ಬೆಂಗಳೂರು: ಎಲ್ಲೆಂದರಲ್ಲಿ ಕಸ ಎಸೆಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.
ವಿಧಾನಸೌಧದಲ್ಲಿ ಮಂಗಳವಾರ ಜಿಬಿಎ ಸಭೆ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ರಸ್ತೆ ಬದಿ ಸೇರಿದಂತೆ ನಗರಾದ್ಯಂತ ಎಲ್ಲೆಂದರಲ್ಲಿ ಕಸ ಎಸೆಯುವವರನ್ನು ಪತ್ತೆ ಹಚ್ಚಿ ಕಠಿಣ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದ್ದೇನೆ. ವಾಹನಗಳಲ್ಲಿ ಕಸ ತಂದು ಎಲ್ಲೆಂದರಲ್ಲಿ ಎಸೆಯಲಾಗುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಬೆಂಗಳೂರು ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಹಾಗೂ ಸಂಚಾರಿ ಪೊಲೀಸರೊಟ್ಟಿಗೆ ಚರ್ಚೆ ನಡೆಸಲಾಗಿದೆ" ಎಂದರು.
ಪಾಲಿಕೆಗಳ ಆಯುಕ್ತರು ಪ್ರತಿದಿನ ಬೆಳಿಗ್ಗೆ ನಗರ ಸಂಚಾರದ ಬಗ್ಗೆ ನನಗೆ ಮಾಹಿತಿ ನೀಡಬೇಕು ಎಂದು ಹೇಳಿದ್ದೇನೆ. ಯಾವುದೇ ಕೆಲಸ ತೆಗೆದುಕೊಂಡರೂ ಗುಣಮಟ್ಟ ಕಾಯ್ದುಕೊಳ್ಳಬೇಕು. ಅಲ್ಲಿಂದ ಇಲ್ಲಿ, ಇಲ್ಲಿಂದ ಅಲ್ಲಿ ಕೆಲಸ ಮಾಡಲಾಗಿದೆ ಎಂದು ಯಾರೂ ಬೋಗಸ್ ಬಿಲ್ ಬರೆಯುವಂತಿಲ್ಲ. ಒಂದೊಮ್ಮೆ ಈ ರೀತಿಯಾದರೆ ಇದಕ್ಕೆಲ್ಲಾ ಅಧಿಕಾರಿಗಳೇ ಹೊಣೆ. ಯಾವುದೇ ಇಂಜಿನಿಯರ್ ಗಳನ್ನು ನಂಬಬೇಡಿ ಎಂದು ಹೇಳಿದ್ದೇನೆ" ಎಂದರು.
ಮಾಲೂರು ವಿಧಾನಸಭಾ ಕ್ಷೇತ್ರದ ಮರುಮತ ಎಣಿಕೆ ಕುರಿತು ನ್ಯಾಯಾಲಯದ ತೀರ್ಪಿನ ಬಗ್ಗೆ ಕೇಳಿದಾಗ, "ನ್ಯಾಯಲಯದ ಮರು ಎಣಿಕೆ ಆದೇಶ ಆಶ್ಚರ್ಯ ತಂದಿದೆ. ಈ ಬಗ್ಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಮರು ಮತ ಎಣಿಕೆ ನಡೆದರು ನಂಜೇಗೌಡ ಅವರು ಮತ್ತೆ ಗೆಲ್ಲುವ ವಿಶ್ವಾಸವಿದೆ" ಎಂದರು.
ಈ ಮಧ್ಯೆ ಮಹಾರಾಷ್ಟ್ರ ಮುಖ್ಯಮಂತ್ರಿಗಳು ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳವನ್ನು ವಿರೋಧಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಹೇಳಿದ್ದಾರೆ. ಈ ವಿಚಾರವಾಗಿ ನಾವು ಪ್ರತ್ಯೇಕವಾಗಿ ಹೋರಾಟ ಮಾಡುತ್ತೇವೆ. ಅದರ ಬಗ್ಗೆ ಸಧ್ಯಕ್ಕೆ ಚರ್ಚೆ ಮಾಡುವುದಿಲ್ಲ. ಈಗ ಬಂದಿರುವ ತೀರ್ಪಿನ ಪ್ರಕಾರ ನಮ್ಮ ಪಾಲಿನ ನೀರನ್ನು ಪಡೆಯುವುದು ನಮ್ಮ ಹಕ್ಕು. ನಮ್ಮ ರಾಜ್ಯದ ರೈತರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದ್ದು, ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ಸಂತ್ರಸ್ತ ರೈತರನ್ನು ರಕ್ಷಣೆ ಮಾಡಲಾಗುವುದು” ಎಂದು ತಿಳಿಸಿದರು.
ಒಂದೆಡೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿಲ್ಲ, ಮತ್ತೊಂದೆಡೆ ನೆರೆ ರಾಜ್ಯಗಳ ಆಕ್ಷೇಪ ವ್ಯಕ್ತವಾಗುತ್ತಿರುವ ಬಗ್ಗೆ ಕೇಳಿದಾಗ, “ಮಹಾರಾಷ್ಟ್ರ ಸಿಎಂ ಸುಪ್ರೀಂ ಕೋರ್ಟ್ ಮೆಟ್ಟಿಲೇರುವುದಾಗಿ ಈಗಾಗಲೇ ಹೇಳಿಕೆ ನೀಡಿದ್ದಾರೆ. ಈ ಪ್ರಕರಣದಲ್ಲಿ ನ್ಯಾಯಾಧೀಕರಣದ ತೀರ್ಪು ಹೊರಬಂದಿದೆ.
ಈ ವಿಚಾರದಲ್ಲಿ ಮಹಾರಾಷ್ಟ್ರ ಸಿಎಂಗೆ ಬೇರೆ ಆಯ್ಕೆ ಇಲ್ಲ. ಈ ಹಿಂದೆ ಮಹಾರಾಷ್ಟ್ರ ಈ ಯೋಜನೆಗೆ ಒಪ್ಪಿಗೆ ನೀಡಿತ್ತು. ಸಮುದ್ರಕ್ಕೆ ಸೇರುತ್ತಿರುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ನಾವು ಮುಂದಾಗಿದ್ದೇವೆ. ಇನ್ನು ತೆಲಂಗಾಣ ಹಾಗೂ ಆಂಧ್ರಪ್ರದೇಶ ಈ ವಿಚಾರದಲ್ಲಿ ಒಪ್ಪಿಗೆ ನೀಡುವ ವಿಶ್ವಾಸವಿದೆ. ಈ ಯೋಜನೆಯಿಂದ ಎಲ್ಲಾ ರಾಜ್ಯಗಳ ರೈತರಿಗೂ ಪ್ರಯೋಜನವಾಗಲಿದೆ. ಈ ವಿಚಾರದಲ್ಲಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸುವುದೊಂದೇ ಬಾಕಿ ಇದೆ” ಎಂದು ತಿಳಿಸಿದರು.