ಬೆಂಗಳೂರು: ಶಿಕ್ಷಣ ಇಲಾಖೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ನಡೆಯಲಿದೆ. ರಾಜ್ಯ ಸರ್ಕಾರವು ಅನುದಾನಿತ ಶಾಲೆಗಳಿಗೆ 6,000 ಅತಿಥಿ ಶಿಕ್ಷಕರು, ಸರ್ಕಾರಿ ಶಾಲೆಗಳಿಗೆ 12,000 ಶಿಕ್ಷಕರು ಸೇರಿದಂತೆ 18,000 ಶಿಕ್ಷಕರ ನೇಮಕಾದಿಗೆ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ.
ಶಿವಮೊಗ್ಗ ಪ್ರೆಸ್ ಟ್ರಸ್ಟ್ ಇಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ಅಧಿಕಾರ ವಹಿಸಿಕೊಂಡ 11 ತಿಂಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸುಮಾರು 13,500 ಶಿಕ್ಷಕರನ್ನು ನೇಮಿಸಿಕೊಂಡಿರುವುದಾಗಿ ಹೇಳಿದರು.
ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಲು ಸರ್ಕಾರ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಿದೆ. ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ನಾಲ್ಕರಿಂದ ಐದು ಸಾವಿರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ಕಲ್ಪಿಸಲಿದ್ದು, ಸರ್ಕಾರದಿಂದಲೇ ಗೌರವ ಧನ ಪಾವತಿಸಲಾಗುವುದು. ಇದರ ಜತೆಗೆ ಸರ್ಕಾರಿ ಶಾಲೆಗಳ 12,000, ಅನುದಾನಿತ ಶಾಲೆಗಳ 6 ಸಾವಿರ ಸೇರಿ 18,000 ಶಿಕ್ಷಕರ ನೇಮಕಾತಿಗೆ ಶೀಘ್ರವೇ ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.
1995ರ ನಂತರದ 10 ವರ್ಷಗಳ ಅವಧಿಯಲ್ಲಿ ಆರಂಭವಾದ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ ತಕ್ಷಣ ಈ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದಲ್ಲದೆ, ಅಂಗವಿಕಲ ಮಕ್ಕಳಿಗೆ ಚಿಕಿತ್ಸೆ ಮತ್ತು ಶಿಕ್ಷಣವನ್ನು ಒಂದೇ ಕಡೆ ಒದಗಿಸುವ ಸಲುವಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ಎರಡು ಹೊಸ ವಸತಿಯುತ ಶಾಲೆಗಳನ್ನು ಆರಂಭಿಸಲಾಗುವುದು ಎಂದೂ ಘೋಷಿಸಿದರು. ಇದೇ ವೇಳೆ ಟಿಇಟಿ ಮತ್ತು ಸಿಇಟಿ ಪರೀಕ್ಷೆಗಳಿಗೆ ಸರ್ಕಾರ ಶೀಘ್ರದಲ್ಲೇ ಅಧಿಸೂಚನೆ ಹೊರಡಿಸಲಿದೆ ಎಂದು ಹೇಳಿದರು.
ಮುಂದಿನ ಶೈಕ್ಷಣಿಕ ವರ್ಷದಿಂದ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಯ ಬಳಿ ಕ್ಯಾನ್ಸರ್ ಪೀಡಿತ ಮಕ್ಕಳಿಗಾಗಿ ಸರ್ಕಾರ ವಿಶೇಷ ಶಾಲೆಗಳನ್ನು ಪ್ರಾರಂಭಿಸಲಿದೆ. ರಾಜ್ಯದಲ್ಲಿ ಯಾವುದೇ ಸರ್ಕಾರಿ ಶಾಲೆಯನ್ನು ಮುಚ್ಚಲಾಗುವುದಿಲ್ಲ. ಕಳಪೆ ದಾಖಲಾತಿ ಇದ್ದರೆ, ಆ ಶಾಲೆಯನ್ನು ಹತ್ತಿರದ ಸಂಸ್ಥೆಯೊಂದಿಗೆ ವಿಲೀನಗೊಳಿಸಲಾಗುತ್ತದೆ ಎಂದು ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸುವ ಪ್ರಸ್ತಾವನೆಯ ಕುರಿತು ಪ್ರತಿಕ್ರಿಯಿಸಿ, ಅದಕ್ಕಾಗಿ ಹಣವನ್ನು ಕಾಯ್ದಿರಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾಗಿ ತಾವು ಪ್ರಾರಂಭಿಸಿದ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದ ಅವರು, ಭದ್ರಾ ಜಲಾಶಯದ ಕ್ರೆಸ್ಟ್ ಗೇಟ್‌ಗಳನ್ನು ನನ್ನ ಪ್ರಯತ್ನದಿಂದಾಗಿ ಬದಲಾಯಿಸಲಾಯಿತು ಎಂದರು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕಾಗಿ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನಗಳನ್ನು ನೀಡುವ ವಿಷಯದ ಬಗ್ಗೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರೊಂದಿಗೆ ಚರ್ಚಿಸಿರುವುದಾಗಿ ಸಚಿವರು ಹೇಳಿದರು.
ಸೊರಬದಲ್ಲಿ ರಸ್ತೆ ನಿರ್ಮಾಣಕ್ಕಾಗಿ ಹಣವನ್ನು ಮಂಜೂರು ಮಾಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸಿದರು.