ಬೆಂಗಳೂರು: ಸುರಂಗ ರಸ್ತೆ ಯೋಜನೆ ಕಾಮಗಾರಿ ಪೂರ್ಣಗೊಂಡ ನಂತರ ಲಾಲ್‌ಬಾಗ್ ಭೂಮಿಯನ್ನು ಹಿಂತಿರುಗಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.
ಯಶವಂತಪುರ ವಿಧಾನಸಭೆ ಕ್ಷೇತ್ರದ ಹೇರೋಹಳ್ಳಿಯ ಭರತ್ ನಗರ ಗಾಂಧಿ ಉದ್ಯಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಸುರಂಗ ರಸ್ತೆ ಯೋಜನೆಗೆ ಯಾವುದೇ ಜಮೀನನ್ನು ಸ್ವಾಧೀನಪಡಿಸಿಕೊಳ್ಳುತ್ತಿಲ್ಲ. ಒಂದು ಸಣ್ಣ ಭಾಗದಲ್ಲಿ ರಸ್ತೆ ಹಾದುಹೋಗುತ್ತದೆ. ಇದನ್ನು ಪರಿಶೀಲನೆ ಮಾಡುತ್ತೇನೆ. ಲಾಲ್‌ಬಾಗ್‌ಗೆ ಯಾವುದೇ ರೀತಿ ತೊಂದರೆ ಆಗುವುದಿಲ್ಲ. ಸ್ವಲ್ಪ ಜಾಗವನ್ನು ಈ ಯೋಜನೆ ಕಾಮಗಾರಿ ನಡೆಯುವವರೆಗೂ ಬಳಸಿಕೊಳ್ಳುತ್ತೇವೆ. ನಂತರ ಅದನ್ನು ತೆರವುಗೊಳಿಸಿ, ಲಾಲ್‌ಬಾಗ್ ಉದ್ಯಾನಕ್ಕೆ ಹಿಂತಿರುಗಿಸುತ್ತೇವೆ ಎಂದು ಹೇಳಿದರು.
ಸುರಂಗ ರಸ್ತೆಯನ್ನು ಭೂಮಿಯ ಒಳಗೆ ಕೊರೆಯಲಾಗುವುದು. ಹೊರಗೆ ಮಾಡಲು ಆಗುವುದಿಲ್ಲ. ಮುಂಬೈ, ದೆಹಲಿಯಲ್ಲಿ ಏಕೆ ಭೂಮಿ ಕೊರೆದು ಸುರಂಗ ರಸ್ತೆ ಮಾಡುತ್ತಿದ್ದಾರೆ. ಯಾವುದೇ ಸಂದರ್ಭದಲ್ಲಿ ನಾನು ಆತನ ಮಾತಿಗೆ ಬಾಗುವುದಿಲ್ಲ. ಹೋರಾಟ ಮಾಡುವವರು ಮಾಡುತ್ತಾರೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನಾವು ಜನರಿಗಾಗಿ ಕೆಲಸ ಮಾಡುತ್ತಿದ್ದೇವೆಂದು ತಿಳಿಸಿದರು.