ಬೆಂಗಳೂರು: ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ನಾಳೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಚರ್ಚೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಎಫ್ ಆರ್ ಪಿ ನಿಗದಿ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು, ಭೇಟಿಗೆ ಸಮಯ ಕೇಳುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಸರ್ವರೋಗಕ್ಕೂ ಒಂದೇ ಮದ್ದು, ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡುವುದು ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ಕಳೆದ ಒಂದು ವಾರದಿಂದ ನಡೆಸುತ್ತಿರುವ ಪ್ರತಿಭಟನೆಯ ಬಿಸಿ ಸರ್ಕಾರಕ್ಕೆ ತಟ್ಟುತ್ತಿದ್ದಂತೆ ಗಾಢ ನಿದ್ದೆಯಿಂದ ಎದ್ದಿರುವ ಸಿದ್ದರಾಮಯ್ಯ ಸರ್ಕಾರ ಎಂದಿನಂತೆ ಕಾಟಾಚಾರದ ಸುದ್ದಿ ಗೋಷ್ಠಿ ಮಾಡಿ ಕೇಂದ್ರ ಸರ್ಕಾರದ ಕಡೆ ಬೊಟ್ಟು ಮಾಡಿ ಕೈತೊಳೆದುಕೊಳ್ಳುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿದ್ದರಾಮಯ್ಯನವರೇ, ತಮಗೆ ನಿಜವಾಗಿಯೂ ರೈತರ ಬಗ್ಗೆ ಕಾಳಜಿ ಇದ್ದರೆ, ಪ್ರತಿಭಟನಾ ನಿರತ ಕಬ್ಬು ಬೆಳೆಗಾರರ ಬೇಡಿಕೆಗೆ ಸ್ಪಂದಿಸುವ ಬದ್ಧತೆ ಇದ್ದರೆ, ಕೇಂದ್ರ ಸರ್ಕಾರ ನಿಗದಿ ಮಾಡುವ FRPಗೆ ಹೆಚ್ಚುವರಿಯಾಗಿ ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಟನ್ ಗೆ 500 ರೂಪಾಯಿ ಪ್ರೋತ್ಸಾಹ ಧನ ಘೋಷಣೆ ಮಾಡಿ ಎಂದಿದ್ದಾರೆ.
ವಿರೋಧ ಪಕ್ಷದಲ್ಲಿದ್ದಾಗ ಬೆಲೆ ನಿಗದಿ ಮಾಡಿ, ಆವರ್ತ ನಿಧಿ ಸ್ಥಾಪನೆ ಮಾಡಿ ಎಂದು ಸರ್ಕಾರಗಳಿಗೆ ಬಿಟ್ಟಿ ಸಲಹೆ ನೀಡುವ ತಾವು, ಅಧಿಕಾರದಲ್ಲಿದ್ದಾಗ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸಿ ಜಾರಿಕೊಳ್ಳುವುದು ಯಾವ ಸೀಮೆ ನ್ಯಾಯ ಸ್ವಾಮಿ? ಎಂದು ಪ್ರಶ್ನಿಸಿದ್ದು, ಪ್ರೋತ್ಸಾಹ ಧನ ಕೊಡುವುದು ಬಿಡಿ, ಕನಿಷ್ಠ ಪಕ್ಷ ಪ್ರತಿಭಟನಾನಿರತ ರೈತರನ್ನು ಭೇಟಿ ಮಾಡಿ ಸಮಾಧಾನ ಮಾಡುವ ಸೌಜನ್ಯವೂ ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ. ಪದೇ ಪದೇ ಈ ರೀತಿ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಗೆ ಮುಂದಿನ ದಿನಗಳಲ್ಲಿ ಬಹಳ ದೊಡ್ಡ ಬೆಲೆ ತೆತ್ತಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.