ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಸಂಘರ್ಷ ನಿಭಾಯಿಸುವುದು ಕಾಂಗ್ರೆಸ್ ಹೈಕಮಾಂಡ್‌ಗೆ ದೊಡ್ಡ ಸವಾಲಾಗಿ ಪರಿಣಿಮಿಸಿದೆ. ಮುಖ್ಯಮಂತ್ರಿ ಹುದ್ದೆಯ ವಿವಾದವನ್ನು ಶೀಘ್ರದಲ್ಲೇ ಇತ್ಯರ್ಥಪಡಿಸಲಾಗುವುದು. ಈ ಸಂಬಂಧ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ನಾನು ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬುಧವಾರ ಹೇಳಿದ್ದಾರೆ. ಏತನ್ಮಧ್ಯೆ, ರಾಹುಲ್ ಗಾಂಧಿ ಶಿವಕುಮಾರ್ ಅವರಿಗೆ ಸಂಕ್ಷಿಪ್ತ ವಾಟ್ಸಾಪ್ ಸಂದೇಶದ ಮೂಲಕ ಪ್ರತಿಕ್ರಿಯಿಸಿದ್ದು, "ದಯವಿಟ್ಟು ಕಾಯಿರಿ. ನಾನು ನಿಮಗೆ ಕರೆ ಮಾಡುತ್ತೇನೆ" ಎಂದು ಹೇಳಿರುವುದಾಗಿ ವರದಿಯಾಗಿದೆ.
ಡಿಕೆ ಶಿವಕುಮಾರ್ ತಮ್ಮನ್ನು ಭೇಟಿಯಾದ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಬುಧವಾರ ಪ್ರತಿಕ್ರಿಯಿಸಿದ್ದಾರೆ. ಉಪಮುಖ್ಯಮಂತ್ರಿ ಶಿವಕುಮಾರ್ ಮುಖ್ಯಮಂತ್ರಿಯಾಗುವ ಮಹತ್ವಾಕಾಂಕ್ಷೆಯನ್ನು ಮೊದಲ ದಿನದಿಂದಲೇ ಎಲ್ಲರಿಗೂ ತಿಳಿಸಿದ್ದರು. ಪಕ್ಷದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಡಿಕೆ ಶಿವಕುಮಾರ್ ಅವರು ಅನೇಕ ಜನರನ್ನು ಭೇಟಿಯಾಗಿದ್ದಾರೆ. ನನ್ನನ್ನೂ ಕೂಡ ಭೇಟಿಯಾಗಿದ್ದರು ಎಂದು ಹೇಳಿದ್ದಾರೆ. ಸಿಎಂ ಬದಲಾವಣೆ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಕೆಜೆ ಜಾರ್ಜ್, ಸರ್ಕಾರ ರಚನೆಯ ಸಮಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷ (ಸಿಎಲ್‌ಪಿ) ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಿತ್ತು. ಆ ಹುದ್ದೆಗೆ ಯಾವುದೇ ಕಾಲಮಿತಿಯ ಷರತ್ತನ್ನು ವಿಧಿಸಲಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನು ಕಾಂಗ್ರೆಸ್ ನಲ್ಲಿನ ಗೊಂದಲಗಳ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ್ ಮಾತನಾಡಿದ್ದು, ಸರ್ಕಾರ ರಚಿಸಲು ಕೈಜೋಡಿಸುವಂತೆ ಕೆಲ ಕಾಂಗ್ರೆಸ್ ನಾಯಕರು ನಮ್ಮನ್ನು ಸಂಪರ್ಕಿಸಿದ್ದಾರೆಂದು ಹೇಳಿದ್ದಾರೆ..
ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ ವಿರುದ್ಧದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಪೋಕ್ಸೋ ಪ್ರಕರಣದಲ್ಲಿ ಶ್ರೀಗಳು ಹಾಗೂ ಇತರ ಆರೋಪಿಗಳನ್ನು ಖುಲಾಸೆಗೊಳಿಸಿದೆ. 2022 ಆಗಸ್ಟ್ 31 ರಂದು ಇಬ್ಬರು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮುರುಘಾ ಶ್ರೀಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆಪ್ಟೆಂಬರ್ 1ರಂದು ಶ್ರೀಗಳ ಬಂಧನವಾಗಿತ್ತು. 14 ತಿಂಗಳ ಕಾಲ ಜೈಲಿನಲ್ಲಿದ್ದ, ಶ್ರೀಗಳು 2023 ನವೆಂಬರ್ 16ರಂದು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗೆ ಬಂದಿದ್ದರು. ಪ್ರಕರಣದ ಎರಡನೇ ಆರೋಪಿ ರಶ್ಮಿ ಹಾಗೂ ನಾಲ್ಕನೇ ಆರೋಪಿ ಪರಮಶಿವಯ್ಯ ಅವರನ್ನು ಕೂಡ ನಿರ್ದೋಷಿ ಎಂದು ಕೋರ್ಟ್ ತೀರ್ಪು ನೀಡಿದ್ದು, ಮುರುಘಾಶ್ರೀ ಪರವಾಗಿ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು.
