ಬೆಂಗಳೂರು: ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ - ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ಪಂಡಿತ್ ಜವಾಹರಲಾಲ್ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ "ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ" ಕಾರ್ಯಕ್ರಮವನ್ನು ಉದ್ಘಾಟಿಸಿ ಮುಖ್ಯಮಂತ್ರಿಗಳು ಮಾತನಾಡಿದರು.
ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ನೆಹರೂ ಅವರಿಗೆ ಇತ್ತು. ಹೀಗಾಗಿ ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆಧ್ಯತೆ ನೀಡಿದ್ದು, 65,000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕೆ ನೀಡುತ್ತಿದ್ದೇವೆಂದು ಹೇಳಿದರು.
ನೆಹರೂ ತಮ್ಮ ಯೌವ್ವನದ 3,200ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಐಐಟಿ, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧಿಯನ್ನು ಟೀಕಿಸುತ್ತಾರೆ. ಇದನ್ನು ಮಕ್ಕಳಿಗೆ ಶಿಕ್ಷಕರು ಹಾಗೂ ಪೋಷಕರು ಅರ್ಥ ಮಾಡಿಸಬೇಕು.
ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಇರುವ ಮಕ್ಕಳ ಮೇಲೆ ದೇಶದ ಅಭಿವೃದ್ಧಿ ಮತ್ತು ಭವಿಷ್ಯದ ಕನಸನ್ನು ನೆಹರೂ ಕಟ್ಟಿಕೊಂಡಿದ್ದರು. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರ್ಕಾರಿ ಶಾಲೆಗಳಲ್ಲಿ ಓದಿದವರು. ಆದ್ದರಿಂದ ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದ್ದೇವೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ. ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು, ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ. ಇಂದಿರಾ ಕಿಟ್, ಶೂ, ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು, ಪಠ್ಯ ಪುಸ್ತಕ, ಸ್ಕಾಲರ್ಶಿಪ್ ಇವೆಲ್ಲವನ್ನೂ ಬಡವರ ಮಕ್ಕಳಿಗಾಗಿ ಸರ್ಕಾರ ಒದಗಿಸುತ್ತಿದೆ. ಇದರ ಅನುಕೂಲ ಪಡೆದು ಮಕ್ಕಳು ದೇಶದ ಆಸ್ತಿಯಾಗಿ ರೂಪುಗೊಳ್ಳಬೇಕು ಎಂದು ತಿಳಿಸಿದರು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂರವರ ಜಯಂತಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಅವರ ಪ್ರತಿಮೆಗೆ ಮಾಲಾರ್ಪಣೆ ಮುಖ್ಯಮಂತ್ರಿಗಳು ಮಾಲಾರ್ಪಣೆ ಮಾಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಮೊದಲ ಪ್ರಧಾನಮಂತ್ರಿ ಜವಾಹರ್ ಲಾಲ್ ನೆಹರೂ ಅವರ ಜನ್ಮದಿನದಂದೇ ಮಕ್ಕಳ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಕ್ಕಳನ್ನು ಕಂಡರೆ ಬಹಳ ಪ್ರೀತಿಯಿದ್ದ ಅವರು ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳು ಎಂದು ಅರ್ಥೈಸಿಕೊಂಡಿದ್ದರು. ಆದ್ದರಿಂದ ಚಾಚಾ ನೆಹರೂ ಎಂದೇ ಅವರನ್ನು ಕರೆಯಲಾಗುತ್ತಿತ್ತು. ನೆಹರೂ ಅವರು ವಿದ್ಯಾರ್ಥಿ ದೆಸೆಯಲ್ಲಿದ್ದಾಗಲೇ ದೇಶ ಪ್ರೇಮ ಹಾಗೂ ಸ್ವಾತಂತ್ರ್ಯ ಪ್ರೇಮಗಳನ್ನು ಬೆಳೆಸಿಕೊಂಡಿದ್ದರು. ಬ್ರಿಟಿಷರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಂಡು ಮಹಾತ್ಮ ಗಾಂಧಿಯವರ ನೆಚ್ಚಿನ ಶಿಷ್ಯರಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಳ್ಳುತ್ತಾರೆ. ಸುಮಾರು 9 ವರ್ಷಗಳ ಕಾಲ ಕಾರಾಗೃಹದಲ್ಲಿದ್ದು ದೇಶಕ್ಕಾಗಿ ಬಹಳಷ್ಟು ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿದಾಗ ದೇಶದ ಬಜೆಟ್ ಗಾತ್ರ 197 ಕೋಟಿ ರೂ. ಗಳು ಮಾತ್ರ ಇತ್ತು. ಎರಡು ಮೂರು ವರ್ಷಗಳ ನಂತರ 4 ಅಂಕಿಗಳ ಹಂತಕ್ಕೆ ತಲುಪಿತು.
ಕೃಷಿ, ನೀರಾವರಿ, ಕೈಗಾರಿಕೆಗಳಲ್ಲಿ ಆಸಕ್ತಿ ಹೊಂದಿದ್ದ ನೆಹರೂ ಅವರು ದೇಶವನ್ನು ವೈಜ್ಞಾನಿಕವಾಗಿ, ವೈಚಾರಿಕವಾಗಿ ಬೆಳೆಸುವ ಪ್ರಯತ್ನ ಮಾಡಿದರು. ಪಂಚ ವಾರ್ಷಿಕ ಯೋಜನೆಗಳ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಿದರು. ದೇಶದಲ್ಲಿ ಅನೇಕ ಕೈಗಾರಿಕೆಗಳಾಗಿದ್ದರೆ, ಅಣೆಕಟ್ಟುಗಳಾಗಿದ್ದರೆ, ಕೃಷಿಯಲ್ಲಿ ಸ್ವಾವಲಂಬಿಗಳಾಗಿದ್ದರೆ ಅದಕ್ಕೆ ನೆಹರೂ ಅವರು ಕಾರಣ. ಸುದೀರ್ಘ ಹದಿನೇಳು ವರ್ಷಗಳ ಕಾಲ ಈ ದೇಶದ ಪ್ರಧಾನಿಗಳಾಗಿ ಸೇವೆ ಸಲ್ಲಿಸಿದ್ದಾರೆ.
ಬಿಜೆಪಿಗೆ ಮಹಾತ್ಮ ಗಾಂಧಿ ಹಾಗೂ ಜವಾಹರಲಾಲ್ ನೆಹರೂ ಅವರನ್ನು ತೆಗಳುವುದೇ ಕೆಲಸ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿಯ ಪಾತ್ರವೇ ಇಲ್ಲ. ಮಹಾತ್ಮ ಗಾಂಧಿ, ನೆಹರೂ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟವರು. ಅವರನ್ನು ತೆಗಳಿ, ಇಲ್ಲದ ಆರೋಪಗಳನ್ನು ಹೊರಿಸುವುದೇ ಅವರ ಕೆಲಸ. ನರೇಂದ್ರ ಮೋದಿ, ಬಿಜೆಪಿ, ಆರ್.ಎಸ್.ಎಸ್ ಗಾಂಧಿ ಮತ್ತು ನೆಹರೂ ಅವರನ್ನು ಹೀಯಾಳಿಸುವುದನ್ನೇ ಉದ್ಯೋಗ ಮಾಡಿಕೊಂಡಿದ್ದಾರೆಂದು ಹೇಳಿದರು.