದ್ದೂರಮ್ಮ ದೇವಿಯ ಜಾತ್ರಾ ಮಹೋತ್ಸವದ ತೇರು ಬಿದ್ದು ಇಬ್ಬರು ಮೃತಪಟ್ಟು, ಎಂಟು ಮಂದಿ ಗಾಯಗೊಂಡಿದ್ದರು.
ಘಟನೆಯ ನಂತರ, ಸಂಬಂಧಪಟ್ಟ ತಹಶೀಲ್ದಾರ್ ಅವರನ್ನು ವಿಚಾರಣೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು.
ತಹಶೀಲ್ದಾರ್ ಇಬ್ಬರು ಕಂದಾಯ ಇಲಾಖೆಯ ಅಧಿಕಾರಿಗಳ ವಿರುದ್ಧ ಮತ್ತು ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಗೆ ಸೇರಿದ ಕೆಲವು ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಶಿಫಾರಸು ಮಾಡಿದ್ದರು.
ಜಾತ್ರೆಗೆ ಮುನ್ನ ದೇವಾಲಯದ ಸಿಬ್ಬಂದಿ ಮತ್ತು ಇತರ ಸರ್ಕಾರಿ ಇಲಾಖೆಗಳೊಂದಿಗೆ ನಡೆದ ಸಭೆಯಲ್ಲಿ, 80 ಅಡಿ ರಥ ನಿರ್ಮಿಸಲು ನಿರ್ಧರಿಸಲಾಯಿತು. ಇದನ್ನು ಉಲ್ಲಂಘಿಸಿ, ಸುಮಾರು 120 ಅಡಿ ರಥವನ್ನು ನಿರ್ಮಿಸಲಾಗಿದ್ದು, ಇದರ ಪರಿಣಾಮವಾಗಿ ದುರಂತ ಸಂಭವಿಸಿದೆ ಎಂದು ವರದಿಯಲ್ಲಿ ತಿಳಿಸಿದ್ದಾರೆ.
ಈ ಪ್ರಕರಣ ತಡೆಯಲು ಸ್ಥಳದಲ್ಲಿದ್ದ ಕಂದಾಯ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಆನೇಕಲ್ ತಾಲ್ಲೂಕು ತಹಶೀಲ್ದಾರ್ ನೀಡಿದ್ದ ವರದಿ ಆಧಾರದಲ್ಲಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.
ಇದೇ ವೇಳೆ ಈ ಘಟನೆಯಲ್ಲಿ ಕರ್ತವ್ಯಲೋಪ ಎಸಗಿರುವ ಹೆಬ್ಬಗೋಡಿ ಪೊಲೀಸ್ ಠಾಣೆ ಇನ್‌ಸ್ಪೆಕ್ಟರ್, ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹಾಗೂ ಸಂಬಂಧಪಟ್ಟ ಪೊಲೀಸ್ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು’ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ಪತ್ರ ಬರೆದಿದ್ದಾರೆ.