ಮೈಸೂರು: 5 ಗ್ಯಾರಂಟಿ ಯೋಜನೆಗಳ ಜಾರಿ ಮಾಡಿ ಮೂರು ವರ್ಷ ಕಳೆದ ಮೇಲೂ ಕೂಡ ರಾಜ್ಯ ಆರ್ಥಿಕವಾಗಿ ಅತ್ಯಂತ ಸದೃಢವಾಗಿದೆ. ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನು ಮಾಡಲು ಕೂಡ ಸಾಧ್ಯ ಎನ್ನುವುದನ್ನು ನಾವು ಸಾಧಿಸಿ ತೋರಿಸಿದ್ದೇವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.
ಗುಂಡ್ಲುಪೇಟೆಯಲ್ಲಿ 475 ಕೋಟಿ ರೂ.ಗಳ ವೆಚ್ಚದಲ್ಲಿ 110 ಕೆರೆಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯೂ ಸೇರಿದಂತೆ ಒಟ್ಟು 523 ಕೋಟಿ ರೂ. ಮೊತ್ತದ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ನಂಜುಂಡಪ್ಪ ವರದಿಯ ಪ್ರಕಾರ ಗುಂಡ್ಲುಪೇಟೆಯನ್ನು ಅತಿ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲಾಗಿದ್ದು, ಈ ತಾಲ್ಲೂಕಿಗೆ ವಿಶೇಷ ಆದ್ಯತೆಯನ್ನು ನೀಡಲಾಗಿದೆ. ಈ ಕಾರ್ಯಗಳಿಗೆ ಸ್ಥಳೀಯ ಶಾಸಕರಾದ ಗಣೇಶ್ ಪ್ರಸಾದ್ ಅವರ ಒತ್ತಾಸೆಯೂ ಕಾರಣ. ಅವರು ತಮ್ಮ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ನಿಷ್ಠೆಯಿಂದ ಶ್ರಮಿಸುತ್ತಿದ್ದಾರೆಂದು ಹೇಳಿದರು.
ನಮ್ಮ ಸರ್ಕಾರದ ಮೂರು ವರ್ಷಗಳ ಅಧಿಕಾರದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುತ್ತಿದ್ದೇವೆ. ಆದಾಗ್ಯೂ ವಿರೋಧ ಪಕ್ಷಗಳು ರಾಜಕೀಯ ದುರುದ್ದೇಶದಿಂದ ಅಪಪ್ರಚಾರ ಮಾಡುತ್ತಿದೆ. ಆದರೆ ಜನರು ಇದರ ಸತ್ಯಾಸತ್ಯತೆಯನ್ನು ಅರಿಯಬೇಕು. ಪ್ರಸ್ತುತ, ಮಹಿಳಾ ಮೀಸಲಾತಿ ಬಿಲ್ ಅನ್ನು ಕಾಂಗ್ರೆಸ್ ವಿರೋಧಿಸಿತು ಎಂದು ಬಿಜೆಪಿ ಸುಳ್ಳುಪ್ರಚಾರ ಮಾಡುತ್ತಿದೆ. ಆದರೆ, ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿಯನ್ನು ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ. ಈ ಸಂವಿಧಾನ ತಿದ್ದುಪಡಿಯನ್ನು ಬಿಜೆಪಿಯವರು ವಿರೋಧಿಸಿದ್ದರು.
ಪ್ರಧಾನಿ ನರೇಂದ್ರ ಮೋದಿಯವರು ಮಹಿಳಾ ಮೀಸಲಾತಿಯನ್ನು ವಿರೋಧಿಸಿದವರನ್ನು ಮಹಿಳೆಯರು ಕ್ಷಮಿಸುವುದಿಲ್ಲ ಎಂದಿದ್ದಾರೆ. ಆದರೆ, 2023 ರಲ್ಲಿಯೇ ಮಹಿಳಾ ಮೀಸಲಾತಿ ಮಸೂದೆ ತರಲಾಗಿದ್ದು, ಇದಕ್ಕೆ ನಾವು ವಿರೋಧಿಸದೇ ಸ್ವಾಗತಿಸಿದ್ದೆವು. ಆದರೆ ಸಹಮತಿ ಸೂಚಿಸಲಾಗಿದ್ದ ಮಹಿಳಾ ಮೀಸಲಾತಿಯನ್ನು 2028ರವರೆಗೆ ಜಾರಿಗೆ ತರಲು ಸಾಧ್ಯವಿಲ್ಲವೆಂದು ಬಿಜೆಪಿಯವರೇ ಹೇಳಿದರು. ಕಾಂಗ್ರೆಸ್ ಪಕ್ಷ ಯಾವಾಗಲೂ ಮಹಿಳಾ ಮೀಸಲಾತಿಯನ್ನು ಬೆಂಬಲಿಸುತ್ತದೆ. ಜನಸಂಖ್ಯೆಯಲ್ಲಿ ಅರ್ಧದಷ್ಟು ಮಹಿಳೆಯರಿದ್ದು, ಅವರಿಗೆ ನ್ಯಾಯಯುತವಾದ ಮೀಸಲಾತಿ ದೊರೆಯಬೇಕಿರುವುದು ಅತ್ಯಗತ್ಯ ಎಂದು ತಿಳಿಸಿದರು.
