ಬೆಂಗಳೂರು: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಮಂಗಳವಾರ ಬೆಳ್ಳಂಬೆಳಗ್ಗೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಕೃಷಿ ಇಲಾಖೆ ಎಡಿ ಚಂದ್ರಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಏಕಕಾಲಕ್ಕೆ 3 ಕಡೆ ದಾಳಿ ನಡೆದಿದ್ದು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಹಾವೇರಿಯಲ್ಲೂ ಲೋಕಾಯುಕ್ತ ದಾಳಿ ಮುಂದುವರಿದಿದೆ.
ಚಿತ್ರದುರ್ಗದಲ್ಲಿ ದಾಳಿ
ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ (ಹೆಚ್ಚುವರಿ ನಿರ್ದೇಶಕ) ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.
ಚಂದ್ರಕಾಂತ್ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.
ದಾವಣಗೆರೆಯಲ್ಲೂ ದಾಳಿ
ದಾವಣಗೆರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಆಸ್ತಿ ಪಾಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಎಸ್ಡಿಎ ನಡುವಿನಮನೆ ಎಂಬುವವರ ನಿವಾಸಗಳ ಮೇಲೆ ದಾಳಿ ನಡೆದಿದೆ. ದಾವಣಗೆರೆ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.