ಬೆಂಗಳೂರು: ‘ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ನಡೆಯಿತು’ಎಂದು ಕನ್ನಡಿಗರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಗಾಯಕ ಸೋನು ನಿಗಮ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ದಾಖಲಿಸಿಕೊಳ್ಳಲು ಬೆಂಗಳೂರು ಪೊಲೀಸ್ ತಂಡ ಮುಂಬೈಗೆ ಪ್ರಯಾಣಿಸಲಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಆವಲಹಳ್ಳಿ ಪೊಲೀಸ್ ಠಾಣೆಯ ಒಬ್ಬ ಇನ್ಸ್‌ಪೆಕ್ಟರ್ ಮತ್ತು ಇತರ ಇಬ್ಬರು ಅಧಿಕಾರಿಗಳನ್ನು ಒಳಗೊಂಡ ತಂಡ, ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂಬೈಗೆ ತೆರಳಲಿದೆ.
ಸೋನು ನಿಗಮ್ ಅವರ ಹೇಳಿಕೆಯನ್ನು ದಾಖಲಿಸಲಾಗುವುದು ಮತ್ತು ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ರೆಕಾರ್ಡ್ ಮಾಡಲಾಗುತ್ತದೆ. ಈ ಸಂಬಂಧ ಹಿರಿಯ ಅಧಿಕಾರಿಗಳು ತಂಡಕ್ಕೆ ನಿರ್ದಿಷ್ಟ ಸೂಚನೆಗಳನ್ನು ನೀಡಿದ್ದು, ಕರ್ನಾಟಕ ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳಿಗೆ ಅನುಗುಣವಾಗಿ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.
ಕರ್ನಾಟಕ ಹೈಕೋರ್ಟ್ ಸೋನು ನಿಗಮ್ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ರಾಜ್ಯ ಪೊಲೀಸರಿಗೆ ನಿರ್ದೇಶನ ನೀಡಿದೆ. ಅಲ್ಲದೆ ಪೊಲೀಸರು ಅವರನ್ನು ವಿಡಿಯೋ ಕರೆಯ ಮೂಲಕ ಪ್ರಶ್ನಿಸಬಹುದು ಅಥವಾ ವಿಚಾರಣೆ ನಡೆಸಲು ಅವರು ಇರುವ ಸ್ಥಳಕ್ಕೆ ಪ್ರಯಾಣಿಸಬಹುದು ಎಂದು ಹೈಕೋರ್ಟ್ ತಿಳಿಸಿದೆ.
ಪೊಲೀಸರು ಈ ಹಿಂದೆ ಸೋನು ನಿಗಮ್ ಅವರಿಗೆ ತಮ್ಮ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಮೇಲ್ ಮೂಲಕ ನೋಟಿಸ್ ಕಳುಹಿಸಿದ್ದರು. ಆದರೆ, ಗಾಯಕ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಗಾಯಕನ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು, ಸೋನು ನಿಗಮ್ ಇದ್ದಲ್ಲಿಗೇ ಹೋಗಿ ವಿಚಾರಣೆ ನಡೆಸಬೇಕು ಅಥವಾ ವಿಡಿಯೋ ಕಾಲ್ ಮೂಲಕ ವಿಚಾರಣೆ ಮಾಡಬೇಕು ಎಂದು ಹೇಳಿದೆ. ಅದರಂತೆ ಆವಲಹಳ್ಳಿ ಪೊಲೀಸರು ಇದೀಗ ವಿಡಿಯೋ ಕಾಲ್ ಬದಲಿಗೆ ನೇರವಾಗಿ ಮುಂಬೈಗೆ ಹೋಗಿ ಸೋನು ನಿಗಮ್ ಅವರನ್ನು ವಿಚಾರಣೆ ಮಾಡಲು ಮುಂದಾಗಿದ್ದಾರೆ.
ಕನ್ನಡಿಗರ ಭಾವನೆಗಳಿಗೆ ನೋವುಂಟು ಮಾಡಿದ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸೋನು ನಿಗಮ್ ವಿರುದ್ಧ ಬೆಂಗಳೂರಿನ ಆವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.