ಕೋಮು ದ್ವೇಷದ ಬಗ್ಗೆ ಪ್ರಚೋದನಾಕಾರಿ ಭಾಷಣ ಆರೋಪ ಹಿನ್ನೆಲೆ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದೂರಿನ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ವಿರುದ್ಧ ಧಾರ್ಮಿಕ ದ್ವೇಷ, ಮಹಿಳೆಯರ ಘನತೆಗೆ ಧಕ್ಕೆ ತರುವ ಭಾಷಣ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಭಾಕರ್ ಭಟ್, ಹಿಂದೂ ಮತ್ತು ಮುಸ್ಲಿಂ ಸಮುದಾಯಗಳ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ ಮತ್ತು ಮತದಾರರ ಸಂಖ್ಯೆಯನ್ನು ಉಲ್ಲೇಖಿಸಿದ್ದಾರೆ. ಇದರಿಂದಾಗಿ ಧಾರ್ಮಿಕ ವೈಷಮ್ಯವನ್ನು ಬೆಳೆಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಒಳ ಉಡುಪಿನಲ್ಲಿಟ್ಟುಕೊಂಡು ಮೊಬೈಲ್ ಕಳ್ಳಸಾಗಣೆ ಮಾಡುತತಿದ್ದ ಜೈಲಿನ ವೀಕ್ಷಕನ್ನು ಪೊಲೀಸರು ಬಂಧಿಸಿದ್ದಾರೆ.
ಅಮರ್ ಪ್ರಾಂಜೆ ಬಂಧಿತ ಜೈಲು ಸಿಬ್ಬಂದಿಯಾಗಿದ್ದು, ಅಕ್ಟೋಬರ್ 23ರಂದು ಕರ್ತವ್ಯಕ್ಕೆ ಆಗಮಿಸಿದ್ದ ಈತನನ್ನು ಪ್ರವೇಶದ್ವಾರದಲ್ಲಿದ್ದ ಕೆಎಸ್‌ಐಎಸ್‌ಎಫ್ ಸಿಬ್ಬಂದಿ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಆತ ವಾಪಸ್ ಹೋಗಲು ಮುಂದಾಗಿದ್ದಾನೆ. ಇದರಿಂದ ಅನುಮಾನಗೊಂಡ ಸಿಬ್ಬಂದಿ ಅವನನ್ನು ಹಿಡಿದು ತಪಾಸಣೆ ನಡೆಸಿದಾಗ ಒಳುಡುಪಿನಲ್ಲಿ ಒಂದು ಸ್ಮಾರ್ಟ್‌ಫೋನ್, ಇಯರ್ ಫೋನ್ ಪತ್ತೆಯಾಗಿದೆ. ತಕ್ಷಣ ಜೈಲಿನ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದು ಅಮರ್ ಪ್ರಾಂಜೆಯನ್ನ ಬಂಧಿಸಿದ್ದಾರೆ. ಈ ಸಂಬಂಧ ಜೈಲು ಅಧೀಕ್ಷಕ ಹೆಚ್.ಎ ಪರಮೇಶ್ ನೀಡಿದ ದೂರಿನ ಮೇರೆಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಿಎಂ ಸಿದ್ದರಾಮಯ್ಯ ನ.15 ರಂದು ದೆಹಲಿಗೆ ತೆರಳುತ್ತಿದ್ದು, ತಮ್ಮ ಸರ್ಕಾರ ಎರಡೂವರೆ ವರ್ಷಗಳನ್ನು ಪೂರ್ಣಗೊಳಿಸಿದ ನಂತರ ನವೆಂಬರ್‌ನಲ್ಲಿ ಸಚಿವ ಸಂಪುಟ ಪುನರ್ರಚನೆ ಕುರಿತು ಸುಳಿವು ನೀಡಿದ್ದಾರೆ. ನವೆಂಬರ್ ಕ್ರಾಂತಿ ವದಂತಿ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದೆಹಲಿ ಭೇಟಿ ಕುತೂಹಲ ಮೂಡಿಸಿದೆ. ಈ ಮಧ್ಯೆ ಸಿಎಂ ಭೇಟಿಗೂ ಮುನ್ನ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ತೆರಳುತ್ತಿದ್ದು, ತಮ್ಮ ಭೇಟಿ ನಿಯಮಿತ ಕಾರ್ಯಕ್ರಮವಾಗಿದ್ದು, 'ನಾನು ನಿಯಮಿತವಾಗಿ ನವದೆಹಲಿಗೆ ಹೋಗುತ್ತೇನೆ. ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು, ವಿಶ್ರಾಂತಿ ಪಡೆಯಲು, ಶಾಪಿಂಗ್ ಮಾಡಲು ಮತ್ತು ನ್ಯಾಯಾಲಯದ ಪ್ರಕರಣಗಳಿಗೂ ಹೋಗುತ್ತೇನೆ ಎಂದು ಶಿವಕುಮಾರ್ ಹೇಳಿದ್ದಾರೆ.
