ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಪೆರಿಫೆರಲ್ ರಿಂಗ್ ರಸ್ತೆಗೆ ಅನುಮೋದನೆ ನೀಡಿದ್ದು, ಅದನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್' (ಬಿಬಿಸಿ) ಎಂದು ಮರುನಾಮಕರಣ ಮಾಡಿದೆ.
ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು, ತುಮಕೂರಿನಿಂದ ಎಲೆಕ್ಟ್ರಾನಿಕ್ ಸಿಟಿವರೆಗಿನ 117 ಕಿಮೀ ಪಿಆರ್‌ಆರ್‌ಗೆ ಈ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಇಲ್ಲಿಯವರೆಗೆ ಯಾವುದೇ ನಿರ್ಧಾರ ತೆಗೆದುಕೊಂಡಿರಲಿಲ್ಲ ಎಂದರು.
"ಹಿಂದಿನ ಸರ್ಕಾರಗಳು ಅದನ್ನು ಕೈಬಿಡಲು ಬಯಸಿದ್ದವು. ಈಗ ನೈಸ್ ರಸ್ತೆಗೆ ಪರ್ಯಾಯ ರಸ್ತೆ ಅಗತ್ಯವಿದೆ. ಯಾವುದೇ ರಸ್ತೆಯನ್ನು ಡಿನೋಟಿಫೈ ಮಾಡುವುದಿಲ್ಲ" ಎಂದು ಬೆಂಗಳೂರು ಅಭಿವೃದ್ಧಿ ಖಾತೆಯನ್ನು ಹೊಂದಿರುವ ಶಿವಕುಮಾರ್ ತಿಳಿಸಿದರು.
ಬೆಂಗಳೂರು ನಗರದಲ್ಲಿ ಇಷ್ಟು ಪ್ರಮಾಣದ ಹೊಸ ರಸ್ತೆಯನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯುತ್ತಿದೆ. ತುಮಕೂರು ರಸ್ತೆಯಿಂದ ಯಲಹಂಕ, ಎಲೆಕ್ಟ್ರಾನಿಕ್ ಸಿಟಿ ಮೂಲಕ ಮೈಸೂರು ರಸ್ತೆಯವರೆಗೆ ಹಾಗೂ ಬೆಂಗಳೂರು ಎಕ್ಸಿಬಿಷನ್ ಸೆಂಟರ್ವರೆಗೂ ಸಾಗಲಿದೆ. ಈ ರಸ್ತೆಯು ಬೆಂಗಳೂರಿನ ಉತ್ತರ ಭಾಗದಲ್ಲಿ 73 ಕಿ.ಮೀ ಸಾಗಲಿದ್ದು, ಉಳಿದದ್ದು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾಗಲಿದೆ ಎಂದರು.
ಈ ಹಿಂದಿನ ಸರ್ಕಾರ ಈ ಯೋಜನೆಗೆ ಅಧಿಸೂಚನೆ ಹೊರಡಿಸಲಾಗಿತ್ತಾದರೂ ಇದನ್ನು ಹಿಂಪಡೆದಿರಲಿಲ್ಲ. ಈಗ ಬೆಂಗಳೂರಿನಲ್ಲಿ ನೈಸ್ ರಸ್ತೆಗೆ ಪರ್ಯಾಯ ರಸ್ತೆ ಅಗತ್ಯವಿದೆ. ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಬಾರದು ಎಂದು ಈ ಯೋಜನೆ ಕೈಗೊತ್ತಿಕೊಂಡಿದೆ. ಈ ಯೋಜನೆಗೆ ಸರ್ಕಾರದ ಖಾತರಿಯೊಂದಿಗೆ ಹುಡ್ಕೋ ಮೂಲಕ 27 ಸಾವಿರ ಕೋಟಿ ಸಾಲ ಪಡೆಯಲಾಗಿದೆ ಎಂದು ಹೇಳಿದರು.
ಈ ಯೋಜನೆಗಾಗಿ 100 ಮೀ. ಅಗಲ ಜಾಗಕ್ಕೆ ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಸರ್ಕಾರ ಬೆಂಗಳೂರು, ಮೈಸೂರು ಹೆದ್ದಾರಿ ಗಾತ್ರ (65 ಮೀ.)ದಲ್ಲೇ ಈ ರಸ್ತೆ ಮಾಡಲು ತೀರ್ಮಾನಿಸಿದೆ. ರಸ್ತೆಯ ಎರಡೂ ಭಾಗದಲ್ಲಿ ಸರ್ವೀಸ್ ರಸ್ತೆ ಇರಲಿದ್ದು, ಪ್ರಮುಖ ರಸ್ತೆ ಟೋಲ್ ರಸ್ತೆಯಾಗಲಿದೆ. ಈ ರಸ್ತೆಯ ಮಧ್ಯೆ ಮೆಟ್ರೋ ಯೋಜನೆ ರೂಪಿಸಲು ಜಾಗ (5 ಮೀ.) ಕಲ್ಪಿಸಲಾಗುವುದು. ಉಳಿದ 35 ಮೀ. ಜಾಗವನ್ನು ರೈತರಿಗೆ ಪರಿಹಾರ ರೂಪದಲ್ಲಿ ಮರಳಿ ನೀಡಲು ತೀರ್ಮಾನಿಸಿದ್ದೇವೆ. ಈ ಜಾಗವನ್ನು ಹರಾಜು ಹಾಕಬೇಕು ಎಂಬ ಸಲಹೆಗಳು ಬಂದಿತ್ತಾದರೂ ರೈತರಿಗೆ ನೀಡಲು ನಿರ್ಧರಿಸಿದ್ದೇವೆ. ಇದು ವಾಣಿಜ್ಯ ಉದ್ದೇಶಕ್ಕೆ ನೆರವಾಗಲಿರುವ ಹಿನ್ನೆಲೆಯಲ್ಲಿ ರೈತರ ಮನವಿ ಮೇರೆಗೆ ಜಾಗವನ್ನು ಅವರಿಗೆ ನೀಡುವ ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.
