ಬೆಂಗಳೂರು: ಬೆಂಗಳೂರು ಹೊರವಲಯದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿಗಳನ್ನು ಸ್ಟರ್ಲಿನ್ ಎಲಿಜಾ ಶಾಜಿ (19) ಮತ್ತು ಜಸ್ಟಿನ್ ಜೋಸೆಫ್ (20) ಎಂದು ಗುರುತಿಸಲಾಗಿದೆ. ಇಬ್ಬರೂ ಕೇರಳ ಮೂಲದವರಾಗಿದ್ದು, ನಗರದ ಖಾಸಗಿ ಸಂಸ್ಥೆಯಲ್ಲಿ ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದರು ಎಂದು ಅವರು ಹೇಳಿದರು.
ಪೊಲೀಸರ ಪ್ರಕಾರ, ಸಂತ್ರಸ್ತರಿಬ್ಬರೂ ಹತ್ತಿರದ ತಮ್ಮ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯಕ್ಕೆ ತೆರಳಲು ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಹಳಿ ದಾಟುತ್ತಿದ್ದ ವೇಳೆ ಭಾನುವಾರ ಮಧ್ಯಾಹ್ನ 2.35ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ಬೆಂಗಳೂರಿನಿಂದ ಬೆಳಗಾವಿಗೆ ಹೋಗುತ್ತಿದ್ದ ವಂದೇ ಭಾರತ್ ರೈಲು ಡಿಕ್ಕಿ ಹೊಡೆದು, ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಮೃತದೇಹಗಳು ಹಳಿಗಳ ಮೇಲೆ ತೀವ್ರವಾಗಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಾವು ಆಕಸ್ಮಿಕವೋ ಅಥವಾ ಆತ್ಮಹತ್ಯೆಯೋ ಎಂಬುದನ್ನು ನಿರ್ಧರಿಸಲು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಹಿರಿಯ ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವಿನ ವರದಿ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.