ಹುಲಿ ದಾಳಿಗೆ ರೈತನೋರ್ವ ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಹೆಡಿಯಾಲ ಹೋಬಳಿಯ ಮುಳ್ಳೂರುಹುಂಡಿ ಗ್ರಾಮದ ಜಮೀನಿನಲ್ಲಿ ನಡೆದಿದೆ. ರಾಜಶೇಖರ್ ಹುಲಿ ದಾಳಿಗೆ ಬಲಿಯಾದ ರೈತನಾಗಿದ್ದು, ರಾಜಶೇಖರ್ ಹಾಗೂ ಸಿದ್ದರಾಮೇಗೌಡ ಇಬ್ಬರೂ ಜಮೀನಿನಲ್ಲಿ ಟೊಮೆಟೊ ಬಿಡಿಸಲು ಹೋಗಿದ್ದರು. ಟೊಮೆಟೊ ಬಿಡಿಸಿ ನಂತರ ಊಟಕ್ಕೆ ಮನೆಗೆ ಹೋಗುವಾಗ, ಪೊದೆಯಲ್ಲಿ ಅವತ್ತಿದ್ದ ಹುಲಿ ಇಬ್ಬರ ಮೇಲೆ ಎರುಗಿದೆ. ಈ ವೇಳೆಯಲ್ಲಿ ಸಿದ್ದರಾಮೇಗೌಡ ಜೋರಾಗಿ ಕಿರುಚಿಕೊಂಡು ದೂರಕ್ಕೆ ಓಡಿಹೋದರೆ, ರಾಜಶೇಖರ್ ಹುಲಿಗೆ ದಾಳಿಗೆ ಸಿಲುಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ವಿಷಯ ತಿಳಿದು ಶಾಸಕ ಅನಿಲ್ ಚಿಕ್ಕಮಾದು ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಸರ್ಕಾರದಿಂದ ಪರಿಹಾರವನ್ನು ಕೊಡಿಸುವುದಾಗಿ ಭರವಸೆ ನೀಡಿದ್ದಾರೆ.
ಬೆಂಗಳೂರು ಸುರಂಗ ರಸ್ತೆ ಮಾರ್ಗ ಯೋಜನೆಗಾಗಿ ಲಾಲ್‌ಬಾಗ್ ಸಸ್ಯೋದ್ಯಾನದಲ್ಲಿ ಮರಗಳನ್ನು ಕಡಿಯುವ ಪ್ರಸ್ತಾವನೆ ಬಂದಿದೆಯೇ ಎಂದು ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕೇಳಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿಎಂ ಪೂಣಚ್ಚ ಅವರಿದ್ದ ವಿಭಾಗೀಯ ಪೀಠ ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಆಲಿಸಿದ ನಂತರ ಸರ್ಕಾರದ ಪ್ರತಿಕ್ರಿಯೆಯನ್ನು ಕೋರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಸುರಂಗ ಯೋಜನೆಗಾಗಿ ಲಾಲ್‌ಬಾಗ್‌ನಲ್ಲಿ 6.5 ಎಕರೆ ಜಾಗವನ್ನು ಗುರುತಿಸಲಾಗಿದೆ ಎಂದು ಬೆಳವಾಡಿ ಪರ ವಕೀಲರೂ ಆಗಿರುವ ಸಂಸದ ತೇಜಸ್ವಿ ಸೂರ್ಯ ಆರೋಪಿಸಿದರು. ಜನರ ಪ್ರವೇಶ ಮತ್ತು ನಿರ್ಗಮನದ ಮೇಲೆ ನಿರ್ಬಂಧ ಹೇರಲಾಗಿದೆ. ಈ ಯೋಜನೆಯು ರಾಷ್ಟ್ರೀಯ ಭೂವೈಜ್ಞಾನಿಕ ಸ್ಮಾರಕವೆಂದು ಘೋಷಿಸಲಾದ ಲಾಲ್‌ಬಾಗ್ ಬಂಡೆಗೆ ಅಪಾಯವನ್ನುಂಟುಮಾಡಬಹುದು ಎಂದು ಅವರು ಹೇಳಿದ್ದಾರೆ. ಯೋಜನೆಗೆ ನೀಡಿರುವ ಮಂಜೂರಾತಿಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿರುವ ಅರ್ಜಿದಾರರು ಟೆಂಡರ್ ಕರೆಯುವ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.