ಬೆಂಗಳೂರು: ಬೈಕ್ ಸವಾರನಿಗೆ ಕಪಾಳಮೋಕ್ಷ ಮಾಡಿದ್ದ ಸಂಚಾರಿ ಪೊಲೀಸ್ ಒಬ್ಬರನ್ನು ಅಮಾನತು ಮಾಡಲಾಗಿದೆ. ರಸ್ತೆಬದಿಯಲ್ಲಿ ನಡೆದ ಈ ಘಟನೆಯ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಂಚಾರಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
ಸಾರ್ವಜನಿಕರ ಮುಂದೆ ಪೊಲೀಸ್ ಅಧಿಕಾರಿ ಬೈಕ್ ಸವಾರನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಅಧಿಕಾರ ದುರುಪಯೋಗದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು.
ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಂಚಾರಿ ಡಿಸಿಪಿ, ಸವಾರನಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದರೆ.
ಈ ಘಟನೆ ಬೆಂಗಳೂರಿನ ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವೈರಲ್ ಆಗಿರುವ ವಿಡಿಯೋದಲ್ಲಿ ಬೈಕ್ ನಲ್ಲಿ ಬರುತ್ತಿದ್ದ ವ್ಯಕ್ತಿಯನ್ನು ಸಂಚಾರಿ ಪೊಲೀಸ್ ಅಧಿಕಾರಿಯೊಬ್ಬರು ತಡೆದಿದ್ದಾರೆ. ಈ ವೇಳೆ ದಾಖಲೆ ಪರಿಶೀಲನೆ ಮಾಡುವಾಗ ಅಧಿಕಾರಿ ಮತ್ತು ಬೈಕ್ ಸವಾರನ ನಡುವೆ ವಾಗ್ವಾದ ನಡೆದಿದೆ.
ಈ ವೇಳೆ ನೋಡ ನೋಡುತ್ತಲೇ ಟ್ರಾಫಿಕ್ ಪೊಲೀಸ್ ಸಿಬ್ಬಂದಿ ಬೈಕ್ ಸವಾರನ ಕೆನ್ನೆಗೆ ಎರಡು ಬಾರಿ ಭಾರಿಸಿದ್ದಾರೆ. ಈ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಪೊಲೀಸರ ವರ್ತನೆಯನ್ನು ಖಂಡಿಸಿದ್ದಾರೆ.
ಇನ್ಫೋಸಿಸ್‌ನ ಮಾಜಿ ಸಿಎಫ್‌ಒ ಮೋಹನ್ ದಾಸ್ ಪೈ ಕೂಡ ಕಾನ್‌ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನಮ್ಮ ಬೆಂಗಳೂರು ಪೊಲೀಸ್ ಆಯುಕ್ತರು ಇದರ ವಿರುದ್ಧ ಕ್ರಮ ಕೈಗೊಳ್ಳುತ್ತಾರೆಯೇ? ಪೊಲೀಸರು ನಾಗರೀಕನ ಮೇಲೆ ಹೇಗೆ ಕೈ ಮಾಡಬಹುದು? ನಾವು ನಮ್ಮ ನಗರದಲ್ಲಿ ಗುಲಾಮರೇ ಅಥವಾ ನಾಗರಿಕರೇ? ಗೃಹ ಸಚಿವ ಡಾ. ಜಿ. ಪರಮೇಶ್ವರ ದಯವಿಟ್ಟು ಮಧ್ಯಪ್ರವೇಶಿಸಿ. ಇದು ಸ್ವೀಕಾರಾರ್ಹವಲ್ಲ. ಡಿಜಿಪಿ ಹಾಗೂ ನಮ್ಮ ಮುಖ್ಯಮಂತ್ರಿಗಳು ಪ್ರಮಾಣ ಮಾಡಿದಂತೆ ನಾಗರಿಕರನ್ನು ರಕ್ಷಿಸುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ (ಸಂಚಾರ ದಕ್ಷಿಣ) ಗೋಪಾಲ್ ಎಂ ಬ್ಯಾಕೋಡ್ ಅವರು, ಜವಾಬ್ದಾರಿ ಹಾಗೂ ಗೌರವ ಪರಸ್ಪರ ಸಂಬಂಧವನ್ನು ಹೊಂದಿದೆ. ಅನುಚಿತವಾಗಿ ವರ್ತಿಸಿರುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಸಂಚಾರ ನಿಯಮ ಉಲ್ಲಂಘನೆಗಾಗಿ ಬೈಕ್ ಸವಾರನಿಂದ 500 ರೂ. ದಂಡವನ್ನು ಸಂಗ್ರಹಿಸಲಾಗಿದೆ ಎಂದು ತಿಳಿದುಬಂದಿದೆ.