ಬೆಂಗಳೂರು: ಸೈಬರ್ ಕ್ರೈಂ ಪ್ರಕರಣವೊಂದರ ತನಿಖೆಗಾಗಿ ಮಧ್ಯಪ್ರದೇಶಕ್ಕೆ ತೆರಳಿದ್ದ ಬೆಂಗಳೂರು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ.
ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ವೇಳೆ ಬಸ್ ಪ್ರಪಾತಕ್ಕೆ ಉರುಳಿದ ಪರಿಣಾಮ ಇನ್ಸ್‌ಪೆಕ್ಟರ್ ರವಿ ಕೆ.ಬಿ. ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ರವಿ ಅವರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಬೆಳಗ್ಗೆ ಸುಮಾರು 7.30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಇನ್ಸ್‌ಪೆಕ್ಟರ್ ರವಿ ಕೆ.ಬಿ ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ (ಸೈಬರ್ ಕ್ರೈಂ) ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು , ಸೈಬರ್ ಎಪಿಕೆ ಫೈಲ್ ಫ್ರಾಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ಒಟ್ಟು ಒಂಬತ್ತು ಜನರಿದ್ದ ಪೊಲೀಸರ ತಂಡ ಮಧ್ಯಪ್ರದೇಶಕ್ಕೆ ತೆರಳಿತ್ತು.
ಭೋಪಾಲ್‌ನಿಂದ ಇಂದೋರ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅವರು ಪ್ರಯಾಣಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ಘಟನೆಯಲ್ಲಿ ರವಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಪಿಎಸ್‌ಐ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರಿದಿದೆ.
ಈ ಪೈಕಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದ ನಂತರ ಆರು ಸಿಬ್ಬಂದಿ ಬೆಂಗಳೂರಿಗೆ ವಾಪಸಾಗಿದ್ದರು. ಆದರೆ, ಇನ್ನುಳಿದ ಆರೋಪಿಗಳ ಪತ್ತೆಗಾಗಿ ಇನ್ಸ್‌ಪೆಕ್ಟರ್ ರವಿ ಸೇರಿದಂತೆ ಮೂವರು ಸಿಬ್ಬಂದಿ ಮಧ್ಯಪ್ರದೇಶದಲ್ಲೇ ಉಳಿದುಕೊಂಡಿದ್ದರು.
ಮೃತ ಕೆ.ಬಿ. ರವಿ ಅವರು 2005 ಬ್ಯಾಚ್‌ನಲ್ಲಿ ಕಾನ್‌ಸ್ಟೇಬಲ್ ಆಗಿ ಸೇವೆಗೆ ಸೇರಿ, ಬಳಿಕ 2007ರಲ್ಲಿ ಪಿಎಸ್‌ಐ ಆಗಿ ಆಯ್ಕೆಯಾಗಿದ್ದರು. ಈ ಹಿಂದೆ ಬೆಂಗಳೂರಿನ ಅಶೋಕನಗರ, ಇಂದಿರಾನಗರ ಹಾಗೂ ಕೋರಮಂಗಲ ಠಾಣೆಗಳಲ್ಲಿ ಅವರು ಕರ್ತವ್ಯ ನಿರ್ವಹಿಸಿದ್ದರು. ಘಟನೆಯ ಕುರಿತು ಬೆಂಗಳೂರು ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.