ಡಿ.ಕೆ ಶಿವಕುಮಾರ್ 
ರಾಜ್ಯ

ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗೆ ಹೆಚ್ಚಿಸಲು ಸರ್ಕಾರ ಬದ್ಧ: ಡಿ.ಕೆ ಶಿವಕುಮಾರ್

ನಾವು ಅಣೆಕಟ್ಟನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ ಎಂದರು.

ಬೆಂಗಳೂರು: ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀಟರ್ ಗಳಿಗೆ ಹೆಚ್ಚಿಸಿ, ನಮ್ಮ ಪಾಲಿನ ನೀರು ಬಳಸಿಕೊಳ್ಳಲು ಸರ್ಕಾರ ಬದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, 2010ರಲ್ಲಿ ಕೃಷ್ಣಾ ಜಲ ನ್ಯಾಯಾಧಿಕರಣ ತೀರ್ಪಿನ ಅನ್ವಯ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕಾಗಿದೆ. ಈ ಸಂಬಂಧ ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯವು ನಾಲ್ಕು ರಾಜ್ಯ ಸರಕಾರದ ಪ್ರತಿನಿಧಿಗಳ ಸಭೆ ಕರೆದಿದೆ. ಈ ವಿಚಾರವಾಗಿ ಸಂಬಂಧಪಟ್ಟ ಸಚಿವರನ್ನು ಕರೆಸಿ ಸಭೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ವಿಚಾರವಾಗಿ ಕಾನೂನು ತಜ್ಞರ ಜತೆ ಚರ್ಚೆ ಮಾಡಿದ್ದು, 2 ದಿನಗಳಲ್ಲಿ ಅವರು ತಮ್ಮ ಅಭಿಪ್ರಾಯ ನೀಡಲಿದ್ದಾರೆ. ಇವುಗಳ ಆಧಾರದ ಮೇಲೆ ಕೇಂದ್ರ ಸಚಿವಾಲಯದ ಸಭೆಯಲ್ಲಿ ನಾವು ನಮ್ಮ ಬೇಡಿಕೆ ಪ್ರಸ್ತಾಪಿಸುತ್ತೇವೆ ಎಂದು ತಿಳಿಸಿದರು.

ಈ ಯೋಜನೆ ಜಾರಿಗೆ ಸರ್ಕಾರ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿದ್ದು, ಇದಕ್ಕೆ ಅಗತ್ಯ ಹಣ ಮೀಸಲಿಡಲಾಗುವುದು ಎಂದರು. ಆಂಧ್ರ ಹಾಗೂ ತೆಲಂಗಾಣಕ್ಕೆ 13 ಟಿಎಂಸಿ ನೀರು ಲಾಭವಾಗಲಿದೆ ಎಂದು ಕೇಳಿದಾಗ, "ಅವರಿಗೆ ಎಷ್ಟಾದರೂ ಲಾಭ ಆಗಲಿ, ನಷ್ಟ ಆಗಲಿ. ನಾವು ಅಣೆಕಟ್ಟನ್ನು 524 ಮೀಟರ್ ಗಳಿಗೆ ಎತ್ತರಿಸಬೇಕು. ಅದಕ್ಕೆ ಎಷ್ಟು ಬೇಕೋ ಅಷ್ಟು ಪ್ರಯತ್ನ ನಾವು ಮಾಡುತ್ತೇವೆ" ಎಂದು ತಿಳಿಸಿದರು.

