ಸಿಎಂ ಸಿದ್ದರಾಮಯ್ಯ 
ರಾಜ್ಯ

ಬಿಹಾರ ಚುನಾವಣೆಗೋಸ್ಕರ GST ಸರಳೀಕರಣ; ಕೇಂದ್ರದ ನಿರ್ಧಾರದಿಂದ ರಾಜ್ಯಕ್ಕೆ 15,000 ಕೋಟಿ ರೂ ನಷ್ಟ: ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3,200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ.3.5 ನೀಡುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ.

ಮೈಸೂರು: ಮುಂಬರುವ ಬಿಹಾರ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿದ್ದು, ಇದರಿಂದ ರಾಜ್ಯಕ್ಕೆ 15,000 ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಆರೋಪಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಉತ್ಸವ ಆಚರಿಸುವ ಅಗತ್ಯ ಏನಿದೆ? 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್‌ಟಿಯನ್ನು ಜಾರಿಗೆ ತಂದು, ದರ ನಿಗದಿಪಡಿಸಿತು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರ ಸರ್ಕಾರ, ಆ ಹಣವನ್ನು ಮರಳಿ ಜನರಿಗೆ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್‌ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ ಜಿಎಸ್‌ಟಿಯನ್ನು ಸರಳೀಕರಣಗೊಳಿಸಿದ್ದಾರೆಂದು ಆರೋಪಿಸಿದ್ದಾರೆ.

ಕೇಂದ್ರದಿಂದ ತೆರಿಗೆ ಹಣವಾಗಿ ಕೇವಲ 3,200 ಕೋಟಿ ರೂ.ಗಳನ್ನು ರಾಜ್ಯಕ್ಕೆ ನೀಡಲಾಗಿದೆ. ಉತ್ತರ ಪ್ರದೇಶಕ್ಕೆ ಶೇ.18 ರಷ್ಟು ನೀಡುತ್ತಿದ್ದು, ರಾಜ್ಯಕ್ಕೆ ಕೇವಲ ಶೇ.3.5 ನೀಡುತ್ತಿರುವುದು ಕನ್ನಡಿಗರಿಗೆ ಮಾಡುತ್ತಿರುವ ಘೋರ ಅನ್ಯಾಯ. ಕರ್ನಾಟಕ 4.5 ಲಕ್ಷ ಕೋಟಿ ತೆರಿಗೆ ರೂಪದಲ್ಲಿ ಕೇಂದ್ರಕ್ಕೆ ನೀಡಿದರೆ, ನಮಗೆ ರೂಪಾಯಿಗೆ ಕೇವಲ 14 ಪೈಸೆ ಮಾತ್ರ ಮರಳಿ ದೊರೆಯುತ್ತದೆ.

15ನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಅನುದಾನವನ್ನು ಕೇಂದ್ರ ವಿತ್ತಸಚಿವರು ರದ್ದುಪಡಿಸಿದರು. ಆಯೋಗದ ಶಿಫಾರಸ್ಸಿನಂತೆ ರೂ.5,490 ಕೋಟಿ ಹಾಗೂ ಕೆರೆಗಳ ಅಭಿವೃದ್ದಿ ರೂ.3,000 ಕೋಟಿ, ರಸ್ತೆ ನಿರ್ಮಾಣಕ್ಕೆ ರೂ.3,000 ಕೋಟಿ, ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,000 ಕೊಟಿ ಅನುದಾನವನ್ನು ನಮಗೆ ಕೊಟ್ಟಿಲ್ಲ. ಒಟ್ಟಾರೆ 17,000 ಕೋಟಿ ರೂ. ಬರಬೇಕಾಗಿದ್ದ ಅನುದಾನ ಖೋತಾ ಆಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಅಗತ್ಯಬಿದ್ದರೆ ನ್ಯಾಯಾಲಯದ ನೆರವು ಪಡೆದು ಕೇಂದ್ರದ ಅನುದಾನ ಪಡೆಯಲಾಗುವುದು ಎಂದು ಹೇಳಿದರು.

