ಮಂಡ್ಯ: ಗಣೇಶನ ಮೂರ್ತಿ ವಿಸರ್ಜನೆಯ ವೇಳೆ ಭಾನುವಾರ ರಾತ್ರಿ ನಡೆದ ಕೋಮು ಘರ್ಷಣೆ ಬಳಿಕ ಮದ್ದೂರು ಬಂದ್'ಗೆ ಬಿಜೆಪಿ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಬಿಜೆಪಿ ಮಂಡ್ಯ ಜಿಲ್ಲಾಧ್ಯಕ್ಷ ಇಂದ್ರೇಶ್ ಎನ್ಎಸ್ ಬಂದ್'ಗೆ ಕರೆ ನೀಡಿದ್ದು, ಬಂದ್ ಕರೆಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳೆರಡೂ ಬೆಂಬಲ ನೀಡಿವೆ.
ಮುನ್ನೆಚ್ಚರಿಕೆ ಕ್ರಮವಾಗಿ ನಾಲ್ವರು ಪೊಲೀಸ್ ವರಿಷ್ಠಾಧಿಕಾರಿಗಳು, ಹೆಚ್ಚುವರಿ ಎಸ್‌ಪಿಗಳು ಮತ್ತು ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳು ಸೇರಿದಂತೆ ಸುಮಾರು 800 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಹೇಳಿದ್ದಾರೆ.
ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಶಾಂತಿಯುತವಾಗಿದೆ. ನಾಳೆ ಬೆಳಿಗ್ಗೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿದೆ. ಭದ್ರತೆಗಾಗಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಲ್ಲು ತೂರಾಟ ಬಳಿಕ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2 ಎಫ್ಐಆರ್ ಗಳನ್ನು ದಾಖಲಾಸಲಾಗಿದ್ದು, ಇಲ್ಲಿಯವರೆಗೆ 22 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಯಾವುದೇ ಅಹಿತಕರ ಘಟನೆಯನ್ನು ಪ್ರಚೋದಿಸಲು ಪರಿಸ್ಥಿತಿಯನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತಿರುವ ದುಷ್ಕರ್ಮಿಗಳ ಬಗ್ಗೆ ಕಟ್ಟುನಿಟ್ಟಿನ ನಿಗಾ ಇಡಲಾಗಿದೆ. ಎಲ್ಲಾ ಪ್ರದೇಶಗಳಲ್ಲಿ, ವಿಶೇಷವಾಗಿ ಸೂಕ್ಷ್ಮ ಸ್ಥಳಗಳಲ್ಲಿ ಭದ್ರತೆಯನ್ನು ನಿಯೋಜಿಸಲಾಗಿದೆ. ಘಟನೆ ಸಂಬಂಧ 26 ಮಂದಿಯ ಪಟ್ಟಿ ಸಿದ್ಧಪಡಿಸಲಾಗಿದ್ದು, ಈವರೆಗೂ 22 ಮಂದಿಯನ್ನು ಬಂಧಿಸಲಾಗಿದೆ. ನಾಲ್ವರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಎಲ್ಲರೂ ನ್ಯಾಯಾಂಗ ಬಂಧನದಲ್ಲಿದ್ದಾರೆಂದು ಹೇಳಿದ್ದಾರೆ.
ಘಟನೆ ಪೂರ್ವ ನಿಯೋಜಿತವೇ ಎಂಬುದರ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಜನರ ಚಲನವಲನಗಳನ್ನು ಪರಿಶೀಲಿಸಲು ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳು ಹಾಗೂ ವಿಡಿಯೋಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಬಂಧಿತ ಆರೋಪಿಗಳಿಗೆ ಯಾವುದಾದರೂ ಸಂಘಟನೆಗಳೊಂದಿಗೆ ಸಂಬಂಧ ಹೊಂದಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಗಳು ಲಭ್ಯವಾಗಿಲ್ಲ ಎಂದಿದ್ದಾರೆ.