ಬೆಂಗಳೂರು: ಡಿಸೆಂಬರ್ 8 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ವಿವರವಾದ ಚರ್ಚೆಗೆ ಅವಕಾಶ ನೀಡುವಂತೆ ಬಿಜೆಪಿ ಗುರುವಾರ ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು, ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ವಿವರವಾದ ಚರ್ಚೆಗೆ ಅವಕಾಶ ನೀಡುವಂತೆ ವಿಧಾನ ಪರಿಷತ್ ಅಧ್ಯಕ್ಷ ಬಸವರಾಜ ಹೊರಟ್ಟಿ ಅವರಿಗೆ ಮನವಿ ಮಾಡಿದ್ದಾರೆ.
ಅಧಿವೇಶನದಲ್ಲಿ ರೈತರು ಎದುರಿಸುತ್ತಿರುವ ಸಮಸ್ಯೆಗಳು, ಬಾಕಿ ಇರುವ ನೀರಾವರಿ ಯೋಜನೆಗಳು, ಉದ್ಯೋಗ ಸೃಷ್ಟಿ ಮತ್ತು ಉತ್ತರ ಕರ್ನಾಟಕ ಪ್ರದೇಶದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಶಾಸಕ ರಾಜು ಕಾಗೆ ಅವರ ಬೇಡಿಕೆ ಕುರಿತು ಪ್ರತಿಕ್ರಿಯಿಸಿ, ರಾಜ್ಯ ಸರ್ಕಾರವು ಈ ಪ್ರದೇಶದ ಜನರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿರುವುದೇ ಇಂತಹ ಬೇಡಿಕೆಗಳಿಗೆ ಕಾರಣ ಎಂದು ಕಿಡಿಕಾರಿದರು.
ಇದೇ ವೇಳೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಮಂಡಳಿಯನ್ನು ರಚಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಜನತಾದಳ (ಜಾತ್ಯತೀತ) ದೊಂದಿಗೆ ಬಿಜೆಪಿ ಈ ಸಮಸ್ಯೆಯ ಕುರಿತು ಅಧಿವೇಶನದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಲಿದೆ ಎಂದು ತಿಳಿಸಿದರು.