ಬೆಂಗಳೂರು: ನೇಪಾಳದಲ್ಲಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಘಟನೆ ಬೆನ್ನಲ್ಲೇ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ನೇಪಾಳ ಪರಿಸ್ಥಿತಿ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ನೇಪಾಳದಲ್ಲಿ ವಿದ್ಯಾರ್ಥಿ-ಯುವಜನರ ಕ್ಷಿಪ್ರ ಬೃಹತ್ ಪ್ರತಿಭಟನೆ ಕಾರಣಕ್ಕೆ ದೇಶಾದ್ಯಂತ ಪ್ರಕ್ಷುಬ್ದ ವಾತಾವರಣ ಸೃಷ್ಟಿಯಾಗಿದೆ. ಪರಿಣಾಮವಾಗಿ ಕಠ್ಮಂಡು ವಿಮಾನ ನಿಲ್ದಾಣದಲ್ಲಿ ಸಿಲುಕಿರುವ 39 ಮಂದಿ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಈ ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ಅಗತ್ಯ ಕ್ರಮ ಕೈಗೊಂಡಿದ್ದು, ನೇಪಾಳದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ನೇಪಾಳದ ಕೆಪಿ ಓಲಿ ಸರ್ಕಾರವು ಫೇಸ್‌ಬುಕ್, ಯೂಟ್ಯೂಬ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್‌ನಂತಹ 26 ಪ್ರಮುಖ ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ನಿಷೇಧಿಸಿ ಆದೇಶ ಹೊರಡಿಸಿತ್ತು. ಸರ್ಕಾರದಲ್ಲಿ ನೋಂದಾಯಿಸಲು ವಿಫಲವಾದ ಕಾರಣ ನೇಪಾಳ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಈ ಆದೇಶದ ಬೆನ್ನಲ್ಲೇ ಸರ್ಕಾರದ ವಿರುದ್ಧ ಝೆನ್ ಜಿ ತಿರುಗಿ ಬಿದ್ದಿತ್ತು.
ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬ್ಯಾನ್ ಮಾಡಿದ್ದಕ್ಕೆ ಯುವ ಜನತೆ ಪ್ರತಿಭಟನೆಗೆ ಮುಂದಾದರು.
ಪೊಲೀಸ್, ಸೇನೆ ಯಾವುದಕ್ಕೂ ಹೆದರದೇ ಬೀದಿಗಿಳಿದು ಯುವ ಜನತೆ ಪ್ರತಿಭಟಿಸಿದರು. ಯುವಕರ ಹಿಂಸಾತ್ಮಕ ಪ್ರತಿಭಟನೆಗಳು ಕನಿಷ್ಠ 19 ಜನರ ಸಾವಿಗೆ ಕಾರಣವಾಯಿತು. ಜೊತೆಗೆ 300ಕ್ಕೂ ಹೆಚ್ಚು ಜನರು ಘಟನೆಯಲ್ಲಿ ಗಾಯಗೊಂಡಿದ್ದಾರೆ.
ಪರಿಸ್ಥಿತಿ ಕೈಮೀರಿ ಹೋಗಬಹುದು ಎಂದು ತಿಳಿದು ಸರ್ಕಾರ, ಸಾಮಾಜಿಕ ಮಾಧ್ಯಮ ತಾಣಗಳನ್ನು ನಿಷೇಧಿಸುವ ತನ್ನ ಹಿಂದಿನ ನಿರ್ಧಾರವನ್ನು ಪ್ರಸ್ತುತ ಹಿಂತೆಗೆದುಕೊಂಡಿದೆ.