20 ಗುಂಟೆಗಿಂತ ಒಳಗಿರುವವರಿಗೆ ನಗದು ಪರಿಹಾರ ಮಾತ್ರ ನೀಡಲಾಗುವುದು. ಅದಕ್ಕಿಂತ ಹೆಚ್ಚಿನ ಭೂಮಿ ಕಳೆದುಕೊಳ್ಳುವವರಿಗೆ ಈ ಆಯ್ಕೆಗಳನ್ನು ನೀಡಲಾಗಿದ್ದು, ಯಾವುದಾದರೂ ಒಂದು ಆಯ್ಕೆಯನ್ನು ಆರಿಸಿಕೊಳ್ಳಬಹುದು ಎಂದು ಸ್ಪಷ್ಟಪಡಿಸಿದರು.
ಪರಿಹಾರ ಪಡೆಯಲು ನಾಲ್ಕು ಆಯ್ಕೆ
ಸರ್ಕಾರ ಹಾಗೂ ಬಿಡಿಎ ಮೇಲೆ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನಾಲ್ಕು ರೀತಿಯಲ್ಲಿ ಪರಿಹಾರ ನೀಡಲು ಸರ್ಕಾರ ಮುಂದಾಗಿದೆ. ಮಾರುಕಟ್ಟೆ ದರದಲ್ಲಿ ನಗರ ಭಾಗದಲ್ಲಿ ಎರಡು ಪಟ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂರುಪಟ್ಟು ನಗದು ಪರಿಹಾರ ಅಥವಾ ಟಿಡಿಆರ್ ಅಥವಾ ಎಫ್ಎಆರ್ ಅಥವಾ 35% ವಾಣಿಜ್ಯ ಭೂಮಿಯನ್ನು ಪಡೆಯುವ ಅವಕಾಶವನ್ನು ನೀಡಲಾಗಿದೆ. ಒಂದು ವೇಳೆ ವಾಣಿಜ್ಯ ಭೂಮಿ ಬೇಡ ವಸತಿ ಪ್ರದೇಶದಲ್ಲಿ ಜಾಗ ಬೇಕು ಎಂದರೆ ಬಿಡಿಎ ವತಿಯಿಂದ ರೂಪಿಸಲಾಗಿರುವ ನೂತನ ಬಡಾವಣೆಗಳಲ್ಲಿ 40% ಜಾಗ ನೀಡಲಾಗುವುದು. ಬಿಡಿಎ ಕಾಯ್ದೆಯಲ್ಲಿ ಹೊಸ ಕಾಯ್ದೆ ಅನುಸಾರ ಹೆಚ್ಚಿನ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ರೈತರಿಗೆ ನೆರವಾಗಲು ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ ಎಂದು ಮಾಹಿತಿ ನೀಡಿದರು.
2 ವರ್ಷಗಳಲ್ಲಿ ಯೋಜನೆ ಪೂರ್ಣ
ಮುಂದಿನ 2 ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳಿಸಲಾಗುವುದು. ಸರ್ಕಾರದ ಈ ತೀರ್ಮಾನಕ್ಕಾಗಿ ರೈತರು ಕಾತರರಾಗಿದ್ದರು. ಒಂದು ವೇಳೆ ಯಾರಾದರೂ ಭೂಮಿ ನೀಡಲು ನಿರಾಕರಿಸಿದರೆ, ನಾವು ಸಹಜ ಸ್ವಾಧೀನ ಪ್ರಕ್ರಿಯೆ ಪರಿಹಾರದ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಯೋಜನೆ ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಈ ಜಾಗವನ್ನು ಡಿನೋಟಿಫಿಕೇಶನ್ ಮಾಡುವುದಿಲ್ಲ. ಸಂಚಾರ ದಟ್ಟಣೆಯಿಂದ ಬೆಂಗಳೂರಿನಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ಯೋಜನೆ ಅಗತ್ಯವಾಗಿದೆ. ಈ ಯೋಜನೆಯಿಂದ 1900 ಕುಟುಂಬಗಳಿಗೆ ಪರಿಣಾಮ ಬೀರುತ್ತದೆಯಾದರೂ ಬೆಂಗಳೂರು ನಗರಕ್ಕೆ ದೊಡ್ಡ ಮಟ್ಟದ ನಿರಾಳತೆ ನೀಡಲಿದೆ. ಹೀಗಾಗಿ ರಾಜ್ಯ ಸರ್ಕಾರ ಈ ಮಹತ್ತರ ತೀರ್ಮಾನ ಕೈಗೊಂಡಿದೆ ಎಂದರು.