ಬೆಂಗಳೂರು: ಮೇ 2023 ರಿಂದ ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷತೆ ಮತ್ತು ಭದ್ರತೆ ಇಲ್ಲದಂತಾಗಿದೆ ಎಂದು ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಆರೋಪಿಸಿದ್ದು, ರಾಜ್ಯಕ್ಕೆ ಭೇಟಿ ನೀಡುವಂತೆ ರಾಷ್ಟ್ರೀಯ ಮಹಿಳಾ ಆಯೋಗವನ್ನು (ಎನ್‌ಸಿಡಬ್ಲ್ಯೂ) ಒತ್ತಾಯಿಸಿದೆ.
ಈ ಸಂಬಂಧ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಪತ್ರ ಬರೆದಿರುವ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ ಮಂಜುಳಾ, ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯಾದ್ಯಂತ ಅತ್ಯಾಚಾರ, ಕೊಲೆ, ಬಾಣಂತಿಯರ ಸಾವುಗಳು ಮತ್ತು ಪೋಕ್ಸೊ ಪ್ರಕರಣಗಳು ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ್ದಾರೆ.
ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ ಎಂದು ಅವರು ಟೀಕಿಸಿದ್ದಾರೆ.
ಕಾಂಗ್ರೆಸ್ ನ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದಶಕ್ತಿ ಯೋಜನೆ ಸಂಪೂರ್ಣವಾಗಿ ವೈಫಲ್ಯಕ್ಕೊಳಗಾಗಿದೆ ಎಂಬ ಹೇಳಿಕೆ ಸೇರಿದಂತೆ 18 ಘಟನೆಗಳನ್ನು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.