ಕಾರು ಅಪಘಾತದಲ್ಲಿ ನಿಧನರಾದ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆ ಇಂದು ರಾಮದುರ್ಗದಲ್ಲಿ ಅವರ ತಾಯಿಯ ಸಮಾಧಿ ಪಕ್ಕದಲ್ಲೇ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ್ ಬೀಳಗಿ ಹಾಗೂ ಅವರ ಸಹೋದರರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಇಂದು ಜೇವರ್ಗಿ ಬೈಪಾಸ್ ಬಳಿ ಅಪಘಾತಕ್ಕೀಡಾಗಿ, ಭೀಕರ ಅಪಘಾತದಲ್ಲಿ ಮಹಾಂತೇಶ್ ಬಿಳಗಿ ಅವರ ಸಹೋದರ ಶಂಕರ ಬೀಳಗಿ ಹಾಗೂ ಈರಣ್ಣ ಶಿರಸಂಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಹಿರಿಯ ಐಎಎಸ್ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಬೆಸ್ಕಾಂ ಎಂಡಿ ಆಗಿ, ದಾವಣಗೆರೆ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಮಹಾಂತೇಶ್ ಬೀಳಗಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕಾ ಘಟಕವನ್ನು ಸ್ಥಾಪಿಸಿ ರಾಜ್ಯಾದ್ಯಂತ ನಕಲಿ ಉತ್ಪನ್ನಗಳನ್ನು ವಿತರಿಸುತ್ತಿದ್ದ ಪ್ರಮುಖ ಸೂತ್ರಧಾರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಶಿವಕುಮಾರ್ ಮತ್ತು ಆತನ ಪತ್ನಿ ರಮ್ಯಾ ಎಂದು ಗುರುತಿಸಲಾಗಿದೆ. ಸಿಸಿಬಿ ಡಿಸಿಪಿ ಶ್ರೀಹರಿಬಾಬು ಅವರು ನೀಡಿರುವ ಮಾಹಿತಿ ಪ್ರಕಾರ, ಆರೋಪಿ ದಂಪತಿಗಳು ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕವನ್ನು ಸ್ಥಾಪಿಸಿ, ದೊಡ್ಡ ದೊಡ್ಡ ಹೈಟೆಕ್ ಮೆಷಿನರಿಗಳು ಮತ್ತು ಅತ್ಯಾಧುನಿಕ ಯಂತ್ರಗಳನ್ನು ಬಳಸಿಕೊಂಡು ನಂದಿನಿ ಲೇಬಲ್‌ನ ನಕಲಿ ತುಪ್ಪಗಳನ್ನು ತಯಾರಿಸಿ, ರೀ-ಪ್ಯಾಕಿಂಗ್ ಮಾಡಿ ಮಾರಾಟ ಮಾಡುತ್ತಿದ್ದರು. ಪೊಲೀಸರು ಕಳೆದ ನವೆಂಬರ್ 14 ರಂದು ಚಾಮರಾಜಪೇಟೆಯಲ್ಲಿರುವ ಗೋದಾಮಿನ ಮೇಲೆ ದಾಳಿ ನಡೆಸಿ ನಂದಿನಿ ತುಪ್ಪವನ್ನು ವಶಪಡಿಸಿಕೊಂಡಿದ್ದರು. ಆ ಸಮಯದಲ್ಲಿ ಪ್ರಕರಣ ದಾಖಲಿಸಿ, ವಿತರಣಾ ಜಾಲದಲ್ಲಿದ್ದ ಡಿಸ್ಟ್ರಿಬ್ಯೂಟರ್ ಮಹೇಂದ್ರ, ಆತನ ಮಗ ದೀಪಕ್, ಮತ್ತು ಮುನಿರಾಜು ಸೇರಿದಂತೆ ಒಟ್ಟು ನಾಲ್ವರನ್ನು ಬಂಧಿಸಲಾಗಿತ್ತು.