ಬೆಂಗಳೂರು: ಬೈಕ್ ಟ್ಯಾಕ್ಸಿ ನಿಷೇಧಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಗಿಗ್ ಕಾರ್ಮಿಕರಾಗಿ ರೂಪಿಸಿದ ಹೊಸ ಕಾನೂನು ಬೈಕ್ ಟ್ಯಾಕ್ಸಿ ಸೇವೆಗಳನ್ನು ಸಮರ್ಪಕವಾಗಿ ಒಳಗೊಳ್ಳುತ್ತದೆಯೇ ಎಂದು ಗುರುವಾರ ಪ್ರಶ್ನಿಸಿದೆ.
ರಾಜ್ಯ ಸರ್ಕಾರ ನಿರ್ದಿಷ್ಟ ನಿಯಮಗಳನ್ನು ರೂಪಿಸುವವರೆಗೆ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತಗೊಳಿಸುವ ಹೈಕೋರ್ಟ್ ಏಕ ಸದ್ಯಸ ಪೀಠದ ಆದೇಶ ಪ್ರಶ್ನಿಸಿ ಓಲಾ(ಎಎನ್‌ಐ ಟೆಕ್ನಾಲಜೀಸ್), ಉಬರ್, ರಾಪಿಡೊ, ವೈಯಕ್ತಿಕ ಸವಾರರು ಮತ್ತು ಬೈಕ್ ಟ್ಯಾಕ್ಸಿ ವೆಲ್‌ಫೇರ್ ಅಸೋಸಿಯೇಷನ್ ಸಲ್ಲಿಸಿದ ಮೇಲ್ಮನವಿಗಳನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ.
ವಿಚಾರಣೆ ವೇಳೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಅವರು, ಸರ್ಕಾರ ಇತ್ತೀಚೆಗೆ ಕರ್ನಾಟಕ ಆ್ಯಪ್ ಆಧಾರಿತ ಗಿಗ್ ವರ್ಕರ್ಸ್ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಕಾಯ್ದೆ, 2025 ಅನ್ನು ಜಾರಿಗೊಳಿಸಿದೆ ಎಂದು ಪೀಠಕ್ಕೆ ತಿಳಿಸಿದರು. ಇದು ಡೆಲಿವೆರಿ ಕೆಲಸಗಾರರು ಮತ್ತು ರೈಡ್-ಶೇರಿಂಗ್ ಪ್ಲಾಟ್‌ಫಾರ್ಮ್‌ಗಳಲ್ಲಿ ತೊಡಗಿರುವವರಿಗೆ ಸಾಮಾಜಿಕ ಭದ್ರತೆಯನ್ನು ಒದಗಿಸುತ್ತದೆ.
ಸೆಪ್ಟೆಂಬರ್ 12 ರಂದು ಜಾರಿಗೆ ಬಂದ ಈ ಕಾನೂನು, ಉಬರ್, ಓಲಾ ಮತ್ತು ಜೆಪ್ಟೊದಂತಹ ಅಪ್ಲಿಕೇಶನ್‌ಗಳ ಮೂಲಕ ಕೆಲಸ ಮಾಡುವ ಕಾರ್ಮಿಕರನ್ನು ಒಳಗೊಳ್ಳುವ ಗುರಿ ಹೊಂದಿದೆ.
ಆದಾಗ್ಯೂ, ನ್ಯಾಯಾಧೀಶರು, ಈ ಕಾನೂನು ಬೈಕ್ ಟ್ಯಾಕ್ಸಿ ಸವಾರರ ಕಳವಳಗಳನ್ನು ಸ್ಪಷ್ಟವಾಗಿ ಪರಿಹರಿಸುತ್ತದೆಯೇ? ಎಂದು ಪ್ರಶ್ನಿಸಿದರು. ಅಲ್ಲದೆ ಬೈಕ್ ಟ್ಯಾಕ್ಸಿ ಬದಲು ಗಿಗ್ ಕಾರ್ಮಿಕರ ಬಗ್ಗೆ ಹೇಳುತ್ತಿದ್ದೀರಿ. ಒಂದು ತಿಂಗಳು ಸಮಯ ನೀಡಿದ್ದರೂ ಈ ಬಗ್ಗೆ ಸರ್ಕಾರ ನೀತಿ ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಬೈಕ್ ಟ್ಯಾಕ್ಸಿ ಸಂಬಂಧ ನೀತಿ ಚೌಕಟ್ಟು ನಿಗದಿಪಡಿಸಲು ಒಂದು ತಿಂಗಳು ಸಮಯ ನೀಡಿದ್ದರೂ ಸರ್ಕಾರ ಈವರೆಗೆ ನೀತಿ ರೂಪಿಸಿಲ್ಲ. ಹೀಗಾಗಿ ಸರ್ಕಾರದ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಹೈಕೋರ್ಟ್ ಹೇಳಿದೆ.
ಬೈಕ್ ಟ್ಯಾಕ್ಸಿ ಬಗ್ಗೆ ನಿಮ್ಮ ವಾದ ಮಂಡಿಸಿ. ಆ ಬಳಿಕ ಸೂಕ್ತ ಆದೇಶ ಹೊರಡಿಸುವುದಾಗಿ ತಿಳಿಸಿರುವ ಕೋರ್ಟ್, ಮುಂದಿನ ವಿಚಾರಣೆಯನ್ನ ಅಕ್ಟೋಬರ್ 15ಕ್ಕೆ ಮುಂದೂಡಿದೆ.
ವಿಚಾರಣೆಯ ವೇಳೆ ಕ್ಯಾಬ್ ಅಗ್ರಿಗೇಟರ್‌ಗಳು ನಿಷೇಧದ ಹೊರತಾಗಿಯೂ ಬೈಕ್ ಟ್ಯಾಕ್ಸಿಗಳನ್ನು ನಿರ್ವಹಿಸುತ್ತಿದ್ದಾರೆ. ಇದು ನ್ಯಾಯಾಂಗ ನಿಂದನೆಯಾಗುತ್ತದೆ. ಹೀಗಾಗಿ ಬೈಕ್ ಟ್ಯಾಕ್ಸಿ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಗೆ ರಾಜ್ಯ ಸರ್ಕಾರದ ಪರ ವಕೀಲ ಎ.ಜಿ. ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೋರ್ಟ್, ಬೈಕ್ ಟ್ಯಾಕ್ಸಿ ಬದಲು ಗಿಗ್ ಕಾರ್ಮಿಕರ ಬಗ್ಗೆ ಹೇಳುತ್ತಿದ್ದೀರಿ. ಒಂದು ತಿಂಗಳು ಸಮಯ ನೀಡಿದ್ದರೂ ಈ ಬಗ್ಗೆ ಸರ್ಕಾರ ನೀತಿ ರೂಪಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿತು.
ಆದಾಗ್ಯೂ, ಈಗ ವೈಯಕ್ತಿಕ ಸವಾರರ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್, ರಾಜ್ಯಕ್ಕೆ ನಿರ್ದೇಶನ ನೀಡಿದೆ.