ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ 'ಐದು ಗ್ಯಾರಂಟಿ' ಯೋಜನೆಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶುಕ್ರವಾರ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲಬುರಗಿ ಸೇರಿದಂತೆ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಉಂಟಾಗಿರುವ ತೀವ್ರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರದ ಬಳಿ ಹಣವಿಲ್ಲ ಎಂದು ದೂರಿದರು.
ಮುಂದಿನ ಒಂದು ವಾರದೊಳಗೆ ಕಲಬುರಗಿ ಮತ್ತು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡುವಂತೆ ಒತ್ತಾಯಿಸುತ್ತೇನೆ ಎಂದರು.
ಮಹಾರಾಷ್ಟ್ರದ ಅಣೆಕಟ್ಟೆಗಳಿಂದ ನೀರು ಬಿಡುಗಡೆ ಮಾಡಿರುವುದರಿಂದ ಭೀಮಾ ಮತ್ತು ಕೃಷ್ಣಾ ನದಿ ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದೆ. ಕಲಬುರಗಿ, ವಿಜಯಪುರ, ಬೀದರ್ ಮತ್ತು ಯಾದಗಿರಿ ಜಿಲ್ಲೆಗಳು ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಗಳಾಗಿವೆ. ಬೆಳೆ ನಷ್ಟದ ಜೊತೆಗೆ, ಅನೇಕ ಮನೆಗಳು ಹಾನಿಗೊಳಗಾಗಿವೆ ಮತ್ತು ಹಲವಾರು ಜಾನುವಾರುಗಳು ನೀರು ಪಾಲಾಗಿವೆ.
'ಖಾತರಿ ಯೋಜನೆ'ಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಇದನ್ನು ಹೇಳುತ್ತಿರುವುದು ನಾನಲ್ಲ, ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದಾರೆ. ಆಡಳಿತ ಪಕ್ಷದ ಶಾಸಕರಲ್ಲಿ ಗೊಂದಲವಿದೆ. ಅವರು (ಕಾಂಗ್ರೆಸ್ ಶಾಸಕರು) ಇಂತಹ ಭೀಕರ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸಹ ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳುತ್ತಿದ್ದಾರೆ' ಎಂದು ಮಾಜಿ ಪ್ರಧಾನಿ ಹೇಳಿದರು.
'ಪ್ರವಾಹದಿಂದಾಗಿ 50ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಜಾನುವಾರುಗಳು ಮೃತಪಟ್ಟಿವೆ. ಬೆಳೆಗಳು ಸಂಪೂರ್ಣ ನಾಶವಾಗಿವೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳಿಗೆ ಹಾನಿಯುಂಟಾಗಿದೆ. ನಾನು ಕಲಬುರಗಿಗೆ ಭೇಟಿ ನೀಡಿ ವಾಸ್ತವವನ್ನು ನೋಡುತ್ತೇನೆ. ಅಲ್ಲಿಗೆ ಭೇಟಿ ನೀಡಿದ ನಂತರ, ಸರ್ಕಾರ ಏನು ಮಾಡಿದೆ ಎಂಬುದರ ಕುರಿತು ನನ್ನ ಅಭಿಪ್ರಾಯವನ್ನು ನೀಡುತ್ತೇನೆ' ಎಂದು ಗೌಡ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿ, ಬೆಳೆ ಹಾನಿಯನ್ನು ಪರಿಶೀಲಿಸಿದ್ದಾರೆ. ಆದರೆ, ಯಾವೆಲ್ಲ ಪರಿಹಾರ ಕೈಗೊಂಡಿದ್ದಾರೆ ಎಂಬುದನ್ನು ತಿಳಿಸಿಲ್ಲ ಎಂದು ಹೇಳಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಜನರ ಸಂಕಷ್ಟಗಳನ್ನು ಅರ್ಥಮಾಡಿಕೊಳ್ಳಬೇಕು ಎಂದರು.
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಕುರಿತು ಮಾತನಾಡಿದ ದೇವೇಗೌಡರು, ಯಾವುದೇ ಚುನಾವಣೆಯಾದರೂ ಮೈತ್ರಿ ಮುಂದುವರಿಯುತ್ತದೆ. ಮೈತ್ರಿಕೂಟದ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪಂಚಾಯಿತಿ ಮತ್ತು ವಿಧಾನಸಭಾ ಚುನಾವಣೆಗಳಿಗೂ ಇದು ಮುಂದುವರಿಯುತ್ತದೆ' ಎಂದು ಅವರು ಹೇಳಿದರು.
'ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ನನ್ನ ಸಂಬಂಧ ಎಂದಿಗೂ ಬದಲಾಗುವುದಿಲ್ಲ. ಕಳೆದ 10 ವರ್ಷಗಳಲ್ಲಿ ನಾನು ಅವರ ಬಗ್ಗೆ ಕೆಟ್ಟದಾಗಿ ಮಾತನಾಡಿದ ಒಂದು ಸಂದರ್ಭವನ್ನು ನನಗೆ ತೋರಿಸಿ' ಎಂದು ಹೇಳಿದರು.
ಮುಂಬರುವ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕನಿಷ್ಠ 50 ರಿಂದ 60 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆ ನಡೆಸುವುದಾಗಿ ತಿಳಿಸಿದ್ದಾರೆ.