ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಕರಣ ಪತ್ತೆ ಮುಂದುವರೆದಿದ್ದು ಇಂದು ಮತ್ತೆ 58 ಹೊಸ ಸೋಂಕು ಪ್ರಕರಣಗಳು ವರದಿಯಾಗಿವೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತನ್ನ ದೈನಂದಿನ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 58 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.
ಅಂತೆಯೇ ಇದೇ ಅವಧಿಯಲ್ಲಿ ಸೋಂಕಿಗೆ ತುತ್ತಾಗಿದ್ದ 53 ಮಂದಿ ಗುಣಮುಖರಾಗಿದ್ದು, ಇದರೊಂದಿಗೆ ರಾಜ್ಯದಲ್ಲಿನ ಸಕ್ರಿಯ ಸೋಂಕಿತರ ಸಂಖ್ಯೆ 238ಕ್ಕೆ ಏರಿಕೆಯಾಗಿದೆ.
ಈ ಪೈಕಿ 225 ಮಂದಿ ಹೋಮ್ ಐಸೋಲಷನ್ (ಮನೆಯಲ್ಲೇ ಚಿಕಿತ್ಸೆ) ನಲ್ಲಿದ್ದಾರೆ. 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಬ್ಬರು ಕೃತಕ ಆಮ್ಲಜನಕದ ಬೆಂಬಲದಲ್ಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಒಟ್ಟು 420 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 354 RTPCR ಪರೀಕ್ಷೆ ಮಾಡಲಾಗಿದೆ. 66 RAT ಪರೀಕ್ಷೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಎಂದು ಆರೋಗ್ಯ ಇಲಾಖೆ ಮನವಿ ಮಾಡಿದೆ.