ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿದ್ದು, ಈ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ಕರೆಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯ ಇಂದಿರಾ ಕಾಂಗ್ರೆಸ್ ಭವನದಲ್ಲಿ ಹೈಕಮಾಂಡ್ ಸಭೆ ನಿಗದಿಯಾಗಿರುವ ಹಿನ್ನೆಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬೆಂಗಳೂರಿನಿಂದ ದೆಹಲಿಗೆ ತೆರಳಿದರು. ಹೈಕಮಾಂಡ್ ಅಂದರೆ ಏಕಾಂಗಿ ಅಲ್ಲ. ಒಂದು ತಂಡ. ಹೈಕಮಾಂಡ್ ಕೂತು ಚರ್ಚಿಸಿ ನಿರ್ಣಯ ಕೈಗೊಳ್ಳುತ್ತದೆ ಎಂದರು. ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ ಅಂದ ಮೇಲೆ ನಾವು ಕೇಳಲೇಬೇಕು. ಹೈಕಮಾಂಡ್ ಕರೆದರೆ ದೆಹಲಿಗೆ ಹೋಗುತ್ತೇನೆ. ಅವರು ನನಗೆ ಕರೆ ಮಾಡಲಿ ನೋಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮತ್ತೊಂದೆಡೆ, ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿದ್ದು ಹೈಕಮಾಂಡ್ ಕರೆ ನೀಡಿದರೆ ನಾನು ಮತ್ತು ಸಿದ್ದರಾಮಯ್ಯ ಇಬ್ಬರೂ ದೆಹಲಿಗೆ ಹೋಗುತ್ತೇವೆ. ಪ್ರಸ್ತುತ ನನ್ನನ್ನು ಯಾರು ದೆಹಲಿಗೆ ಬರುವಂತೆ ಕರೆದಿಲ್ಲ. ಖಾಸಗಿ ಕಾರ್ಯಕ್ರಮ ಹಿನ್ನಲೆ ನಾನು ಇಂದು ಮುಂಬೈಗೆ ಹೋಗುತ್ತೇನೆ. ಇಂದು ಸಂಜೆ ಹೋಗಿ ರಾತ್ರಿಯೇ ಮರಳುತ್ತೇನೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಪಟ್ಟಕ್ಕಾಗಿ ಫೈಟ್ ಮಾಡುತ್ತಿರುವ ಡಿಸಿಎಂ ಡಿಕೆ ಶಿವಕುಮಾರ್ ಗೆ ಅನ್ಯಾಯವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘ ಕಾಂಗ್ರೆಸ್ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದೆ. ವಿಧಾನಸಭೆ ಚುನಾವಣೆಯ ಸಮಯದಲ್ಲಿ ಶಿವಕುಮಾರ್ ಸಾಕಷ್ಟು ಶ್ರಮಿಸಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡಿದ್ದಾರೆ. ಅವರ ಪ್ರಯತ್ನದಿಂದಾಗಿ ಕಾಂಗ್ರೆಸ್ 140 ಸ್ಥಾನಗಳನ್ನು ಗಳಿಸಿತು ಎಂದು ಸಂಘದ ಅಧ್ಯಕ್ಷ ಎಲ್ ಶ್ರೀನಿವಾಸ್ ಹೇಳಿದ್ದಾರೆ. ಈ ಮಧ್ಯೆ ಡಿಕೆ ಶಿವಕುಮಾರ್ ಪರ ಆದಿಚುಂಚನಗಿರಿ ಮಠದ ನಿರ್ಮಲಾನಂದ ಸ್ವಾಮೀಜಿ ಮಾತನಾಡಿದ್ದು ಡಿಕೆಶಿ ಅವರು ಉಳಿದ ಎರಡೂವರೆ ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಅಭಿಲಾಷೆ ನಮಗಿದೆ ಎಂದಿದ್ದರು. ಇದಕ್ಕೆ ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಮಧ್ಯಪ್ರವೇಶಿಸಿ, ಮಠಾಧೀಶರು ಹೇಳಿದ ತಕ್ಷಣ ಅವರು ಹೇಳಿದವರನ್ನು ಮುಖ್ಯಮಂತ್ರಿ ಮಾಡಲು ಸಂವಿಧಾನದಲ್ಲಿ ಅವಕಾಶ ಇದೆಯಾ? ಎಂದು