ಮಂಡ್ಯ: ಮದ್ದೂರು ಪಟ್ಟಣಕ್ಕೆ ಭೇಟಿ ನೀಡಿದ್ದ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿಯಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಗುರುವಾರ (ಸೆ.11) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮದ್ದೂರಿಗೆ ಭೇಟಿ ನೀಡಿದ್ದರು. ಈ ವೇಳೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ್ದರು.
ಗಣಪತಿ ವಿಗ್ರಹಗಳು ದೇಶದ ಯಾವುದೇ ಮಸೀದಿಗಳ ಮುಂದೆ ಹಾದುಹೋಗುವ ಹಕ್ಕಿದೆ, ಇದನ್ನು ವಿರೋಧಿಸುವವರು ಪಾಕಿಸ್ತಾನಕ್ಕೆ ಹೋಗಬೇಕು ಎಂದು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ನಾನು ಅಧಿಕಾರಕ್ಕೆ ಬಂದರೆ "ಅಕ್ರಮ ಮಸೀದಿಗಳನ್ನು" ಕೆಡವಲಾಗುವುದು ಎಂದು ಎಚ್ಚರಿಸಿದ್ದಾರೆ. ನಿರ್ದಿಷ್ಟ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.
ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಮತ್ತು ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಿಎನ್‌ಎಸ್ ಸೆಕ್ಷನ್ 196(1)(ಚಿ), 299, 353(2) ಅನ್ಯಕೋಮಿಗೆ ಧಕ್ಕೆ ಹಾಗೂ ಕೋಮುಗಳ ನಡುವೆ ವೈರತ್ವ ಉಂಟುಮಾಡುವ ಭಾಷಣ ಮಾಡಿರುವ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧವೂ ಪ್ರಕರಣ ದಾಖಲಾಗಿದೆ.