ಗ್ರಾಮ, ತಾಲ್ಲೂಕು, ಜಿಲ್ಲಾ ಪಂಚಾಯತಿಗಳು, ನಗರಸಭೆ, ನಗರ ಪಾಲಿಕೆಗಳಲ್ಲಿ ಶೇ.50 ರಷ್ಟು ಮಹಿಳೆಯರಿದ್ದರೆ ಇದಕ್ಕೆ ಕಾಂಗ್ರೆಸ್ ಪಕ್ಷ ಕಾರಣ. ಪ್ರಸ್ತುತ, ಕೇಂದ್ರ ಸರ್ಕಾರವು ಮಹಿಳಾ ಮೀಸಲಾತಿ ಕಾಯ್ದೆಯ ಜೊತೆಗೆ ಡೀಲಿಮಿಟೇಷನ್ ಕಾಯ್ದೆ ತರಲು ಪ್ರಯತ್ನಿಸಿದ್ದರಿಂದ ವಿರೋಧವನ್ನು ವ್ಯಕ್ತಪಡಿಸಲಾಗಿದೆ. ಕಾಂಗ್ರೆಸ್ ಡಿಲಿಮಿಟೇಷನ್ ಕಾಯ್ದೆಯನ್ನು ವಿರೋಧಿಸಿದೆಯೇ ಹೊರತು ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ.
ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ನಮ್ಮ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ಹಲವು ರಾಜ್ಯಗಳಲ್ಲಿ ಅನುಸರಿಸುತ್ತಿದ್ದಾರೆ. ಗ್ಯಾರಂಟಿಗಳನ್ನು ಜಾರಿಗೊಳಿಸಿದರೆ, ಕರ್ನಾಟಕ ದಿವಾಳಿಯಾಗುತ್ತದೆ ಎಂದು ಪ್ರಧಾನಿ ಮೋದಿಯವರು ಟೀಕಿಸಿದ್ದರು. ಆದರೂ, ಗ್ಯಾರಂಟಿಗಳ ಜೊತೆಗೆ ಅಭಿವೃದ್ಧಿಯನ್ನು ಸಾಧಿಸುತ್ತಿರುವುದಕ್ಕೆ ಇಂದು ಗುಂಡ್ಲುಪೇಟೆಯಲ್ಲಿ ನಡೆದಿರುವ ಈ ಕಾರ್ಯಕ್ರಮವೇ ಸಾಕ್ಷಿ. ಕಾಂಗ್ರೆಸ್ ಸರ್ಕಾರ ಎಂದಿಗೂ ನುಡಿದಂತೆ ನಡೆಯುತ್ತದೆ.
ಮೂರು ವರ್ಷಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪಯೋಜನೆಗೆ ಒಟ್ಟು 1 ಲಕ್ಷ 60 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿದ್ದರೂ ಎಸ್.ಸಿ.ಎಸ್.ಪಿ / ಟಿ.ಎಸ್.ಪಿ ಯೋಜನೆಯಡಿ 1 ಲಕ್ಷ 10 ಸಾವಿರ ಕೋಟಿ ಮಾತ್ರ ವೆಚ್ಚ ಮಾಡಿದೆ. ಸಮಾಜದಲ್ಲಿ ದಲಿತರು, ಅಲ್ಪಸಂಖ್ಯಾತರು, ಮಹಿಳೆಯರು, ಹಿಂದುಳಿದವರು ಹಾಗೂ ಎಲ್ಲಾ ಧರ್ಮ, ಜಾತಿಗಳ ಬಡವರ ಪರವಾಗಿ ಕೆಲಸ ಮಾಡುತ್ತಿದ್ದೇವೆ. ಕಾಂಗ್ರೆಸ್ ಎಂದಿಗೂ ಬಡವರ, ಅಲ್ಪಸಂಖ್ಯಾತರ, ದಲಿತರ ಪಕ್ಷ. ಎಲ್ಲರನ್ನೂ ಒಳಗೊಂಡ ಅಭಿವೃದ್ಧಿಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ.
ಬಿಜೆಪಿ ಜಾತಿ ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದೆ. ಅವರು ಎಂದಿಗೂ ಬಡವರ ಪರವಾಗಿಲ್ಲ ಹಾಗೂ ಸಂವಿಧಾನ ವಿರೋಧಿಗಳು. ನೀರಾವರಿ, ಲೋಕೋಪಯೋಗಿ, ಗ್ರಾಮೀಣಾಭಿವೃದ್ಧಿ , ಇಂಧನ, ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳ ಮೂಲಕ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ.
