ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಮತ್ತೆ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆ ಮುಸುಕಿನ ಗುದ್ದಾಟದ ನಡುವೆ 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ.
ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ತಮ್ಮ ದಾಖಲೆಯ 17ನೇ ಬಜೆಟ್ ಅನ್ನು ಮಂಡಿಸಲು ಸಜ್ಜಾಗಿದ್ದಾರೆ.
ಮಾರ್ಚ್ 6 ಬೆಳಗ್ಗೆ 10:15ಕ್ಕೆ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಮಾರ್ಚ್ 27ಕ್ಕೆ ಅಂತ್ಯವಾಗಲಿದೆ. ಒಟ್ಟು 14 ದಿನ ಬಜೆಟ್ ಅಧಿವೇಶನ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್ ಮಂಡಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಈಗಾಗಲೇ 16 ಬಾರಿ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡನೆಗೆ ತಯಾರಿ ನಡೆಸುತ್ತಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.