ಬೆಂಗಳೂರು: ಬೆಳಗಾವಿಯ ಸುರ್ವಣಸೌಧದಲ್ಲಿ ಡಿಸೆಂಬರ್ 8 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಸಲು ಗುರುವಾರ ಸಚಿವ ಸಂಪುಟ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಯಲಿದೆ ಎಂದರು.
ಇನ್ನು ಆರು ತಿಂಗಳಿಗಿಂತ ಹೆಚ್ಚು ಕಾಲ ವರದಿ ಸಲ್ಲಿಸದ ಮೂರು ಸಂಪುಟ ಉಪಸಮಿತಿಗಳಿಗೆ ಸಾಧ್ಯವಾದಷ್ಟು ಬೇಗ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಎಚ್ ಕೆ ಪಾಟೀಲ್ ತಿಳಿಸಿದರು.
ಒಂದು ಸಮಿತಿಯು ಕೋವಿಡ್-19 ಸಮಯದಲ್ಲಿ ಔಷಧಿಗಳು ಮತ್ತು ವೈದ್ಯಕೀಯ ಉಪಕರಣಗಳ ಖರೀದಿ ಕುರಿತು ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ಅವರ ವರದಿಗೆ ಸಂಬಂಧಿಸಿದೆ ಎಂದು ಸಚಿವರು ಹೇಳಿದರು.
ಕರ್ನಾಟಕದ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಯನ್ನು ಪರಿಶೀಲಿಸಲು ಮತ್ತು ಸೂಕ್ತ ಶಿಫಾರಸುಗಳನ್ನು ಮಾಡಲು ಎರಡನೇ ಸಮಿತಿಯನ್ನು ರಚಿಸಲಾಯಿತು. ಮೂರನೇ ಸಮಿತಿಯು ಬೆಂಗಳೂರು-ಮೈಸೂರು ಮೂಲಸೌಕರ್ಯ ಅಭಿವೃದ್ಧಿ ಕಾರಿಡಾರ್‌ನ ಬೆಳವಣಿಗೆಗಳನ್ನು ಪರಿಶೀಲಿಸುವ ಮತ್ತು ಭವಿಷ್ಯದಲ್ಲಿ ತೆಗೆದುಕೊಳ್ಳಬೇಕಾದ ಸೂಕ್ತ ಕ್ರಮಗಳನ್ನು ಪ್ರಾರಂಭಿಸುವ ಕಾರ್ಯವನ್ನು ಹೊಂದಿದೆ ಎಂದರು.
ಮೊದಲ ಮತ್ತು ಎರಡನೇ ಸಮಿತಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವ ವಹಿಸಿದ್ದರೆ, ಮೂರನೆಯ ಸಮಿತಿಗೆ ಗೃಹ ಸಚಿವರು ನೇತೃತ್ವ ವಹಿಸಿದ್ದಾರೆ. ವರದಿಯನ್ನು ಆದಷ್ಟು ಬೇಗ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಆದರೆ, ಸಮಯ ಮಿತಿಯನ್ನು ನಿರ್ದಿಷ್ಟಪಡಿಸಲಾಗಿಲ್ಲ ಎಂದು ಸಚಿವರು ತಿಳಿಸಿದರು.