ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಉಲ್ಬಣಗೊಳ್ಳುವ ಆತಂಕ ಎದುರಾಗಿದ್ದು, ರಾಜ್ಯ ಸರ್ಕಾರ ಹಲವು ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ. ಈ ಮಧ್ಯ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 9 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 47ಕ್ಕೆ ಏರಿಕೆಯಾಗಿದೆ.
ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 104 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 9 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 47 ಸಕ್ರಿಯೆ ಪ್ರಕರಣಗಳಿದ್ದು, 46 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣ ಮತ್ತೆ ಸದ್ದು ಮಾಡುತ್ತಿರುವುದರಿಂದ ಉಸಿರಾಟದ ಸಮಸ್ಯೆ ಹಾಗೂ ಹೃದಯಸಂಬಂಧಿ ಕಾಯಿಲೆ ಇರುವವರಿಗೆ ಕಡ್ಡಾಯವಾಗಿ ಕೋವಿಡ್ ಟೆಸ್ಟ್ ಮಾಡುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.