ಬೆಂಗಳೂರು: ನಗರದ ಕುಮಾರಕೃಪಾ ರಸ್ತೆಯಲ್ಲಿರುವ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡದಲ್ಲಿ ಮಾತನಾಡುವ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿ ದಂಡವನ್ನು ವಿಧಿಸುತ್ತಿದೆ ಎಂಬ ವಿಚಾರ ಬೆಳಕಿಗೆ ಬಂದಿದ್ದು, ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
ಸಿಎಂ ಅಧಿಕೃತ ನಿವಾಸ ಕೃಷ್ಣಾ ಬಳಿಯ ಕುಮಾರಕೃಪಾ ರಸ್ತೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಸಿಂಧಿ ಪ್ರೌಢಶಾಲೆಯಲ್ಲಿ ಕನ್ನಡ ಮಾತನಾಡಿದ ಕಾರಣಕ್ಕೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಬೆಂಗಳೂರು ಉತ್ತರ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರ ಅಧಿಕೃತ ವರದಿಗಳನ್ನು ಉಲ್ಲೇಖಿಸಿ ಕೆಡಿಎ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಅವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ಶಾಲೆಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.
ವಿದ್ಯಾರ್ಥಿಗಳು ಕನ್ನಡ ಭಾಷೆಯಲ್ಲಿ ಮಾತನಾಡಿದ್ದಕ್ಕೆ ದಂಡ ವಿಧಿಸಿರುವುದಾಗಿ ಶಾಲೆಯ ಪ್ರಾಂಶುಪಾಲರೆೇ ಒಪ್ಪಿಕೊಂಡಿರುವ ಬಗ್ಗೆ ದಾಖಲೆಗಳಿವೆ ಎಂದು ತಿಳಿಸಿದ್ದಾರೆ.
ರಾಜಧಾನಿಯ ಪ್ರತಿಷ್ಠಿತ ಶಾಲೆಯೊಂದು ಮಕ್ಕಳ ಅಭಿವ್ಯಕ್ತಿ ಸ್ವಾತಂತ್ರ್ಯ ಕಸಿಯುತ್ತಿರುವುದು ಸರಿಯಲ್ಲ. ಶಾಲೆಯೊಂದು ಕನ್ನಡದ ಕುರಿತು ಲಘು ಧೋರಣೆ ತಳೆದಿರುವುದು ನಕಾರಾತ್ಮಕ ಬೆಳವಣಿಗೆಯಾಗಿದೆ. ಇಂತಹ ಶಾಲೆಗಳ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗುತ್ತದೆ. ತನ್ನದೇ ನೆಲದಲ್ಲಿ ಕನ್ನಡ ಪರಕೀಯ ಸ್ಥಾನ ಹೊಂದುವ ಅನಿವಾರ್ಯತೆ ಸೃಷ್ಟಿಯಾಗಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಕನ್ನಡ ಪರ ನಿಲುವು ಸಾಬೀತು ಮಾಡಲು ಶಿಕ್ಷಣ ಸಚಿವರು ಮನಸ್ಸು ಮಾಡಬೇಕಿದೆ. ಈ ನೆಲದ ಭಾಷೆ ಉಲ್ಲಂಘಿಸಿರುವ ಸಿಂಧಿ ಪ್ರೌಢಶಾಲೆಯ ಮಾನ್ಯತೆ ರದ್ದುಪಡಿಸಿ ಎನ್‌ಒಸಿ ಹಿಂಪಡೆಯಬೇಕು. ಶಿಕ್ಷಣ ಸಚಿವರ ಕ್ರಮ ಇಡೀ ರಾಜ್ಯವನ್ನು ತಲುಪಿದಲ್ಲಿ ಬೇರೆ ಶಿಕ್ಷಣ ಸಂಸ್ಥೆಗಳಿಗೂ ಪಾಠವಾಗಲಿದೆ. ಕನ್ನಡದ ಹಿತದೃಷ್ಟಿಯಿಂದ ಕಠಿಣ ಕ್ರಮ ಅನಿವಾರ್ಯ ಎಂದು ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.