ಬೆಂಗಳೂರು: ರಾಜ್ಯದಲ್ಲಿ ಜೂನ್ ಒಂದರಿಂದ ಈ ವರೆಗೆ ಮಳೆ ಹಾನಿಯಿಂದ 52 ಮಂದಿ ಮರಣ ಹೊಂದಿದ್ದಾರೆ. ಸೆಪ್ಟೆಂಬರ್ 28 ರವರೆಗಿನ ಎಲ್ಲಾ ಸಾವುಗಳಿಗೂ ವಾರಸುದಾರರಿಗೆ ಪರಿಹಾರ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿ, ಅಧಿಕಾರಿಗಳ ಜೊತೆ ಚರ್ಚಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಒಟ್ಟು 422 ಜಾನುವಾರುಗಳು ಮರಣ ಹೊಂದಿವೆ. ಇದರಲ್ಲಿ ಯಾದಗಿರಿ ಜಿಲ್ಲೆ ಒಂದರಲ್ಲೇ 245 ಜಾನುವಾರುಗಳು ಮರಣ ಹೊಂದಿವೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ 27, ವಿಜಯಪುರದಲ್ಲಿ 3, ಬೀದರ್ ಜಿಲ್ಲೆಯಲ್ಲಿ 38 ಜಾನುವಾರುಗಳು ಮರಣ ಹೊಂದಿವೆ. ಈ ಪೈಕಿ 407 ಜಾನುವಾರುಗಳ ಮಾಲೀಕರಿಗೆ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು.
547 ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಳಗಾಗಿವೆ. ಇವುಗಳಿಗೆ ತಲಾ 1.20 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅನಧಿಕೃತವಾಗಿ ನಿರ್ಮಿಸಿದ್ದ 62 ಮನೆಗಳಿಗೆ ತಲಾ ಒಂದು ಲಕ್ಷ ರೂ. ಪರಿಹಾರ ನೀಡಲಾಗಿದೆ.
ಭಾಗಶಃ ಹಾನಿಯಾದ ಮನೆಗಳು (ಶೇ.50 ರಿಂದ 75) ಇವುಗಳಿಗೆ ತಲಾ 50 ಸಾವಿರ ರೂ.ಗಳ ಪರಿಹಾರ ವಿತರಿಸಲಾಗಿದೆ. ಶೇ.20ರಿಂದ 50ರಷ್ಟು ಹಾನಿಯಾದ ಮನೆಗಳ ಸಂಖ್ಯೆ 3,166. ಶೇ.15ರಿಂದ 20ರಷ್ಟು ಹಾನಿಯಾಗಿದ್ದ 3,881 ಮನೆಗಳಿಗೆ 6,500 ರೂ. ಪ್ರಕಾರ ಪರಿಹಾರ ನೀಡಲಾಗಿದೆ ಎಂದು ಅವರು ಹೇಳಿದರು.
ಒಟ್ಟಾರೆ ಇದುವರೆಗೆ 23.12 ಕೋಟಿ ರೂ.ಗಳನ್ನು ಪರಿಹಾರವಾಗಿ ಮನೆಗಳನ್ನು ಕಳೆದುಕೊಂಡವರಿಗೆ ನೀಡಲಾಗಿದೆ. ಬಟ್ಟೆ ಮತ್ತು ಗೃಹ ಬಳಕೆ ವಸ್ತುಗಳನ್ನು ಕಳೆದುಕೊಂಡ 4,858 ಕುಟುಂಬಗಳಿಗೆ ಈ ವರೆಗೆ 2.42 ಕೋಟಿ ರೂ.ಗಳ ಪರಿಹಾರ ನೀಡಲಾಗಿದೆ. ರಸ್ತೆ, ಸೇತುವೆ ಮುಂತಾದವುಗಳ ಸಮೀಕ್ಷೆ ಕಾರ್ಯ ನಡೆಯುತ್ತಿದೆ. ಸಮೀಕ್ಷೆ ಪೂರ್ಣಗೊಂಡು ವರದಿ ಬಂದ ಕೂಡಲೇ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಪ್ರತಿ ಕ್ಷೇತ್ರಕ್ಕೆ ವಿಶೇಷ ಅನುದಾನದ ರೂಪದಲ್ಲಿ 25 ರಿಂದ 50 ಕೋಟಿ ರೂ. ನೀಡಲಾಗಿದೆ ಎಂದು ಅವರು ತಿಳಿಸಿದರು.