ಬೆಂಗಳೂರು: ಹಾಸ್ಟೆಲ್ ಗೆ ಹೊಸದಾಗಿ ಸೇರಿಕೊಂಡಿದ್ದ 10ನೇ ತರಗತಿಯ ವಿದ್ಯಾರ್ಥಿಗೆ ಹಿರಿಯ ವಿದ್ಯಾರ್ಥಿಗಳು ರ‍್ಯಾಗಿಂಗ್ ಮಾಡಿರುವ ಆರೋಪ ಕೇಳಿಬಂದಿದೆ. ಅಲ್ಲದೆ ಹಾಸ್ಟಲ್ ನಲ್ಲಿ ಬಟ್ಟೆ ಬಿಚ್ಚಿ ಡ್ಯಾನ್ಸ್ ಮಾಡುವಂತೆ ಒತ್ತಾಯಿಸಿದ್ದಾರೆ ಎಂದು ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ವಿದ್ಯಾರ್ಥಿಯ ತಂದೆ ದೂರು ನೀಡಿದ್ದಾರೆ.
ಬನ್ನೇರುಘಟ್ಟ ಠಾಣಾ ವ್ಯಾಪ್ತಿಯ ಖಾಸಗಿ ಶಾಲೆಯೊಂದರಲ್ಲಿ ಘಟನೆ ನಡೆದಿದೆ. ಈ ಕುರಿತು ಸಂತ್ರಸ್ತ ವಿದ್ಯಾರ್ಥಿ ಪ್ರಾಂಶುಪಾಲರಿಗೆ ದೂರು ನೀಡಿದ್ದನು. ಇನ್ನು ಈ ಬಗ್ಗೆ ಪ್ರಾಂಶುಪಾಲರು ಹಾಗೂ ವಾರ್ಡನ್ ಯಾವುದೇ ಕ್ರಮಕೈಗೊಂಡಿರಲಿಲ್ಲ. ಇನ್ನು ದೂರು ನೀಡಿದ್ದಕ್ಕೆ ಕೋಪಗೊಂಡಿದ್ದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಲೈಂಗಿಕ ದೌರ್ಜನ್ಯ ನಡೆಸಿದ್ದು ಅಲ್ಲದೆ ಕಬ್ಬಿಣದ ಹ್ಯಾಂಗರ್ ನಿಂದ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸೆಪ್ಟೆಂಬರ್ 3 ರಿಂದ 6ರವರೆಗೆ ಕೋಣೆಯಲ್ಲಿ ನನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಅಲ್ಲದೆ ಬಟ್ಟೆ ಬಿಚ್ಚಿಸಿ ಡ್ಯಾನ್ಸ್ ಮಾಡಿದ್ದಾರೆ. ಈ ಬಗ್ಗೆ ದೂರು ನೀಡಿದ್ದರು ಪ್ರಾಂಶುಪಾಲರು ಹಾಗೂ ವಾರ್ಡನ್ ಯಾವುದೇ ಕ್ರಮಗೊಂಡಿಲ್ಲ. ಹೀಗಾಗಿ ಸಂತ್ರಸ್ತ ವಿದ್ಯಾರ್ಥಿಯ ತಂದೆ ಬನ್ನೇರುಘಟ್ಟ ಪೊಲೀಸ್ ಠಾಣೆಗೆ ತೆರಳಿ ಐವರು ವಿದ್ಯಾರ್ಥಿಗಳು, ಪ್ರಾಂಶುಪಾಲ ಮತ್ತು ವಾರ್ಡನ್ ವಿರುದ್ಧ ದೂರು ನೀಡಿದ್ದಾರೆ.