ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರನ್ನು ಕರ್ನಾಟಕ ಹೈಕೋರ್ಟ್ ಗುರುವಾರ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಕ್ಷಮೆಯಾಚಿಸುವಂತೆ ತಾಕೀತು ಮಾಡಿದೆ.
ತಮ್ಮ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಕೋರಿ ರವಿಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರ ವಿರುದ್ಧ ನೀಡಿದ ಹೇಳಿಕೆಗೆ ನೇರವಾಗಿ ಕ್ಷಮೆಯಾಚಿಸುವಂತೆ ಸೂಚಿಸಿದೆ.
ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರನ್ನೊಳಗೊಂಡ ರಜಾಕಾಲದ ಏಕಸದಸ್ಯ ಪೀಠ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಅಲ್ಲದೇ ವಿಚಾರಣೆಗೆ ಸಹಕರಿಸಯವಂತೆ ರವಿಕುಮಾರ್ ಅವರಿಗೂ ಕೋರ್ಟ್ ಸೂಚಿಸಿದೆ.
ವಿಚಾರಣೆ ವೇಳೆ ಪ್ರಾಸಿಕ್ಯೂಷನ್ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿಎನ್ ಜಗದೀಶ್ ಅವರು, ಆರೋಪಿಯು ತನಿಖೆಗೆ ಸಹಕರಿಸುವುದಾದರೆ ಬಂಧಿಸುವುದಿಲ್ಲ ಎಂದು ಭರವಸೆ ನೀಡಿದರು.
"ಇವುಗಳು ನೀಡಬೇಕಾದ ಹೇಳಿಕೆಗಳಲ್ಲ" ಎಂದು ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶರು ಹೇಳಿದರು. ಮಧ್ಯಪ್ರದೇಶದ ಹಾಲಿ ಸಚಿವರೊಬ್ಬರು ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಇತ್ತೀಚಿನ ಸುಪ್ರೀಂ ಕೋರ್ಟ್ ಪ್ರಕರಣಕ್ಕೆ ಹೋಲುವ ರೀತಿಯಲ್ಲಿ ಈ ಪ್ರಕರಣ ಇದೆ. "ನೀವು ಭಿನ್ನವಾಗಿಲ್ಲ. ನೀವು ಅಂತಹ ಹೇಳಿಕೆಗಳನ್ನು ನೀಡುವಂತಿಲ್ಲ" ಎಂದು ಕೋರ್ಟ್ ಎಚ್ಚರಿಸಿದೆ.
ಒಂದು ವೇಳೆ ಆರೋಪಿಯುವ ಕ್ಷಮೆ ಕೇಳುವುದಾದರೆ ಅದನ್ನು ಪ್ರಮಾಣಪತ್ರದ ಮೂಲಕ ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ರವಿಕುಮಾರ್ ಪರ ವಕೀಲರಿಗೆ ಹೈಕೋರ್ಟ್ ಸೂಚಿಸಿದೆ.
ಅರ್ಜಿದಾರರ ಪರವಾಗಿ ಹಾಜರಾದ ವಕೀಲ ವಿನೋದ್ ಕುಮಾರ್ ಎಂ, ಈಗಾಗಲೇ ಕ್ಷಮೆಯಾಚಿಸಲಾಗಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು. ಆದಾಗ್ಯೂ, ನ್ಯಾಯಮೂರ್ತಿ ಗೋವಿಂದರಾಜ್ ಅವರು, ಕ್ಷಮೆಯಾಚನೆಯನ್ನು ಸಂಬಂಧಪಟ್ಟ ವ್ಯಕ್ತಿ ಸ್ವೀಕರಿಸಬೇಕು ಮತ್ತು ಅದನ್ನು ದಾಖಲೆಯಲ್ಲಿ ಇರಿಸಿ. ನಂತರ ನಾವು ವಿಷಯವನ್ನು ಪರಿಗಣಿಸುತ್ತೇವೆ, ಅಲ್ಲಿಯವರೆಗೆ ಇಲ್ಲ" ಎಂದು ಹೇಳಿ, ವಿಚಾರಣೆಯನ್ನು ಜೂನ್ 19ಕ್ಕೆ ಮುಂದೂಡಿದ್ದಾರೆ.
ಕಳೆದ ಮೇ 24 ರಂದು ಬಿಜೆಪಿಯ ”ಕಲಬುರಗಿ ಚಲೋ” ಪ್ರತಿಭಟನೆ ವೇಳೆ ಮಾತನಾಡಿದ್ದ ರವಿಕುಮಾರ್, ಜಿಲ್ಲಾಡಳಿತವು ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಪ್ರಭಾವದಿಂದ ಕಾರ್ಯನಿರ್ವಹಿಸುತ್ತಿದೆ. ಕಲಬುರಗಿ ಡಿಸಿ ಕಚೇರಿಯೂ ತನ್ನ ಸ್ವಾತಂತ್ರ್ಯ ಕಳೆದುಕೊಂಡಿದೆ. ಡಿಸಿ ಮೇಡಂ ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಅಧಿಕಾರಿಯೋ ನನಗೆ ಗೊತ್ತಿಲ್ಲ ಎಂದು ಹೇಳಿದ್ದರು.