ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖಾಧಿಕಾರಿಯನ್ನು ಬದಲಾಯಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಕೋರ್ಟ್ ವಜಾಗೊಳಿಸಿದೆ.
ಮುಡಾ ಪ್ರಕರಣದ ತನಿಖಾಧಿಕಾರಿಯಾಗಿರುವ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಉದೇಶ್ ಅವರನ್ನು ಬದಲಾವಣೆ ಮಾಡಿ, ಬೇರೆ ಅಧಿಕಾರಿ ನೇಮಿಸುವಂತೆ ಲೋಕಾಯುಕ್ತರಿಗೆ ನಿರ್ದೇಶಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಹೆಚ್ಚುವರಿ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು ಸ್ನೇಹಮಯಿ ಕೃಷ್ಣ ವಿನಂತಿಯನ್ನು ತಿರಸ್ಕರಿಸಿತು ಮತ್ತು ಬದಲಾಗಿ ನಡೆಯುತ್ತಿರುವ ತನಿಖೆಯನ್ನು "ಸಾಧ್ಯವಾದಷ್ಟು ಬೇಗ" ಮತ್ತು ಗರಿಷ್ಠ ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಳಿಸಲು ಲೋಕಾಯುಕ್ತರಿಗೆ ನಿರ್ದೇಶಿಸಿದೆ.
ಸಮಗ್ರ ವರದಿಯನ್ನು ಸಲ್ಲಿಸಲು ಹೆಚ್ಚಿನ ಸಮಯ ವಿಸ್ತರಿಸಲಾಗುವುದಿಲ್ಲ ಎಂದು ಆದೇಶದಲ್ಲಿ ನಿರ್ದಿಷ್ಟವಾಗಿ ಹೇಳಿ, ವಿಚಾರಣೆಯನ್ನು ನವೆಂಬರ್ 15ಕ್ಕೆ ಮುಂದೂಡಿದೆ.
ಇನ್ನು ಲೋಕಾಯುಕ್ತ ‘ಬಿ’ ರಿಪೋರ್ಟ್ ಪ್ರಶ್ನಿಸಿರುವುದಕ್ಕೆ ಕೋರ್ಟ್ ಯಾವುದೇ ಆದೇಶ ನೀಡಿಲ್ಲ. ತನಿಖೆ ಪೂರ್ಣಗೊಂಡ ಬಳಿಕವೇ ಬಿ ರಿಪೋರ್ಟ್ ಬಗ್ಗೆ ತೀರ್ಮಾನ ಮಾಡುವುದಾಗಿ ಕೋರ್ಟ್ ತಿಳಿಸಿದೆ. ಹೀಗಾಗಿ ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಲು ಲೋಕಾಯುಕ್ತ ಪೊಲೀಸರಿಗೆ ಸೂಚನೆ ನೀಡಿದೆ.