ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮೇಲೆ ಪರಿಣಾಮ ಉಂಟುಮಾಡಿರುವ ತಾಂತ್ರಿಕ ಸಮಸ್ಯೆಗಳನ್ನು "ಬಹುತೇಕ ಬಗೆಹರಿಸಲಾಗಿದೆ" ಮತ್ತು ಸಮೀಕ್ಷೆಯು ಈಗ ಪೂರ್ಣ ಪ್ರಮಾಣದಲ್ಲಿ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ತಿಳಿಸಿದರು. ಜಾತಿ ಗಣತಿಗೆ ಸಂಬಂಧಿಸಿದಂತೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ, "ಸಮೀಕ್ಷೆಯ ನಿಧಾನಗತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. "ಇಲ್ಲಿಯವರೆಗೆ, ಪ್ರತಿದಿನ ಕೇವಲ ಶೇ. 2.4 ರಷ್ಟು ಸಮೀಕ್ಷೆಯ ಪ್ರಗತಿ ಸಾಧಿಸಲಾಗಿದೆ. ಇನ್ನುಮುಂದೆ ಪ್ರತಿದಿನ ಕನಿಷ್ಠ ಶೇ. 10 ರಷ್ಟು ಪ್ರಗತಿ ಸಾಧಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ" ಎಂದು ಹೇಳಿದರು. ರಾಜ್ಯದ ಎಲ್ಲಾ 1.43 ಕೋಟಿ ಕುಟುಂಬಗಳನ್ನು ಒಳಗೊಳ್ಳುವುದು ಗುರಿಯಾಗಿದ್ದರೂ, ಇಲ್ಲಿಯವರೆಗೆ ಕೇವಲ 2.76 ಲಕ್ಷ ಕುಟುಂಬಗಳನ್ನು ಮಾತ್ರ ಸಮೀಕ್ಷೆ ಮಾಡಲಾಗಿದೆ ಎಂದು ಅಧಿಕಾರಿಗಳು ಈ ವೇಳೆ ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಜಾತಿ ಗಣತಿ ವಿಸ್ತರಿಸುವುದಿಲ್ಲ, ನಿಗದಿತ ಅವಧಿಯೊಳಗೆ ಸಮೀಕ್ಷೆ ಪೂರ್ಣಗೊಳ್ಳಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಸಿಇಒಗಳು ಸಮೀಕ್ಷೆಯನ್ನು "ಬಹಳ ಗಂಭೀರವಾಗಿ" ಪರಿಗಣಿಸುವಂತೆ ಮತ್ತು ಗಡುವಿನೊಳಗೆ ಪೂರ್ಣಗೊಳ್ಳುವಂತೆ ನೋಡಿಕೊಳ್ಳಲು ಸೂಚಿಸಲಾಗಿದೆ ಎಂದು ಸಿಎಂ ತಿಳಿಸಿದರು.
ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ 12:30ಕ್ಕೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಪತ್ನಿ ಸರಸ್ವತಿ, ಕುಟುಂಬಸ್ಥರು, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಹಲವು ಗಣ್ಯರು ಅಗಲಿದ ಸಾಹಿತಿಗೆ ಕಣ್ಣೀರಿನ ವಿದಾಯ ಹೇಳಿದರು. ಪುತ್ರರಾದ ರವಿಶಂಕರ್, ಉದಯ್ ಶಂಕರ್ ಅಂತಿಮ ವಿಧಿ ವಿಧಾನ ನೆರವೇರಿಸಿದರು. ಭೈರಪ್ಪನವರ ಇಚ್ಛೆಯಂತೆ ಅಂತ್ಯ ಸಂಸ್ಕಾರದಲ್ಲಿ ಸಾಹಿತಿ ಸಹನಾ ವಿಜಯ್‌ಕುಮಾರ್ ಸಹ ಉಪಸ್ಥಿತರಿದ್ದರು. ಪುತ್ರರ ಜೊತೆಗೆ ಸಹನಾ ವಿಜಯ್‌ಕುಮಾರ್ ಭೈರಪ್ಪ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಶಾಸಕ ಟಿ.ಎಸ್.ಶ್ರೀವತ್ಸ ಮುಂತಾದವರು ಭೈರಪ್ಪಗೆ ಅಂತಿಮ ನಮನ ಸಲ್ಲಿಸಿದರು.
