ಬೆಂಗಳೂರು: 21 ವರ್ಷದ ವಿಕಲಚೇತನ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಈ ಘಟನೆ ನವೆಂಬರ್ 10 ರಂದು ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆಯ ನಂತರ ಆರೋಪಿ ಪರಾರಿಯಾಗಲು ಪ್ರಯತ್ನಿಸಿದಾಗ, ಸ್ಥಳೀಯರು ಆತನನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಪೊಲೀಸರ ಪ್ರಕಾರ, ಡ್ರಗ್ಸ್ ಸೇವನೆ ಮಾಡಿದ್ದ ಶಂಕಿತ ಆರೋಪಿ ಮನೆಗೆ ನುಗ್ಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ.
ಯುವತಿಯ ತಾಯಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮನೆಗೆ ಮರಳಿದಾಗ, ತನ್ನ ಮಗಳು ಆತಂಕದಲ್ಲಿರುವುದನ್ನು ಮತ್ತು ಆರೋಪಿ ಬಾಗಿಲಿನ ಹಿಂದೆ ಅಡಗಿರುವುದನ್ನು ನೋಡಿದ್ದಾಳೆ.
ಆಕೆ ಸಹಾಯಕ್ಕಾಗಿ ಕೂಗಿಕೊಂಡ ನಂತರ ಆರೋಪಿ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ನೆರೆಹೊರೆಯವರು ಆತನನ್ನು ಹಿಡಿದು, ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ಸಂಬಂಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 75(ಲೈಂಗಿಕ ಕಿರುಕುಳ), 76 (ವಿವಸ್ತ್ರಗೊಳಿಸುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 115 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಮತ್ತು 333 (ಮನೆಗೆ ನುಗ್ಗುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.