ಸಿದ್ದರಾಮಯ್ಯ 
ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ; ಆದ್ರೂ 2 ವರ್ಷಗಳಲ್ಲಿ 142 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ

ನಾಗಮೋಹನ್ ದಾಸ್ ಸಮಿತಿ ಕೊಟ್ಟಿರುವ ವರದಿಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧದ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

ಹೊಸಪೇಟೆ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಈಡೇರಿಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಲಾಗಿದ್ದ ‘ಸಮರ್ಪಣೆ ಸಂಕಲ್ಪʼ ಸಮಾವೇಶದಲ್ಲಿ ಮಾತನಾಡಿದ ಸಿಎಂ, ಮೊದಲ ಬಾರಿ ಮುಖ್ಯಮಂತ್ರಿಯಾಗಿ ನಾವು ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದಲ್ಲದೆ, ಪ್ರಣಾಳಿಕೆಯಲ್ಲಿ ಘೋಷಿಸದ ಹೊಸದಾದ 30 ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೊಳಿಸಿದ್ದೇವೆ. ಹೀಗಿರುವಾಗ ಬಿಜೆಪಿ ಏಕೆ ತಾನು ಕೊಟ್ಟಿದ್ದ ಭರವಸೆಗಳನ್ನು ಈಡೇರಿಸದೆ, ಜನರ ಎದುರು ಸುಳ್ಳು ಹೇಳಿಕೊಂಡು ತಿರುಗುತ್ತಿದೆ ಎಂದು ಪ್ರಶ್ನಿಸಿದರು.

ರಾಜ್ಯದ ಜನತೆ ನಮ್ಮ ಮಾಲೀಕರು. ನಮ್ಮ ಮಾಲೀಕರಿಗೆ ನಾವು ಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇವೆ. ನಿಮ್ಮ ಆಶೀರ್ವಾದ ಇರುವವರೆಗೂ ಬಿಜೆಪಿಯ ಸುಳ್ಳಿನ ರಾಶಿಗೆ ನಾವು ಹೆದರುವ, ಅಂಜುವ ಪ್ರಶ್ನೆಯೇ ಇಲ್ಲ ಎಂದರು.

ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ

ಕೇಂದ್ರ ಸರ್ಕಾರದಿಂದ ಪ್ರತೀ ವರ್ಷ ನಮಗೆ ಅನ್ಯಾಯ ಆಗುತ್ತಿದೆ. ನಾವು ಪ್ರತೀ ವರ್ಷ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೊಟ್ಟರೆ, ನಮಗೆ ವಾಪಾಸ್ ಬರುವುದು ಒಂದು ರೂಪಾಯಿಗೆ 14 ಪೈಸೆ ಮಾತ್ರ. ಇದರಿಂದ ಒಕ್ಕೂಟ ವ್ಯವಸ್ಥೆಯ ಘನತೆ ಹಾಳು ಮಾಡುತ್ತಿದ್ದಾರೆ ಎಂದು ಮೋದಿ ಸರ್ಕಾರದ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.

ಕೇಂದ್ರ ಪ್ರಾಯೋಜಿತ ಯೋಜನೆಗಳಿಗೂ ಕೇಂದ್ರದಿಂದ ಪೂರ್ತಿ ಅನುದಾನ ಬಂದೇ ಇಲ್ಲ. ಕೇಂದ್ರದ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲನ್ನು ಪೂರ್ತಿ ಕೊಟ್ಟಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ನಮ್ಮ ಪಾಲನ್ನು ಕೊಡದೆ ಉಳಿಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದರು.

15ನೇ ಹಣಕಾಸು ಯೋಜನೆಯಲ್ಲಿ ರಾಜ್ಯಕ್ಕೆ ಕೇಂದ್ರ ಮಾಡಿರುವ ಅನ್ಯಾಯ ನಿಮಗೆಲ್ಲಾ ಗೊತ್ತೇ ಇದೆ. ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ 5300 ಕೋಟಿ ಹಣದಲ್ಲಿ ಬಿಡಿಗಾಸನ್ನೂ ಬಿಡುಗಡೆ ಮಾಡಲಿಲ್ಲ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವುದಾಗಿ ಭರವಸೆ ನೀಡಿದರು. ಇದನ್ನೂ ಈಡೇರಿಸಲಿಲ್ಲ ಎಂದು ಟೀಕಿಸಿದರು.

ಸರ್ವ ಜನಾಂಗದ ಶಾಂತಿಯ ತೋಟ

ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಸರ್ವರನ್ನೂ ಸಮಾನವಾಗಿ ಗೌರವಿಸುವ ರಾಜ್ಯ. ಸಂವಿಧಾನದ ಅಡಿಯಲ್ಲಿ ಸರ್ವ ಧರ್ಮಗಳನ್ನೂ ಸಮಾನವಾಗಿ ಕಾಣಬೇಕು. ನಾವು ಇದೇ ಮೌಲ್ಯವನ್ನು ಪಾಲಿಸುತ್ತಿದ್ದೇವೆ ಎಂದರು.