ಸ್ವಾತಂತ್ರ್ಯ ಉದ್ಯಾನವನ್ನು ಹೊರತುಪಡಿಸಿ ನಗರದಲ್ಲಿ ಪ್ರತಿಭಟನೆಗಳನ್ನು ನಿಷೇಧಿಸುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿ ಗಾಂಧಿನಗರ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 223 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೆಪ್ಟೆಂಬರ್ 24 ರಂದು ರಸ್ತೆ ಗುಂಡಿಗಳು ಮತ್ತು ದುಃಸ್ಥಿತಿಯನ್ನು ಎತ್ತಿ ತೋರಿಸಲು ಪ್ರತಿಭಟನೆಗೆ ಕರೆ ನೀಡಿದ್ದರು. ಈ ಸಂಬಂಧ ಪಕ್ಷದ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ನೇತೃತ್ವದಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಬೆಳಿಗ್ಗೆ 11.30 ರ ಸುಮಾರಿಗೆ ಗಾಂಧಿನಗರ ಕ್ಷೇತ್ರದ ಆರ್‌ಟಿ ಬೀದಿಯಲ್ಲಿ ರಸ್ತೆ ತಡೆದು, ಪ್ರತಿಭಟನೆ ನಡೆಸಿದ್ದರು.
ನಗರದ ಅಂಗಡಿಯೊಂದರ ಮುಂದೆ ಇರಿಸಲಾಗಿದ್ದ ಸೀರೆ ಬಂಡಲ್ ಕದ್ದಿದ್ದಕ್ಕಾಗಿ ಸಾರ್ವಜನಿಕವಾಗಿ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸೆಪ್ಟೆಂಬರ್ 21 ರಂದು ಬೆಂಗಳೂರಿನ ಚಿಕ್ಕಪೇಟೆಯ ಅವೆನ್ಯೂ ರಸ್ತೆಯಲ್ಲಿ ನಡೆದ ಹಲ್ಲೆಯನ್ನು ಅಂಗಡಿಯವರೊಬ್ಬರು ತಮ್ಮ ಮೊಬೈಲ್ ಫೋನ್‌ನಲ್ಲಿ ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದರು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಏತನ್ಮಧ್ಯೆ, ಸೀರೆಗಳ ಬಂಡಲ್ ಕದ್ದಿದ್ದಾರೆ ಎಂದು ಆರೋಪಿಸಿ ಅಂಗಡಿ ಮಾಲೀಕ ಉಮೇದ್ರಮ್ ನೀಡಿದ ದೂರಿನ ಮೇರೆಗೆ ಮಹಿಳೆಯನ್ನೂ ಪೊಲೀಸರು ಬಂಧಿಸಿದ್ದು ಕದ್ದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವ ನಾರಾಯಣ ನೇತೃತ್ವದ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸನ್ನು ಸಚಿವ ಸಂಪುಟ ತಿರಸ್ಕರಿಸಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ. 2016ರ ಜು.7ರಂದು ಗಣಪತಿ ಮಡಿಕೇರಿಯ ವಿನಾಯಕ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿತ್ತು. ಆನಂತರ, ಮುಖ್ಯಮಂತ್ರಿಗಳ ಆದೇಶದಂತೆ ಪ್ರಕರಣದ ತನಿಖೆ ನಡೆಸಲು ಹೈಕೋರ್ಟ್ನತ ನಿವೃತ್ತ ನ್ಯಾಯಮೂರ್ತಿ ಕೆ.ಎನ್.ಕೇಶವ ನಾರಾಯಣ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ನೇಮಿಸಲಾಗಿತ್ತು. ಈ ವರದಿಯ ಅಧ್ಯಯನಕ್ಕಾಗಿ ನಿವೃತ್ತ ಪೊಲೀಸ್ ಅಧಿಕಾರಿ ಎಂ.ಕೆ. ಶ್ರೀವಾಸ್ತವ್ ಸಮಿತಿ ರಚಿಸಿದ್ದ ಸರಕಾರ, ಅದರ ಅನುಸಾರ ನ್ಯಾ. ಕೇಶವನಾರಾಯಣ ವರದಿಯನ್ನು ತಿರಸ್ಕರಿಸಿದೆ.