ಶಾಸಕ ಗಣೇಶ್ ಪ್ರಸಾದ್ ಅವರಿಗೆ ಕೆಲಸ ಮಾಡುವ ಉತ್ಸಾಹವಿದ್ದು, ಅದಕ್ಕೆ ಸರ್ಕಾರ ಸಹಕಾರ ನೀಡಲಿದೆ. ಗುಂಡ್ಲುಪೇಟೆಯಲ್ಲಿ ಸಂಚಾರ ಪೊಲೀಸ್ ಠಾಣೆಯನ್ನು ಸ್ಥಾಪಿಸಲು ಈ ಬಾರಿ ಆಯವ್ಯಯದಲ್ಲಿ ಘೋಷಣೆ ಮಾಡಲಾಗಿದೆ. ಕನಕ ಭವನಕ್ಕೂ ಅನುದಾನ ನೀಡಲಾಗುವುದು. ತೆರಕಣಾಂಬಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಿ 30 ಹಾಸಿಗೆಗಳ ಆಸ್ಪತ್ರೆಯನ್ನಾಗಿಸಲಾಗಿದೆ. ಇಡೀ ಕ್ಷೇತ್ರದ ಅಭಿವೃದ್ಧಿಯನ್ನು ಶಾಸಕರು ಮಾಡಲಿದ್ದಾರೆ. ಇದೇ ವೇಳೆ ಮೂರು ವರ್ಷಗಳಲ್ಲಿ ಸರ್ಕಾರ ಗುಂಡ್ಲುಪೇಟೆ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾಹಿತಿಯನ್ನು ಪುಸ್ತಕ ರೂಪದಲ್ಲಿ ಹೊರತರಲಾಗಿದೆ. ಕೆರೆಗಳನ್ನು ತುಂಬಿಸುವ ಕೆಲಸ ನಾಳೆಯಿಂದಲೇ ಪ್ರಾರಂಭವಾಗಲಿದೆ ಎಂದು ಹೇಳಿದರು.
ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ. ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿದ್ದು, ಈ ಬಾರಿಯ ಆಯವ್ಯಯದಲ್ಲಿ ಸುಮಾರು 82 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸಗಳಿಗೆ ಮೀಸಲಿರಿಸಿದ್ದೇವೆ.
ಕುವೆಂಪು ಅವರು ವಿಶ್ವಮಾನವರಾಗುವ ಪ್ರಯತ್ನವನ್ನು ಮಾಡಿದ್ದರು. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕು ಎಂದು ಬಯಸಿದ್ದರು. ಎಲ್ಲರೂ ಮನುಷ್ಯರಾಗಿ ಬಾಳಬೇಕೆನ್ನುವ ಆಶಯವನ್ನು ಹೊಂದಿದ್ದ ಕುವೆಂಪು ಅವರ ಭವನ ಇಲ್ಲಿ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹ. ಬೆಟ್ಟದಪುರ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಯನ್ನು 50 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಇದರಿಂದ ಸಹಸ್ರಾರು ಭಕ್ತರಿಗೆ ಅನುಕೂಲವಾಗಲಿದೆ.
ಸಚಿವರಾದ ವೆಂಕಟೇಶ್ ಅವರು ಪಿರಿಯಾಪಟ್ಟಣದ ಶಾಸಕರಾದ ನಂತರ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ. ಅವರ ಶ್ರಮ ಶ್ಲಾಘನೀಯ. ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಮುಂದೆಯೂ ಈ ಯೋಜನೆಗಳನ್ನು ಮುಂದುವರೆಸಲಾಗುವುದು. ನಮ್ಮ ಸರ್ಕಾರ ಅಭಿವೃದ್ಧಿಗೂ ಹಣವನ್ನು ಮೀಸಲಿರಿಸಿದೆ ಎನ್ನಲು ಇಂದು ಶಂಕುಸ್ಥಾಪನೆಯಾಗಿರುವ 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳೇ ಸಾಕ್ಷಿ.
ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ. ಟೀಕೆಗಳು ವಾಸ್ತವದ ನೆಲೆಗಟ್ಟಿನಲ್ಲಿರಬೇಕು. ಸುಳ್ಳು ಹೇಳುವುದನ್ನೇ ಕಸಬು ಮಾಡಿಕೊಳ್ಳದೆ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾತನಾಡಬೇಕು. ಅವರು ಅಧಿಕಾರದಲ್ಲಿದ್ದಾಗ ನಾಲ್ಕು ವರ್ಷಗಳ ಕಾಲ ಏನು ಮಾಡಿದ್ದಾರೆಂದು ಜನರ ಮುಂದಿಡಬೇಕು. ನಾವು ಅಭಿವೃದ್ಧಿ ಕಾರ್ಯಗಳ ಮೂಲಕವೇ ಬಿಜೆಪಿಯ ಅಪಪ್ರಚಾರಕ್ಕೆ ಉತ್ತರ ಕೊಡುತ್ತಿದ್ದೇವೆಂದೂ ತಿಳಿಸಿದರು.