ಕೇಂದ್ರದ ಕಡಿಮೆ ಅನುದಾನದ ನಡುವೆ ಗ್ಯಾರಂಟಿಗಳ ವೆಚ್ಚವನ್ನು ಭರಿಸುವುದು ಸರ್ಕಾರಕ್ಕೆ ಸವಾಲಾಗಿದ್ದರೂ, ಸವಾಲನ್ನು ದಿಟ್ಟತನದಿಂದ ಎದುರಿಸುತ್ತಿದ್ದೇವೆ. ಜಿಎಸ್‌ಟಿ ಸರಳೀಕರಣದಿಂದ ರಾಜ್ಯ ಸರ್ಕಾರಗಳು ಹೆಚ್ಚು ನಷ್ಟ ಎದುರಿಸಲಿವೆ. ಕರ್ನಾಟಕಕ್ಕೆ ಇದರಿಂದ ವಾರ್ಷಿಕ ಅಂದಾಜು 15 ಸಾವಿರ ಕೋಟಿ ರೂಪಾಯಿ ನಷ್ಟವಾಗಲಿದೆ. ಕೇಂದ್ರ ಸರ್ಕಾರವು ಎನ್ ಡಿ ಎ ಆಡಳಿತದಡಿ ಬರುವ ರಾಜ್ಯಗಳ ಅನುಕೂಲಕ್ಕೆ ತಕ್ಕಂತೆ ಜಿಎಸ್‌ಟಿ ಪರಿಹಾರವನ್ನು ನೀಡುತ್ತಿದೆ. ಕರ್ನಾಟಕದ ಬಿಜೆಪಿ ಸಂಸದರಿಗೆ ಮೋದಿಯವರನ್ನು ಹೊಗಳುವುದೇ ಕೆಲಸವಾಗಿದ್ದು, ರಾಜ್ಯದ ಹಿತಚಿಂತನೆ ಮಾಡುತ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಇದೇ ವೇಳೆ ಜಾತಿಗಣತಿ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಈಗಾಗಲೇ ಸುಮಾರು 80 ಲಕ್ಷ ಮನೆಗಳಿಂದ 3 ಕೋಟಿ ಜನಸಂಖ್ಯೆಯ ಸಮೀಕ್ಷೆ ಪೂರ್ಣಗೊಂಡಿದ್ದು, ಅಕ್ಟೋಬರ್ 7ರೊಳಗೆ ಸಮೀಕ್ಷೆ ಕಾರ್ಯ ಮುಗಿಯುವ ಭರವಸೆಯಿದೆ. 1.80 ಕೋಟಿ ಕುಟುಂಬಗಳ ಸಮೀಕ್ಷೆ ನಡೆಯಬೇಕಿದೆ. ಸಮೀಕ್ಷೆಯ ಪ್ರಗತಿಯನ್ನು ಗಮನಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮತಾಂತರ ಹಾಗೂ ಜಾತಿಗಳನ್ನು ಒಡೆಯುವ ದೃಷ್ಠಿಯಿಂದ ರಾಜ್ಯ ಸರ್ಕಾರ ಸಮೀಕ್ಷೆ ಮಾಡುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ಹೇಳಿಕೆಗೆ ಪ್ರತಿಕ್ರಿಯಿಸಿ, ಇದು ಅವರ ಅಜ್ಞಾನಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಕಿಡಿಕಾರಿದರು.

ಪ್ರಹ್ಲಾದ್ ಜೋಷಿಯವರು ಕೇಂದ್ರ ಸಚಿವರಾಗಿದ್ದು, ಕೇಂದ್ರ ನಡೆಸಲಿರುವ ಜಾತಿಸಮೀಕ್ಷೆಯ ಉದ್ದೇಶವನ್ನು ತಿಳಿಸಬೇಕು. ಕೇಂದ್ರ ಸರ್ಕಾರಕ್ಕೆ ಜಾತಿ, ಧರ್ಮ ಒಡೆಯುವ ಉದ್ದೇಶವಿದೆಯೇ? ಕರ್ನಾಟಕದಲ್ಲಿ ಆರ್ಥಿಕ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜನರ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯುವ ಉದ್ದೇಶವಿದೆ. ಕಾಂತರಾಜು ವರದಿಯಲ್ಲಿ ಬ್ರಾಹ್ಮಣ ಕ್ರಿಶ್ಚಿಯನ್ ಎಂಬಿತ್ಯಾದಿ ಜಾತಿಗಳನ್ನು ನಮೂದಿಸಲಾಗಿತ್ತು. ಜನರು ತಮ್ಮ ಜಾತಿಯನ್ನು ಸ್ವಯಂಪ್ರೇರಿತರಾಗಿ ನಮೂದಿಸಿದರೆ ಅದಕ್ಕೆ ಸರ್ಕಾರ ಜವಾಬ್ದಾರವಾಗುವುದಿಲ್ಲ. ಆದರೆ. ಆಯೋಗ ಈ ಜಾತಿಗಳನ್ನು ಪಟ್ಟಿಯಿಂದ ತೆಗೆದುಹಾಕಿದೆ. ಆದ್ದರಿಂದ ಜನರು ಸ್ವಯಂಪ್ರೇರಿತವಾಗಿ ಹೇಳುವ ಜಾತಿಯ ಮಾಹಿತಿಯನ್ನು ಆಯೋಗ ಪಡೆಯಲಿದೆ. ಇದರಲ್ಲಿ ಜಾತಿ ಒಡೆಯುವ ಪ್ರಶ್ನೆಯಿಲ್ಲ. ಜನರನ್ನು ರಾಜಕೀಯ ಉದ್ದೇಶದಿಂದ ದಾರಿತಪ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT