ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯ ಸರ್ಕಾರಿ ಸಾರಿಗೆಯ ನಾಲ್ಕು ನಿಗಮಗಳ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಅಕ್ಟೋಬರ್ 15 ರಿಂದ 19 ರವರೆಗೆ ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದಾರೆ.
ಬೇಡಿಕೆಗಳೇನು?
38 ತಿಂಗಳ ಹಿಂಬಾಕಿ ಬಿಡುಗಡೆ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅ. 15 ರಿಂದ ಐದು ದಿನಗಳ ಕಾಲ ಉಪವಾಸ ಸತ್ಯಾಗ್ರಹಕ್ಕೆ ಕರೆ ನೀಡಿದೆ. ಅ. 15ರಿಂದ 19ರವರೆಗೆ ಬೆಂಗಳೂರು, ಹುಬ್ಬಳ್ಳಿ ಹಾಗೂ ಕಲಬುರಗಿ ನಗರಗಳಲ್ಲಿ ಐದು ದಿನಗಳ ಕಾಲ ನಾಲ್ಕು ಸಾರಿಗೆ ನಿಗಮಗಳ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ.
ಈ ಹಿಂದೆಯೂ ಮುಷ್ಕರ
ಇದರಿಂದ ಸಾರ್ವಜನಿಕರಿಗೆ ಸಂಚಾರಕ್ಕೆ ಅಡಚಣೆಯಾಗಲಿದೆ. ಆಗಸ್ಟ್- 5 ರಂದು ನಾಲ್ಕು ನಿಗಮದ ನೌಕರರು ಸಾರಿಗೆ ಮುಷ್ಕರಕ್ಕೆ ಮುಂದಾಗಿದ್ದರು. ಹೈಕೋರ್ಟ್ ಆದೇಶದ ಹಿನ್ನೆಲೆ ಮುಷ್ಕರವನ್ನು ವಾಪಸ್ ಪಡೆಯಲಾಗಿತ್ತು. ಆದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿಲ್ಲ ಮತ್ತು ಮಾತುಕತೆಗೆ ಕರೆಯುತ್ತಿಲ್ಲ. ಹೀಗಾಗಿ ಮತ್ತೆ ಮುಷ್ಕರ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಬೇಡಿಕೆ ಈಡೇರಿಸದ ಸರ್ಕಾರ
ಆ. 5ರಂದು ಆರಂಭಿಸಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು ಹೈಕೋರ್ಟ್ ಆದೇಶದ ಮೇರೆಗೆ ತಡೆಹಿಡಿಯಲಾಗಿತ್ತು. ಸರಕಾರ ಬೇಡಿಕೆಗಳ ಕುರಿತು ಮಾತುಕತೆ ಮುಂದುವರಿಸುವುದಾಗಿ ಹೈಕೋರ್ಟ್‌ಗೆ ತಿಳಿಸಿತ್ತು. ಆದರೆ, ಸರಕಾರ ಈವರೆಗೂ ಮಾತುಕತೆ ಆರಂಭಿಸದೆ ಕಾರ್ಮಿಕ ವಿರೋಧಿ ಧೋರಣೆ ತಾಳಿದೆ ಎಂದು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಎಚ್.ವಿ. ಅನಂತ ಸುಬ್ಬರಾವ್ ಆರೋಪಿಸಿದ್ದಾರೆ.