ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್‌ನಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ 20 ಮಂದಿ ಸಜೀವ ದಹನವಾಗಿದ್ದು, ದುರ್ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಆಂಧ್ರಪ್ರದೇಶದ ಕರ್ನೂಲ್‌ನ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ ಬಸ್‌ಗೆ ಬೆಂಕಿ ತಗುಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡ ಸುದ್ದಿ ಕೇಳಿ ಅತೀವ ದುಃಖವಾಯಿತು. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ನನ್ನ ಸಂತಾಪಗಳು. ಗಾಯಾಳುಗಳು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆಂದು ಹೇಳಿದ್ದಾರೆ.
ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿ, ಹೈದರಾಬಾದ್-ಬೆಂಗಳೂರು ಮಾರ್ಗದ ಕರ್ನೂಲ್ ಬಳಿ ಭೀಕರ ಬಸ್ ಬೆಂಕಿ ದುರಂತ ಘಟನೆ ಬಗ್ಗೆ ತಿಳಿದು ತೀವ್ರ ಆಘಾತ ಮತ್ತು ದುಃಖವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಬಾಧಿತ ಎಲ್ಲರೊಂದಿಗೂ ನಾವು ನಿಲ್ಲುತ್ತೇವೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ.
ಈ ನಡುವೆ ಘಟನೆ ಸಂಬಂಧ ಡಿಐಜಿ ಮಾಹಿತಿ ನೀಡಿದ್ದು, ಬೈಕಿ ಡಿಕ್ಕಿ ಹೊಡೆದ ನಂತರ ಬೆಂಕಿ ಹೊತ್ತಿಕೊಂಡು ದುರಂತ ಸಂಭವಿಸಿದೆ ಎಂದು ಹೇಳಿದ್ದಾರೆ.
ಬಸ್ ಪ್ರಯಾಣಿಕರಲ್ಲಿ 39 ವಯಸ್ಕರು ಮತ್ತು ಇಬ್ಬರು ಮಕ್ಕಳಿದ್ದರು. ಈವರೆಗೂ 19 ಜನರನ್ನು ಗುರುತಿಸಿದ್ದೇವೆ, ಅವರು ಸುರಕ್ಷಿತರಾಗಿದ್ದಾರೆ ಮತ್ತು ಆಸ್ಪತ್ರೆಯಲ್ಲಿದ್ದಾರೆ. ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದಾಗ ಎಚ್ಚರಗೊಳ್ಳುವ ಮೊದಲೇ ಬಸ್ ಬೆಂಕಿಗೆ ಆಹುತಿಯಾಗಿದೆ. ಇಲ್ಲಿಯವರೆಗೆ ಬಸ್ಸಿನಿಂದ 11 ಶವಗಳನ್ನು ಹೊರತೆಗೆಯಲಾಗಿದೆ. ಬಸ್ಸಿನ ಮುಖ್ಯ ಚಾಲಕ ಕಾಣೆಯಾಗಿದ್ದಾನೆ. ಮತ್ತೊಬ್ಬ ಚಾಲಕನನ್ನು ಬಂಧಿಸಲಾಗಿದೆ. ಬಸ್ಸಿನ ಡೀಸೆಲ್ ಟ್ಯಾಂಕ್ ಹಾನಿಗೊಳಗಾಗಿಲ್ಲ ಎಂದು ಡಿಐಜಿ ಕೋಯ ಪ್ರವೀಣ್ ಅವರು ಮಾಹಿತಿ ನೀಡಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಪ್ರತಿಕ್ರಿಯಿಸಿ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನ ಟೇಕೂರು ಬಳಿ ಹೈದ್ರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಹಲವು ಪ್ರಯಾಣಿಕರು ಪ್ರಾಣ ಕಳೆದುಕೊಂಡಿರುವ ಸುದ್ದಿ ತಿಳಿದು ಆಘಾತವಾಯಿತು.
ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಭಗವಂತನು ಕುಟುಂಬವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿ ಕರುಣಿಸಲಿ. ಗಾಯಾಳು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ ಎಂದು ತಿಳಿಸಿದ್ದಾರೆ.