ಬೆಂಗಳೂರು: ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ನೂತನ ನಿರ್ದೇಶಕರಾಗಿ ಡಾ.ದಿನೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಮೈಸೂರಿನ ಜಯದೇವ ಹೃದ್ರೋಗ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ದಿನೇಶ್ ಅವರನ್ನು, ಬೆಂಗಳೂರಿನ ಜಯದೇವ ಹೃದ್ರೋಗ ಸಂಸ್ಥೆಯ ನೂತನ ನಿರ್ದೇಶಕರನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಸಂಸ್ಥೆಯ ಪ್ರಭಾರ ನಿರ್ದೇಶಕ ಡಾ.ಕೆ.ಎಸ್. ರವೀಂದ್ರನಾಥ್ ಅವರ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನೂತನ ನಿರ್ದೇಶಕರನ್ನು ಸರ್ಕಾರ ನೇಮಿಸಿದೆ. ಡಾ.ಬಿ.ದಿನೇಶ್ ಅವರು ಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಇಂಟರ್‌ವೆನ್ಷನಲ್ ಕಾರ್ಡಿಯಾಲಜಿಸ್ಟ್ ಮತ್ತು ಕಾರ್ಡಿಯಾಲಜಿ ವಿಭಾಗದ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
ಮೈಸೂರಿನ ತಿ.ನರಸೀಪುರ ತಾಲೂಕಿನ ದೊಡ್ಡೆಬಾಗಿಲು ಗ್ರಾಮದ ಕೃಷಿಕ ಕುಟುಂಬದಲ್ಲಿ ಜನಿಸಿದ್ದ ಡಾ.ದಿನೇಶ್ ಮೈಸೂರಲ್ಲಿ ಎಂಬಿಬಿಎಸ್ ಮುಗಿಸಿ ಆರೋಗ್ಯ ಇಲಾಖೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿದ್ದರು.
ಕೆ.ಆರ್. ಆಸ್ಪತ್ರೆಯಲ್ಲಿ ಎಂಡಿ ವ್ಯಾಸಂಗ ಮಾಡಿದ ಬಳಿಕ ಮೈಸೂರು ಮೆಡಿಕಲ್ ಕಾಲೇಜಿನ ವೈದ್ಯಕೀಯ ವಿಭಾಗದ ಉಪನ್ಯಾಸಕರಾಗಿ, ಸಹಾಯಕ ಪ್ರಾಧ್ಯಾಪಕರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕಳೆದ ವಾರವಷ್ಟೆ ನೂತನ ನಿರ್ದೇಶಕರ ಆಯ್ಕೆ ಸಂಬಂಧ ಸಂದರ್ಶನ ನಡೆಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಖುದ್ದು ಈ ಸಂದರ್ಶನ ನಡೆಸಿದ್ದರು. ಆದರೆ ನಿವೃತ್ತ ಪ್ರಾಧ್ಯಾಪಕರೊಬ್ಬರು ಕೋರ್ಟ್ ಮೊರೆ ಹೋಗಿದ್ದ ಕಾರಣ ಫಲಿತಾಂಶ ಪ್ರಕಟಿಸಿರಲಿಲ್ಲ. ಇದೀಗ ಕೋರ್ಟ್ ಕೇಳಿದ್ದ ಮಾಹಿತಿಗಳನ್ನು ಒದಗಿಸಿದ ಹಿನ್ನೆಲೆಯಲ್ಲಿ ನ್ಯಾಯಾಲಯ ಆಯ್ಕೆಗೊಂಡ ಅಭ್ಯರ್ಥಿ ಹೆಸರು ಪ್ರಕಟಿಸಲು ಅನುಮತಿ ನೀಡಿದೆ.