ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆಯಲ್ಲಿ ಮತ್ತೊಂದು ಬದಲಾವಣೆಯಾಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಶಿಫಾರಸಿನ ಮೇರೆಗೆ ಖಾತೆಗಳ ಮರುಹಂಚಿಕೆ ಮಾಡಲಾಗಿದೆ ಎಂದು ರಾಜ್ಯಪಾಲರ ಕಚೇರಿ ಪ್ರಕಟಣೆ ತಿಳಿಸಿದೆ.
ಕೃಷ್ಣಬೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರಿನ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ.
ಇದೀಗ ಸಂಸದೀಯ ವ್ಯವಹಾರಗಳ ಖಾತೆಯೂ ಸೇರ್ಪಡೆಯಾಗಿರುವುದರಿಂದ ಅವರ ಹೊಣೆಗಾರಿಕೆ ಮತ್ತಷ್ಟು ವಿಸ್ತರಣೆಗೊಂಡಿದೆ.
ಇದೇ ವೇಳೆ, ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಉಸ್ತುವಾರಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.