ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿ ಭೇಟಿಗೂ ಮುನ್ನ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದು, ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಸತೀಶ್ ಜಾರಕಿಹೊಳಿಯವರು ಸಿದ್ದರಾಮಯ್ಯ ಅವರ ಆಪ್ತ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತ ಸಹಾಯಕ ಎಂದು ಪರಿಗಣಿಸಲ್ಪಡುತ್ತಿರುವುದರಿಂದ, ಸತೀಶ್ ಅವರು ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.
ಏತನ್ಮಧ್ಯೆ ನವೆಂಬರ್ 15 ರಂದು ರಾಷ್ಟ್ರ ರಾಜಧಾನಿ ದೆಹಲಿಗೆ ಸಿದ್ದರಾಮಯ್ಯ ಅವರು ಭೇಟಿ ನೀಡುತ್ತಿದ್ದು, ಈ ವೇಳೆ ರಾಹುಲ್ ಅವರು ಭೇಟಿಗೆ ಅವಕಾಶ ನೀಡುತ್ತಾರೆಯೇ ಎಂಬುದನ್ನು ಕಾದು ನೋಡಬೇಕಿದೆ.
ಸತೀಶ್ ಅವರು ಪಕ್ಷದ ಹೈಕಮಾಂಡ್ ನಾಯಕರಿಗೆ ರಾಜ್ಯದ ರಾಜಕೀಯ ಬೆಳವಣಿಗೆಗಳು ಮತ್ತು ನಾಯಕತ್ವ ಬದಲಾವಣೆಯ ಸಾಧಕ-ಬಾಧಕಗಳ ಬಗ್ಗೆ ಮಾಹಿತಿ ನೀಡಿದ್ದಾರೆಂದು ಕಾಂಗ್ರೆಸ್ ಮೂಲಗಳು ಮಾಹಿತಿ ನೀಡಿವೆ.
ಸತೀಶ್ ಜಾರಕಿಹೊಳಿಯವರು ಅವರು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಮುಂದುವರಿಸಲು ಒಲವು ತೋರಿದ್ದು, ಸಚಿವ ಸಂಪುಟ ಪುನರ್ರಚನೆಗೆ ಸಲಹೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.
ಇದಲ್ಲದೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಬಗ್ಗೆಯೂ ಚರ್ಚಿಸಿದ್ದು, ಅಧಿಕಾರ ವಹಿಸಿಕೊಳ್ಳುವ ಇಚ್ಛೆಯನ್ನು ವ್ಯಕ್ತಪಡಿಸಿದ್ದಾರೆಂದು ಎಂದು ಮೂಲಗಳು ತಿಳಿಸಿವೆ.
ಬಿ. ನಾಗೇಂದ್ರ ಅವರ ರಾಜೀನಾಮೆ ಮತ್ತು ಎಸ್‌ಟಿ ಸಮುದಾಯದ ಕೆ.ಎನ್. ರಾಜಣ್ಣ ಅವರ ವಜಾದ ನಂತರ ಎರಡು ಸಚಿವ ಸ್ಥಾನಗಳು ಖಾಲಿಯಾಗಿದ್ದು, ಸಚಿವರ ನೇಮಕಕ್ಕೆ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವಂತೆಯೂ ಸತೀಶ್ ಜಾರಕಿಹೊಳಿಯವರು ಹೈಕಮಾಂಡ್'ಗೆ ಮನವಿ ಮಾಡಿದ್ದಾರೆಂದು ತಿಳಿದುಬಂದಿದೆ.