ಬೆಂಗಳೂರು: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕು ಕೇಂದ್ರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS) ಪಥಸಂಚಲನ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ನವೆಂಬರ್ 2ರಂದು ಅನುಮತಿ ನೀಡಿದೆ
ಅರ್ಜಿದಾರರ ಮನವಿಯನ್ನು ಪರಿಗಣಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಜೊತೆಗೆ ಪಥಸಂಚಲನ ಮಾರ್ಗದೊಂದಿಗೆ ಹೊಸದಾಗಿ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸುವಂತೆ ಅರ್ಜಿದಾರರಿಗೆ ಸೂಚನೆ ನೀಡಿ, ಅಕ್ಟೋಬರ್ 24ರ ಮಧ್ಯಾಹ್ನ 2.30ಕ್ಕೆ ವಿಚಾರಣೆ ಮುಂದೂಡಿದೆ.
ಇಂದು ಪಥ ಸಂಚಲನ ನಡೆಸಲು ಅವಕಾಶ ನೀಡದ ಚಿತ್ತಾಪುರ ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ತುರ್ತು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಂಜಿಎಸ್ ಕಮಲ್ ಅವರಿದ್ದ ಪೀಠ ಈ ಸೂಚನೆ ನೀಡಿದೆ.
ವಿಚಾರಣೆ ವೇಳೆ, ಕಾನೂನು ಸುವ್ಯವಸ್ಥೆ ಕಾಪಾಡಬೇಕಾಗಿರುವುದರಿಂದ ಹಲವು ಸಂಘಟನೆಗಳು ಒಂದೇ ದಿನ, ಒಂದೇ ಸ್ಥಳ ಮತ್ತು ಒಂದೇ ಮಾರ್ಗದಲ್ಲಿ ರ‍್ಯಾಲಿ ನಡೆಸಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸರ್ಕಾರದ ಪರ ವಕೀಲರು ಮನವಿ ಮಾಡಿದ್ದಾರೆ. ಆದ ಕಾರಣ ಸಂಘಟನೆಗಳಿಗೆ ಪ್ರತ್ಯೇಕ ದಿನಾಂಕಗಳಂದು ಅವಕಾಶ ಕಲ್ಪಿಸಬೇಕು ಎಂದು ಹೈಕೋರ್ಟ್ ತಿಳಿಸಿತು.
ಅದ್ದರಿಂದ ಇದೇ ದಿನ ಹೊಸದಾಗಿ ಮನವಿ ಸಲ್ಲಿಸಿ, ಯಾವ ಮಾರ್ಗದಲ್ಲಿ ರ‍್ಯಾಲಿ ನಡೆಸಲಾಗುವುದು ಎಂಬುದನ್ನು ತಿಳಿಸಿ, ಜಿಲ್ಲಾಡಳಿತ ಮತ್ತು ತಾಲೂಕು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ಗೆ ಮನವಿ ಸಲ್ಲಿಸಬೇಕು. ಅದರಂತೆ, ಜಿಲ್ಲಾ ಮತ್ತು ತಾಲೂಕು ಆಡಳಿತ ರ‍್ಯಾಲಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸಬೇಕು ಎಂದು ಸೂಚನೆ ನೀಡಿದ ಪೀಠ, ಅರ್ಜಿಯ ವಿಚಾರಣೆಯನ್ನು ಮುಂದೂಡಿತು.