ಬೆಂಗಳೂರು: ದೀಪಾವಳಿಗೂ ಮುನ್ನ ರಾಜ್ಯ ಸರ್ಕಾರ ತನ್ನ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ತುಟ್ಟಿಭತ್ಯೆಯನ್ನು(ಡಿಎ) ಶೇ.2ರಷ್ಟು ಹೆಚ್ಚಿಸಿ ಬುಧವಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಜುಲೈ 1ರಿಂದಲೇ ಅನ್ವಯವಾಗುವಂತೆ ಮೂಲವೇತನದ ಶೇ.12.25 ರಿಂದ ಶೇ.14.25ಕ್ಕೆ ಪರಿಷ್ಕರಿಸಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ.
ಕೇಂದ್ರ ಸರ್ಕಾರ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳದ ಬಳಿಕ ರಾಜ್ಯ ಸರ್ಕಾರ ತುಟ್ಟಿಭತ್ಯೆಯನ್ನು ಪರಿಷ್ಕರಿಸುವ ಸಂಪ್ರದಾಯವಿದೆ.
ಇತ್ತೀಚೆಗೆ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ಶೇ.3ರಷ್ಟು ಡಿಎ ಹೆಚ್ಚಳ ಮಾಡಿತ್ತು.
ಸರ್ಕಾರದ ಈ ನಿರ್ಧಾರವನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರು ಸ್ವಾಗತಿಸಿದ್ದು, ನೌಕರರ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.