ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣವೊಂದಕ್ಕೆ ಸೇಂಟ್ ಮೇರಿ ಹೆಸರಿಡುವ ಪ್ರಸ್ತಾವನೆಯನ್ನು ಪರಿಗಣಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದು, ಮುಖ್ಯಮಂತ್ರಿಗಳ ಈ ಪ್ರತಿಕ್ರಿಯೆ ಚರ್ಚೆಗೆ ಗ್ರಾಸವಾಗಿದೆ.
ಬೆಂಗಳೂರಿನಲ್ಲಿ ನಡೆದ ಸೆಂಟ್ ಮೇರೀಸ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಬೆಂಗಳೂರು ನಗರದಲ್ಲಿನ ಒಂದು ಮೆಟ್ರೋ ನಿಲ್ದಾಣಕ್ಕೆ 'ಸೆಂಟ್ ಮೇರಿ' ಎಂಬ ಹೆಸರಿಡಬೇಕು ಎಂಬ ಪ್ರಸ್ತಾವನೆಯನ್ನು ಸ್ವೀಕರಿಸಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು. ಇದಕ್ಕೆ ಅನುಮೋದನೆ ದೊರೆತ ನಂತರ ನಾಮಕರಣ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಬೆಂಗಳೂರಿನಲ್ಲಿ ಮೆಟ್ರೋ ಕನಸು ಕಂಡ ವ್ಯಕ್ತಿಯ ಹೆಸರನ್ನೂ ಇನ್ನೂ ನಾಮಕರಣ ಮಾಡಿಲ್ಲ. ಇಂದು ಶಂಕರ್ ನಾಗ್'ಗೆ ಮಾಡಿದ ಅನ್ಯಾಯ ಎಂದು ಶೋಧನ್ ಕುಂದಾಪುರ ಎಂಬುವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸಿನಿಮಾ ಅಷ್ಟೇ ಅಲ್ಲದೆ ಬೆಂಗಳೂರು ಮತ್ತು ಕರ್ನಾಟಕದ ಜನರ ಹಿತಾಸಕ್ತಿಗಳನ್ನು ಹೃದಯದಲ್ಲಿಟ್ಟುಕೊಂಡು ಶಂಕರ್ ನಾಗ್ ಅವರು, ಬೆಂಗಳೂರನ್ನು ಸಿಂಗಾಪುರ ಮಾಡಲು ಹೊರಟಿದ್ದರು. ಇದಕ್ಕಾಗಿ ತಂತ್ರಜ್ಞಾನವನ್ನು ಅಧ್ಯಯನ ಮಾಡಲು ಖರ್ಚು ಮಾಡಿದ್ದರು ಎಂದು ಸ್ನೇಹ ಎಂಬುವವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
ಬೆಂಗಳೂರಿನ ಮೆಟ್ರೋ ನಿಲ್ದಾಣಕ್ಕೆ 'ಸೇಂಟ್ ಮೇರಿ' ಎಂದು ಹೆಸರಿಸುವ ಪ್ರಸ್ತಾಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಮೋದಿಸಿದ್ದಾರೆ. ಮೆಟ್ರೋಗೆ ಶಂಕರ್ ನಾಗ್ ಹೆಸರಿಡಬೇಕೆಂದು ಕನ್ನಡಿಗರು ಹಲವು ದಿನಗಳಿಂದ ಒತ್ತಾಯಿಸುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ಅದಕ್ಕೆ ಸೇಂಟ್ ಮೇರಿ ಹೆಸರಿಡಲು ಆಯ್ಕೆ ಮಾಡಿಕೊಂಡಿದ್ದಾರೆಂದು ಮಧುಕುಮಾರ್ ಎಂಬುವವರು ಹೇಳಿದ್ದಾರೆ.