ಪ್ರಶ್ನಿಸಿದರು. ಪಕ್ಷದ ವಿಚಾರಗಳಲ್ಲಿ ಸ್ವಾಮೀಜಿಗಳು ಮಧ್ಯಪ್ರವೇಶಿಸಿ ಗೊಂದಲ ಸೃಷ್ಟಿಸುವುದು ಯಾವ ಮಠಾಧೀಶರಿಗೂ ಸೂಕ್ತವಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಈ ವರ್ಷ ಹೆಚ್ಚು ಮಳೆಯಿಂದಾಗಿ 14 ಲಕ್ಷ ಹೆಕ್ಟೇರ್‌ಗಳ ಬೆಳೆ ಹಾನಿಯಾಗಿದೆ. ರೈತರಿಗೆ ಪರಿಹಾರವಾಗಿ 1,033 ಕೋಟಿ ರೂಪಾಯಿ ಪರಿಹಾರ ಪ್ಯಾಕೇಜ್ ಘೋಷಿಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ನಾನು ಕಲಬುರಗಿ, ಯಾದಗಿರಿ ಮತ್ತು ಇತರ ಕೆಲವು ಜಿಲ್ಲೆಗಳಿಗೆ ಭೇಟಿ ನೀಡಿದ್ದೆ, ಅಲ್ಲಿ ಜೋಳ, ಕಬ್ಬು ಮತ್ತು ತೊಗರಿ ಬೆಳೆಗೆ ತೀವ್ರ ಹಾನಿಯಾಗಿದೆ. ನಾವು ಕೇಂದ್ರ ಸರ್ಕಾರಕ್ಕೂ ಮನವಿ ಮಾಡಿದ್ದೇವೆ. ಕೇಂದ್ರವೂ ಇಲ್ಲಿಗೆ ತಂಡವನ್ನು ಕಳಿಸಿ ಹಾನಿಯ ಬಗ್ಗೆ ಪರಿಶೀಲನೆ ನಡೆಸಿ ಪರಿಹಾರ ನೀಡುತ್ತಾರೆ ಎಂಬ ಭರವಸೆ ನಮಗಿದೆ. ರಾಜ್ಯ ಸರ್ಕಾರದಿಂದ 17 ಲಕ್ಷ ಹೆಕ್ಟೇರ್‌ಗೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದರು. ರೈತರ ಆರ್ಥಿಕ ಸಂಕಷ್ಟಕ್ಕೆ ನೆರವು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಇನ್‌ಪುಟ್ ಸಬ್ಸಿಡಿಗಳ ದರವನ್ನು ಹೆಚ್ಚಿಸಿದೆ. ಗರಿಷ್ಟ 2 ಹೆಕ್ಟೇರಿಗೆ ಸೀಮಿತವಾಗಿ, ಮಳೆಯಾಶ್ರಿತ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 8500 ರಿಂದ ರೂ. 17 ಸಾವಿರ, ನೀರಾವರಿ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ.17 ಸಾವಿರದಿಂದ ರೂ. 25,500 ಹಾಗೂ ಬಹು ವಾರ್ಷಿಕ ಬೆಳೆಗಳಿಗೆ ಹೆಕ್ಟೇರ್ ಒಂದಕ್ಕೆ ರೂ. 22,500 ರಿಂದ ರೂ. 31 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದರು.
ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರೌಡಿಗಳ ಹುಟ್ಟುಹಬ್ಬ ಆಚರಣೆ, ಗುಂಡು-ತುಂಡಿನ ಪಾರ್ಟಿಯ ಜೊತೆಗೆ ಉಗ್ರರ ಕೈನಲ್ಲೂ ಮೊಬೈಲ್ ಇರುವ ಸಾಕಷ್ಟು ವಿಡಿಯೋಗಳು ಈಗಾಗಲೇ ಹೊರ ಬಂದಿವೆ. ಈ ನಡುವಲ್ಲೇ ಜೈಲಿನಲ್ಲಿ ಕೈದಿಗಳು ಮದ್ಯ ತಯಾರಿ ಮಾಡಿದ್ದಾರೆ ಎನ್ನಲಾದ ವಿಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆ್ಯಪಲ್, ದ್ರಾಕ್ಷಿ ಮತ್ತು ಪೈನ್ ಆ್ಯಪಲ್ ಬಳಸಿ ಕೈದಿಗಳು ವೈನ್ ತಯಾರಿಸಿದ್ದಾರೆ ಎನ್ನಲಾದ ವಿಡಿಯೋ ಇದಾಗಿದೆ. ಇದನ್ನು ಜೆಡಿಎಸ್ ಪೋಸ್ಟ್ ಮಾಡಿದ್ದು, 'ಪರಪ್ಪನ ಅಗ್ರಹಾರ ಜೈಲಿನಲ್ಲಿ ಮದ್ಯದ ಫ್ಯಾಕ್ಟರಿ ಮಾಡಿಕೊಟ್ಟ ಕಾಂಗ್ರೆಸ್ ಸರ್ಕಾರ' ಎಂದು ಬರಹ ನೀಡಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.