ಏಳು‌ಕೋಟಿ ಕನ್ನಡಿಗರು ನಮ್ಮ ಮೇಲೆ ಭರವಸೆಯನ್ನಿಟ್ಟು ಮತನೀಡಿ, ಆಶೀರ್ವದಿಸಿ ಭರ್ಜರಿ ಬಹುಮತದ ಮೂಲಕ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟು ಇಂದಿಗೆ ಎರಡು ವರ್ಷ. ಈ ಎರಡು ವರ್ಷಗಳ ಅವಧಿಯಲ್ಲಿ ಅಭಿವೃದ್ಧಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಸಾಮಾಜಿಕ ನ್ಯಾಯದ ಬಂಡಿಯನ್ನು ಸಮಾನವಾಗಿ ಮುನ್ನಡೆಸಿ ನಾಡನ್ನು "ಸರ್ವಜನಾಂಗದ ಶಾಂತಿಯ ತೋಟ"ವಾಗಿಸುವತ್ತ ಪ್ರಾಮಾಣಿಕವಾಗಿ ಶ್ರಮಿಸಿದ ಸಂತೃಪ್ತಿ ನಮ್ಮದು. ಸಾಧಿಸಿದ್ದು ಒಂದಷ್ಟಾದರೆ, ಸಾಧಿಸಬೇಕಿರುವುದು ಬಹಳಷ್ಟಿದೆ ಎಂಬುದರ ಅರಿವು ನಮಗಿದೆ ಎಂದು ಸಿಎಂ ಹೇಳಿದರು.

1.22 ಕೋಟಿ ಕುಟುಂಬಗಳ ಯಜಮಾನಿಯರಿಗೆ ಗೃಹಲಕ್ಷ್ಮಿ ಯೋಜನೆಯಡಿ 2000 ರೂಪಾಯಿ ಕೊಡುತ್ತಿದ್ದೇವೆ. 1.30 ಕೋಟಿ ಕುಟುಂಬಗಳಿಗೆ ಗೃಹಜ್ಯೋತಿ ಯೋಜನೆಯಡಿ ಅನುಕೂಲ ಒದಗಿಸಿದ್ದೇವೆ. ಜೊತೆಗೆ ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣದ ವ್ಯವಸ್ಥೆ ಮಾಡಿದ್ದೇವೆ. ಅನ್ನಭಾಗ್ಯ, ಯುವನಿಧಿ ಗ್ಯಾರಂಟಿಗಳನ್ನೂ ನೀಡಿದ್ದೇವೆ ಎಂದರು.

ಬಿಜೆಪಿ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬಂದೇ ಇಲ್ಲ

ಈಗ ಜೆಡಿಎಸ್ ಮತ್ತು ಬಿಜೆಪಿ ಕೂಡಿಕೊಂಡಿವೆ. ಆದರೆ ಬಿಜೆಪಿ ಇದುವರೆಗೂ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಬರಲೇ ಇಲ್ಲ. ಆಪರೇಷನ್ ಕಮಲ ಮಾಡಿ ಅಧಿಕಾರಕ್ಕೆ ಬಂದದ್ದು ಬಿಟ್ಟರೆ ರಾಜ್ಯದಲ್ಲಿ ಬಿಜೆಪಿ ಇವತ್ತಿನವರೆಗೂ ಜನರಿಂದ ಬಹುಮತ ಗಳಿಸಿ ಆಯ್ಕೆಯೇ ಆಗಿಲ್ಲ ಎಂದರು.

ಹಿಂದಿನ ಬಿಜೆಪಿ ಸರ್ಕಾರದ 40 ಪರ್ಸೆಂಟ್ ಕಮಿಷನ್ ಸಾಬೀತು

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಇತ್ತು. ನಾವು ಇದರ ವಿರುದ್ಧ ಹೋರಾಟ ಮಾಡಿದೆವು. ಅಧಿಕಾರಕ್ಕೆ ಬಂದ ಬಳಿಕ ತನಿಖೆಗೆ ನಾಗಮೋಹನ್ ದಾಸ್ ಸಮಿತಿ ರಚಿಸಿದೆವು. ಸಮಿತಿ ಕೊಟ್ಟಿರುವ ವರದಿಯಲ್ಲಿ 40 ಪರ್ಸೆಂಟ್ ಕಮಿಷನ್ ಆರೋಪ ಸಾಬೀತಾಗಿದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT