ಬೆಂಗಳೂರು: ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆಯ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ನಂತರ ನಗರದ ಜಗಜೀವನರಾಮ್ ನಗರದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದರೂ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಭಾನುವಾರ ರಾತ್ರಿ ಮೆರವಣಿಗೆಯ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಘಟನೆಯ ನಂತರ, ನಿವಾಸಿಗಳು ಜೆಜೆ ನಗರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ, ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಈ ಕುರಿತು ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹಸಚಿವ ಜಿ. ಪರಮೇಶ್ವರ್ ಅವರು, ಘಟನೆಗೆ ಸಂಬಂಧಿಸಿದಂತೆ ಮೂವರು ಬಾಲಕರನ್ನು ಬಂಧಿಸಲಾಗಿದೆ. ಬಂಧಿತರು 15 ಮತ್ತು 16 ವರ್ಷದ ಅಪ್ರಾಪ್ತ ವಯಸ್ಸಿನವರಾಗಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ನಡೆಯುತ್ತಿದ್ದು, ಕಾನೂನು ಪ್ರಕಾರ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು.
ಆರೋಪಿಗಳು ಅಪ್ರಾಪ್ತರಾಗಿರುವುದರಿಂದ, ಜುವೆನೈಲ್ ನಿಯಮಗಳ ಅಡಿಯಲ್ಲಿ ಪ್ರಕರಣವನ್ನು ನಿರ್ವಹಿಸಲಾಗುವುದು. ಯಾರು ಈ ಬಾಲಕರನ್ನು ಪ್ರಚೋದಿಸಿದ್ದಾರೆ ಅಥವಾ ಘಟನೆ ಹೇಗೆ ನಡೆಯಿತು ಎಂಬುದರ ಕುರಿತು ಸಂಪೂರ್ಣ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವರು ಸ್ಪಷ್ಟಪಡಿಸಿದ್ದಾರೆ.
ಇಂತಹ ಘಟನೆಗಳು ನಡೆದಾಗ ಬಿಜೆಪಿ ರಾಜಕೀಯ ಮಾಡಲು ಪ್ರಯತ್ನಿಸುತ್ತದೆ ಎಂಬ ಆರೋಪವನ್ನು ಮಾಡಿರುವ ಪರಮೇಶ್ವರ್, ಬಿಜೆಪಿ ಹೇಳಿಕೆ ನೀಡುವ ಮೊದಲೇ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಾಗಿದೆ. ಕಾನೂನು ತನ್ನದೇ ಆದ ರೀತಿಯಲ್ಲಿ ಕೆಲಸ ಮಾಡುತ್ತದೆ ಮತ್ತು ಯಾರ ಪ್ರಚೋದನೆಗೂ ಒಳಗಾಗುವುದಿಲ್ಲ ಎಂದು ಹೇಳಿದ್ದಾರೆ.
ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದು, ಜೆಜೆ ನಗರದಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ.
ವಿಎಸ್ ಗಾರ್ಡನ್ ನಿವಾಸಿ ಶಶಿಕುಮಾರ್ ಎನ್ ಅವರ ದೂರಿನ ಆಧಾರದ ಮೇಲೆ, ಪೊಲೀಸರು ಭಾನುವಾರ ತಡರಾತ್ರಿ ಎಫ್ ಐಆರ್ ದಾಖಲಿಸಿದ್ದಾರೆ.
ಶಶಿಕುಮಾರ್ ಪ್ರಕಾರ, ಭಕ್ತರು ಆ ಪ್ರದೇಶದಲ್ಲಿ ಮೆರವಣಿಗೆ ನಡೆಸುತ್ತಿದ್ದಾಗ ರಾತ್ರಿ 8.15 ರಿಂದ ರಾತ್ರಿ 9.00 ರ ನಡುವೆ ಈ ಘಟನೆ ನಡೆದಿದೆ.