ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 518 ರಿಂದ 524 ಮೀಟರ್‌ಗೆ ಹೆಚ್ಚಿಸುವ ರಾಜ್ಯ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ನ್ಯಾಯಯುತ ಪರಿಹಾರವನ್ನು ನೀಡಲು ಬದ್ಧವಾಗಿದೆ ಎಂದು ಬುಧವಾರ ಹೇಳಿದ್ದಾರೆ.
ವಿಧಾನಸೌಧದ ಸಭಾಂಗಣದಲ್ಲಿ ನಡೆದ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3 ರ ಅನುಷ್ಠಾನ ಕುರಿತಾದ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಭೂಮಿ ಕಳೆದುಕೊಳ್ಳುವವರಿಗೆ ಸೂಕ್ತ ಪ್ಯಾಕೇಜ್ ನೀಡಲಾಗುವುದು. ಈ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಕೃಷ್ಣಾ ಜಲ ವಿವಾದ ನ್ಯಾಯಾಧಿಕರಣ-2 ರ ತೀರ್ಪಿನ ಅನ್ವಯ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಅನುಷ್ಠಾನಕ್ಕಾಗಿ 130 ಟಿಎಂಸಿ ನೀರಿನ ಹಂಚಿಕೆ ಮಾಡಿದ್ದು, ಇದರಿಂದ 5.94 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಸಾಧ್ಯವಾಗಲಿದೆ. ಕೃಷ್ಣಾ ಮೇಲ್ದಂಡೆ ಯೋಜನೆ ಹಂತ -3ರಲ್ಲಿ ನೀರಿನ ಬಳಕೆಗಾಗಿ ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣಾ ಮಟ್ಟ 519 ಮೀಟರ್ ನಿಂದ 524 ಮೀಟರ್ ಗೆ ಎತ್ತರಿಸುವುದರಿಂದ ಹೆಚ್ಚುವರಿಯಾಗಿ 100 ಟಿಎಂಸಿ ನೀರನ್ನು ಸಂಗ್ರಹಿಸಬಹುದು ಎಂದು ತಿಳಿಸಿದರು.
ಯೋಜನೆ ಅನುಷ್ಠಾನಕ್ಕೆ ಒಟ್ಟು 1,33,867 ಎಕರೆ ಜಮೀನು ಭೂಸ್ವಾಧೀನ ಅಗತ್ಯವಿದ್ದು, ಇದರಲ್ಲಿ 75,563 ಎಕರೆ ಹಿನ್ನೀರಿನಲ್ಲಿ ಮುಳುಗಡೆಯಾಗುವ ಜಮೀನು ಸೇರಿದೆ. ಇದುವರೆಗೆ 29,566 ಎಕರೆ ಭೂಸ್ವಾಧೀನ ಐತೀರ್ಪು ಹೊರಡಿಸಲಾಗಿದೆ. 59,354 ಎಕರೆ ಜಮೀನು ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಬೇಕಿದೆ.ಮುಳುಗಡೆ ಹೊಂದಲಿರುವ ಜಮೀನನ್ನು 2 ಹಂತದಲ್ಲಿ ಭೂಸ್ವಾಧೀನಕ್ಕೆ ಒಳಪಡಿಸುವ ಬದಲು ಒಂದೇ ಹಂತದಲ್ಲಿ ಭೂಸ್ವಾಧೀನಪಡಿಸಲು ತೀರ್ಮಾನಿಸಲಾಗಿದೆ.
ಜಮೀನು ಕಳೆದುಕೊಳ್ಳುವ ರೈತರಿಗೆ ನ್ಯಾಯಯುತವಾದ ಪರಿಹಾರ ಒದಗಿಸಲು ಸರ್ಕಾರ ಬದ್ಧವಾಗಿದೆ. ಸಂತ್ರಸ್ತರಿಗೆ ಸೂಕ್ತ ಪುನರ್ವಸತಿಯನ್ನು ಸಹ ಕಲ್ಪಿಸಲಾಗುವುದು. ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು.ಯೋಜನೆ ಅನುಷ್ಠಾನಕ್ಕೆ ಆರಂಭದಲ್ಲಿ ರೂ. 51,148 ಕೋಟಿ ಯೋಜನಾ ಮೊತ್ತ ಅಂದಾಜಿಸಲಾಗಿತ್ತು. ಈಗ ಪರಿಷ್ಕೃತ ರೂ. 87,818 ಕೋಟಿ ಅಂದಾಜಿಸಲಾಗಿದೆ. ಇದರಲ್ಲಿ ಭೂಸ್ವಾಧೀನ ಪ್ರಕ್ರಿಯೆಗೆ ರೂ. 17,627 ಕೋಟಿ ಆರಂಭದಲ್ಲಿ ಅಂದಾಜಿಸಲಾಗಿತ್ತು. ಪ್ರಸ್ತುತ ಪರಿಷ್ಕೃತ ಮೊತ್ತ ರೂ. 40,557.09 ಕೋಟಿ ರೂಪಾಯಿ ಅಂದಾಜಿಸಲಾಗಿದೆ.
ಯೋಜನೆಗೆ ಸಂಬಂಧಿಸಿದಂತೆ 9 ಉಪ ಯೋಜನಾ ಸಿವಿಲ್ ಕಾಮಗಾರಿಗಳಿಗೆ ಪರಿಷ್ಕೃತ ಅಂದಾಜು ಮೊತ್ತ 25,122.53 ಕೋಟಿ ರೂಪಾಯಿ ಅಂದಾಜಿಸಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸುವುದು ನಮ್ಮ ಸರ್ಕಾರದ ವಾಗ್ದಾನವಾಗಿದೆ. ಇದಕ್ಕಾಗಿ ಆದಷ್ಟು ಬೇಗ ಭೂಸ್ವಾಧೀನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ, ನಮ್ಮ ಪಾಲಿನ ನೀರಿನ ಸದ್ಬಳಕೆ ಮಾಡಿಕೊಳ್ಳಲು ನಾವು ಬದ್ಧರಿದ್ದೇವೆ ಎಂದು ಹೇಳಿದರು.
ಸಭೆಯಲ್ಲಿ ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್.ಕೆ. ಪಾಟೀಲ್ ಮತ್ತು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಉಪಸ್ಥಿತರಿದ್ದರು.