ಬೆಂಗಳೂರು: ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ಮತ್ತು ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಬ್ ಗೋಸ್ವಾಮಿ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿ ಗುರುವಾರ ಆದೇಶಿಸಿದೆ.
ಪ್ರಕರಣ ಸಂಬಂಧ ಅಮಿತ್ ಮಾಳವೀಯ ಮತ್ತು ಅರ್ನಾಬ್ ಗೋಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಸ್. ರಾಚಯ್ಯ ಅವರಿದ್ದ ಏಕಸದಸ್ಯ ಪೀಠವು ಗುರುವಾರ ವಿಚಾರಣೆ ನಡೆಸಿದರು.
ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಎಂ. ಅರುಣ್ ಶ್ಯಾಮ್ ಮತ್ತು ಸರ್ಕಾರದ ಪರ ಹೆಚ್ಚುವರಿ ರಾಜ್ಯ ಪ್ರಾಸಿಕ್ಯೂಟರ್ ಬಿ.ಎನ್.ಜಗದೀಶ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ ಎರಡೂ ಪ್ರಕರಣಗಳಿಗೂ ಮುಂದಿನ ವಿಚಾರಣೆವರೆಗೆ ತಡೆ ನೀಡಿ ಆದೇಶಿಸಿತು.
ಇದೇ ವೇಳೆ ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸೀಂ ಮುನೀರ್ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸಂಬಂಧ ಬೆಸೆದು ಟ್ವೀಟ್ ಮಾಡಿದ ಕಾರಣದಿಂದ ಅಮಿತ್ ಮಾಳವೀಯ ವಿರುದ್ಧ ದಾಖಲಾಗಿರುವ ಮತ್ತೊಂದು ಎಫ್‌ಐಆರ್‌ಗೂ ತಡೆ ನೀಡಿತು.
ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಬಿ ಎನ್ ನೀಡಿದ ದೂರಿನ ಮೇರೆಗೆ ಮಂಗಳವಾರ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟರ್ಕಿಯಲ್ಲಿರುವ ಇಸ್ತಾನ್‌ಬುಲ್ ಕಾಂಗ್ರೆಸ್ ಕೇಂದ್ರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಕಚೇರಿಯಾಗಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುವ ಮೂಲಕ ಅಮಿತ್ ಮಾಳವೀಯ ಮತ್ತು ಅರ್ನಬ್ ಗೋಸ್ವಾಮಿ ದುರುದ್ದೇಶಪೂರ್ವಕವಾಗಿ ಪ್ರಚಾರ ಮಾಡಿದ್ದಾರೆ ಎಂದು ಸ್ವರೂಪ್ ಆರೋಪಿಸಿದ್ದರು.