ಟನಲ್ ರಸ್ತೆ ಹಾಗೂ ಮೆಟ್ರೋ ಕಾಮಗಾರಿಗೆ ಹೆಬ್ಬಾಳ ಬಳಿಯ ಜಾಗದ ವಿಚಾರವಾಗಿ ನಡೆದ ಸಭೆಯ ಬಗ್ಗೆ ಕೇಳಿದಾಗ, "ಹೆಬ್ಬಾಳ ಜಂಕ್ಷನ್ ಬಹಳ ಮುಖ್ಯವಾದ ಜಾಗ. ಇಲ್ಲಿ ಮೆಟ್ರೋ ಹಾಗೂ ಟನಲ್ ರಸ್ತೆ ಅವಶ್ಯವಿದೆ. ಹೀಗಾಗಿ ನಾವು ಅಗತ್ಯವಿರುವ ಜಾಗವನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ನಾವು ಯೋಜನೆ ಹಿಂಪಡೆಯಲು ಸಾಧ್ಯವಿಲ್ಲ. ಮೆಟ್ರೋ ಹಾಗೂ ಟನಲ್ ರಸ್ತೆ ಅಧಿಕಾರಿಗಳು ಸೇರಿ ಇದರ ವಿನ್ಯಾಸ ಸಿದ್ಧಪಡಿಸುವಂತೆ ಸೂಚಿಸಿದ್ದೇವೆ. ಇದಕ್ಕೆ ಅಗತ್ಯವಿರುವ ಮಿಲಿಟರಿ ಜಾಗ ಹಾಗೂ ಖಾಸಗಿ ಜಾಗ ಎಷ್ಟು ಬೇಕು ಎಂದು ನಾವು ಚರ್ಚೆ ಮಾಡಿದ್ದೇವೆ. ಟಿಡಿಆರ್ ಅಥವಾ ಎಫ್ ಎ ಆರ್ ಮೂಲಕ ಪರಿಹಾರ ನೀಡಲು ನಾವು ಬದ್ಧವಾಗಿದ್ದೇವೆ. ನಾವು ಈ ಜಾಗ ಬಿಟ್ಟು ಕೊಡಲು ಸಿದ್ದವಿಲ್ಲ‌. ಟನಲ್ ನಿರ್ಮಾಣಕ್ಕೆ ಟೆಂಡರ್ ಕರೆಯಬೇಕಾಗಿದ್ದು, ಇದಕ್ಕೆ ಅಗತ್ಯವಿರುವ ಜಾಗದ ವಿಚಾರವಾಗಿ ನಾವು ಸಭೆ ಮಾಡಿದ್ದೇವೆ" ಎಂದರು.

ಒಳ ಮೀಸಲಾತಿ ವಿಚಾರವಾಗಿ ಸಮೀಕ್ಷೆ ಆರಂಭವಾಗುತ್ತಿರುವ ಬಗ್ಗೆ ಕೇಳಿದಾಗ, "ಒಳ ಮೀಸಲಾತಿಗೆ ಸಮೀಕ್ಷೆ ಮಾಡಲು ಸಚಿವ ಸಂಪುಟ ತೀರ್ಮಾನ ಮಾಡಿದೆ. ಇದಕ್ಕಾಗಿ ಸಮಿತಿ ಮಾಡಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ಗೊಂದಲ ಇಲ್ಲದಂತೆ ಜನರು ತಮ್ಮ ಜಾತಿಗಳನ್ನು ಸ್ಪಷ್ಟವಾಗಿ ಮಾಹಿತಿ ನೀಡಬೇಕು ಎಂದು ಮುಕ್ತ ಅವಕಾಶ ಮಾಡಿಕೊಡಲಾಗಿದೆ" ಎಂದು ತಿಳಿಸಿದರು.

ಒಳ ಮೀಸಲಾತಿ ಬಗ್ಗೆ ಗೊಂದಲಗಳಿವೆ ಎಂದು ಕೇಳಿದಾಗ, "ಯಾವುದೇ ಗೊಂದಲ ಇಲ್ಲ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ನಮ್ಮ ಪಕ್ಷ ಪ್ರಣಾಳಿಕೆಯಲ್ಲಿ ಮಾತು ಕೊಟ್ಟಿದೆ. ಈ ಸಮುದಾಯಗಳಲ್ಲಿ ಕೆಲವು ಪಂಗಡಗಳು ಸರಿಯಾಗಿ ಮಾಹಿತಿ ನೀಡಿಲ್ಲ, ನಮ್ಮ ಸಂಖ್ಯೆ ಹೆಚ್ಚಿದೆ, ನಗರ ಪ್ರದೇಶದಲ್ಲಿ ಇರುವವರು ತಮ್ಮ ಸಮುದಾಯವನ್ನು ಬಹಿರಂಗಪಡಿಸಿಲ್ಲ. ಹೀಗಾಗಿ ಅವರಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಲಾಗುತ್ತಿದೆ" ಎಂದು ಹೇಳಿದರು.

ಕಲಬುರ್ಗಿಯಲ್ಲಿ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿರುವ ಬಗ್ಗೆ ಕೇಳಿದಾಗ, "ಧಾರ್ಮಿಕ ಆಚರಣೆ, ವಿಚಾರಗಳಿಗೆ ಸರ್ಕಾರ, ಅಧಿಕಾರಿಗಳು ಅಡ್ಡಿ ಮಾಡಬಾರದು. ಕೇಂದ್ರ ಸರ್ಕಾರದ ಈ ಕ್ರಮ ಸರಿಯಲ್ಲ" ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಪ್ರಕರಣ: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT