ಉಡುಪಿ: ಜಿಲ್ಲೆಯ ಪಡುಬಿದ್ರಿಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜಾ ಅವರ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ನಿನ್ನೆ ಮಧ್ಯಾಹ್ನ ಮುಡ್ರಂಗಡಿಯ ಸೇಂಟ್ ಕ್ಸೇವಿಯರ್ಸ್ ಚರ್ಚ್ ಆವರಣದಲ್ಲಿ ಡಿಸೋಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.
ಡಿಸೋಜಾ ಅವರು ಮಧ್ಯಾಹ್ನ ಸುಮಾರು 3.45ಕ್ಕೆ ತಮ್ಮ ಪ್ರಿನ್ಸ್ ಎಂಟರ್‌ಪ್ರೈಸಸ್ ಕಚೇರಿಗೆ ಆಗಮಿಸಿದ್ದರು. ತಮ್ಮ ವಾಹನದ ಚಾಲಕನ ಬದಿಯ ಬಾಗಿಲಿನತ್ತ ತೆರಳುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಲ್ಲಿ ಒಬ್ಬಾತ ಪಿಸ್ತೂಲ್‌ನಿಂದ ಅವರ ತಲೆಗೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡಿದ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಶಿರ್ವ ಪೊಲೀಸ್ ಠಾಣೆಯಲ್ಲಿ ಕೊಲೆ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ತನಿಖೆಯ ವೇಳೆ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎನ್ನಲಾದ ಮೂವರು ಬಸ್‌ನಲ್ಲಿ ಭಟ್ಕಳದತ್ತ ತೆರಳುತ್ತಿದ್ದಾರೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತು. ಬೈಂದೂರಿನ ಒಟ್ಟಿನಣೆ ಬಳಿ ಪೊಲೀಸರು ಬಸ್‌ನ್ನು ತಡೆದು ಪರಿಶೀಲಿಸಿದರು.
ಬಸ್‌ನಿಂದ ಇಳಿದ ಬಳಿಕ ಮೂವರು ಶಂಕಿತರು ಪರಾರಿಯಾಗಲು ಯತ್ನಿಸಿದರು ಎನ್ನಲಾಗಿದೆ. ಅವರಲ್ಲಿ ಉತ್ತರ ಪ್ರದೇಶದ ಪಿಲ್ವಾ ಮೂಲದ 42 ವರ್ಷದ ರಾಜು ಎಂಬಾತ ಕಾಪು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ತೇಜಸ್ವಿ ಅವರನ್ನು ತಳ್ಳಿ, ಪಿಸ್ತೂಲ್‌ನಿಂದ ಪೊಲೀಸರತ್ತ ಗುಂಡು ಹಾರಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತ್ಮರಕ್ಷಣೆಗಾಗಿ ಪೊಲೀಸರು ಪ್ರತಿಯಾಗಿ ಗುಂಡು ಹಾರಿಸಿದ್ದು, ರಾಜು ಕಾಲಿಗೆ ಗುಂಡು ತಗುಲಿದೆ. ಬಳಿಕ ಆತನನ್ನು ಬಂಧಿಸಿ, ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜು ವಿರುದ್ಧ ಕೊಲೆ ಯತ್ನ ಹಾಗೂ ಸರ್ಕಾರಿ ಕರ್ತವ್ಯದಲ್ಲಿದ್ದ ಅಧಿಕಾರಿಗೆ ಅಡ್ಡಿಪಡಿಸಿದ ಆರೋಪದಡಿ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿದೆ.
ಇತರ ಇಬ್ಬರು ಆರೋಪಿಗಳಾದ ಉತ್ತರಾಖಂಡದ 23 ವರ್ಷದ ಅಜಯ್ ರಾಸ್ತೋಗಿ ಅಲಿಯಾಸ್ ಅನ್ಮೋಲ್ ಮತ್ತು ಬಿಹಾರದ 38 ವರ್ಷದ ಜಿಯಾಹುಲ್ ವಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಕ್ರಮವಾಗಿ ಕುಮಟಾ ಮತ್ತು ಭಟ್ಕಳ ಪೊಲೀಸರ ನೆರವಿನಿಂದ ಶನಿವಾರ ಬೆಳಗ್ಗೆ ಬಂಧಿಸಲಾಗಿದೆ.
ಕಾರ್ಯಾಚರಣೆ ವೇಳೆ ಪಿಎಸ್‌ಐ ತೇಜಸ್ವಿ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜು ಕೂಡ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸೋಜಾ ಕೈಗೊಂಡಿದ್ದ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಈ ಹತ್ಯೆ ಕಾಂಟ್ರಾಕ್ಟ್ ಕಿಲ್ಲಿಂಗ್ ಅಥವಾ ‘ಸುಪಾರಿ’ ಹತ್ಯೆ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ಹೊರರಾಜ್ಯದ ಕಂಪನಿಯೊಂದರೊಂದಿಗೆ ಹಣಕಾಸಿನ ವಿಚಾರದಲ್ಲಿ ಡಿಸೋಜಾ ಅವರಿಗೆ ಭಿನ್ನಾಭಿಪ್ರಾಯ ಉಂಟಾಗಿತ್ತು. ಇದರ ಹಿನ್ನೆಲೆಯಲ್ಲಿ ಅವರ ಹತ್ಯೆಗೆ ಸುಪಾರಿ ನೀಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.